ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ನಡೆದ ಚರ್ಚೆಗೆ ಸಂಬಂಧಿಸಿದಂತೆ ಕರ್ನಾಟಕ ವಿಧಾನ ಸಭೆಯಲ್ಲಿ ಶುಕ್ರವಾರ ಉತ್ತರವನ್ನು ವಿವರಿಸಿದರು.
ಗ್ಯಾರಂಟಿ ಯೋಜನೆಗಳ ಮಾತನಾಡಿದ ಸಿಎಂ, “ನಮ್ಮ ಸರ್ಕಾರದ ಪ್ರಮುಖ ಸ್ಕೀಮುಗಳಲ್ಲಿ ಗ್ಯಾರಂಟಿ ಯೋಜನೆಗಳೂ ಸೇರಿವೆ. ಮೊದಲಿಗೆ ಈ ಭಾಗದ ಜನರಿಗೆ ಕಳೆದ ಎರಡೂವರೆ ವರ್ಷಗಳಲ್ಲಿ ನಾವು ಎಷ್ಟು ಹಣವನ್ನು ಗ್ಯಾರಂಟಿ ಯೋಜನೆಗಳ ಮೂಲಕ ನೇರವಾಗಿ ಜನರ ಖಾತೆಗಳಿಗೆ ವರ್ಗಾವಣೆ ಮಾಡಿದ್ದೇವೆ ಎಂಬ ಮಾಹಿತಿಯನ್ನು ಸದನದ ಮೂಲಕ ಜನರ ಗಮನಕ್ಕೆ ತರಬೇಕಾಗಿರುವುದು ನಮ್ಮ ಜವಾಬ್ದಾರಿ” ಎಂದು ಹೇಳಿದರು.
“ನಾವು ಗ್ಯಾರಂಟಿ ಯೋಜನೆಗಳನ್ನು ಪ್ರಾರಂಭ ಮಾಡಿದ ದಿನಾಂಕದಿಂದ ಅಕ್ಟೋಬರ್- ನವೆಂಬರ್ ವರೆಗೆ ನಮ್ಮ ಸರ್ಕಾರ 106076 ಕೋಟಿ ರೂಪಾಯಿಗಳನ್ನು ವಿನಿಯೋಗಿಸಲಾಗಿದೆ. ಇದರಲ್ಲಿ 46277 ಕೋಟಿ ರೂಪಾಯಿಗಳನ್ನು ಉತ್ತರ ಕರ್ನಾಟಕದ ಜಿಲ್ಲೆಗಳ ಜನರಿಗಾಗಿ ಗ್ಯಾರಂಟಿ ಯೋಜನೆಗಳಿಗಾಗಿ ವೆಚ್ಚ ಮಾಡಲಾಗಿದೆ. ಒಟ್ಟು ವೆಚ್ಚದಲ್ಲಿ ಶೇ. 43.63 ರಷ್ಟು ಅನುದಾನಗಳು ಈ ಭಾಗದ ಜನರಿಗಾಗಿ ವೆಚ್ಚ ಮಾಡಲಾಗಿದೆ” ಎಂದು ತಿಳಿಸಿದರು.
“ಈ ಸದನದಲ್ಲಿ ಅನೇಕರಿಗೆ ಗ್ಯಾರಂಟಿ ಯೋಜನೆಗಳ ಕುರಿತು ನಕಾರಾತ್ಮಕ ಭಾವನೆಗಳಿವೆ. ಆದರೆ ಇಡೀ ದೇಶದ ಆರ್ಥಿಕತೆ ಕುಸಿಯುತ್ತಿರುವಾಗ ಕರ್ನಾಟಕ ರಾಜ್ಯದ ಆರ್ಥಿಕತೆ ಆರೋಗ್ಯಕರವಾಗಿರುವುದಕ್ಕೆ ಗ್ಯಾರಂಟಿ ಯೋಜನೆಗಳ ಕೊಡುಗೆ ಬಹಳ ದೊಡ್ಡದಿದೆ” ಎಂದರು.
“ಮಾಜಿ ಸಚಿವರುಗಳಾಗಿದ್ದ ಶಶಿಕಲಾ ಜೊಲ್ಲೆಯವರು ಮತ್ತು ಬಸವನಗೌಡ ಪಾಟೀಲ್ ಯತ್ನಾಳ್ ಅವರು ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕಗಳ ಶಾಲೆ, ಕಾಲೇಜು, ಆಸ್ಪತ್ರೆ ಮುಂತಾದವುಗಳ ಕುರಿತಂತೆ ಹಲವು ಅಂಕಿ ಅಂಶಗಳನ್ನು ಪ್ರಸ್ತಾಪಿಸಿದ್ದಾರೆ. ಅವರು ಹೇಳಿರುವ ಅಂಕಿ ಅಂಶಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕಾಗಿದೆ” ಎಂದರು.


