Homeಕರ್ನಾಟಕಗೌರಿಶಂಕರ್, ಮಂಜುನಾಥ್ ಜತೆಗೆ ಇನ್ನೂ ಬಹಳ ಮಂದಿ ಕಾಂಗ್ರೆಸ್ ಸೇರುತ್ತಾರೆ: ಸಿದ್ದರಾಮಯ್ಯ

ಗೌರಿಶಂಕರ್, ಮಂಜುನಾಥ್ ಜತೆಗೆ ಇನ್ನೂ ಬಹಳ ಮಂದಿ ಕಾಂಗ್ರೆಸ್ ಸೇರುತ್ತಾರೆ: ಸಿದ್ದರಾಮಯ್ಯ

ಜೆಡಿಎಸ್‌ನ ಮಾಜಿ ಶಾಸಕರಾದ ತುಮಕೂರು ಗ್ರಾಮಾಂತರ ಕ್ಷೇತ್ರದ ಡಿ ಎಸ್ ಗೌರಿಶಂಕರ್, ಬೆಂಗಳೂರು ದಾಸರಹಳ್ಳಿಯ ಆರ್ ಮಂಜುನಾಥ್ ಅವರು ಅಪಾರ ಬೆಂಬಲಿಗರ ಜತೆ ಬುಧವಾರ ಕಾಂಗ್ರೆಸ್‌ ಸೇರಿದರು.

ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕೆಪಿಸಿಸಿಯ ಭಾರತ್ ಜೋಡೋ ಭವನದಲ್ಲಿ ಕಾಂಗ್ರೆಸ್‌ ಸೇರ್ಪಡೆ ಕಾರ್ಯಕ್ರಮ ನಡೆಯಿತು..

ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ತುಮಕೂರು ಗ್ರಾಮಾಂತರ ಕ್ಷೇತ್ರದ ಗೌರಿಶಂಕರ್ ಮತ್ತು ದಾಸರಹಳ್ಳಿ ಮಂಜುನಾಥ್ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ಮೂಲಕ ಜಾತ್ಯತೀತ ಮತ್ತು ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

“ಜೆಡಿಎಸ್ ಈಗ ತನ್ನ ಸ್ವರೂಪದಲ್ಲಿ ಜನಸಮುದಾಯದ ರಾಜಕೀಯ ಪಕ್ಷ ಆಗಿ ಉಳಿದಿಲ್ಲ. ಕೇವಲ ಕುಟುಂಬದ ಪಕ್ಷ ಆಗಿಯಷ್ಟೆ ಸೀಮಿತವಾಗಿದೆ. ಜೆಡಿಎಸ್ ನ ಡಬ್ಬಲ್ ಗೇಮ್ ಅನ್ನು ಸರಿಯಾಗಿ ಅರ್ಥ ಮಾಡಿಕೊಂಡಿರುವ ಗೌರಿಶಂಕರ್ ಮತ್ತು ಮಂಜುನಾಥ್ ಜತೆಗೆ ಇನ್ನೂ ಬಹಳ ಮಂದಿ ಕಾಂಗ್ರೆಸ್ ಸೇರುತ್ತಿದ್ದಾರೆ. ಆ ಮೂಲಕ ತಮ್ಮ ರಾಜಕೀಯ ಜೀವನವನ್ನು ಭದ್ರ ಮಾಡಿಕೊಳ್ಳುತ್ತಿದ್ದಾರೆ” ಎಂದು ಹೇಳಿದರು.

“ನಾವಿದ್ದಾಗ ಜನತಾದಳ ಸೆಕ್ಯುಲರ್ ಆಗಿತ್ತು. ಈಗ ‘ಎಸ್’ ಕಿತ್ತೋಗಿ ಕೇವಲ ಜನತಾದಳ ಆಗಿ ಉಳಿದಿದೆ. ಹಿಂದೆಯೂ ಬಿಜೆಪಿ ಜತೆ ಕೈ ಜೋಡಿಸಿದ್ದ ಕಾರಣಕ್ಕೆ ಜನತಾ ಪರಿವಾರದಲ್ಕಿ ಸೆಕ್ಯುಲರ್ ಸಿದ್ದಾಂತದವರೆಲ್ಲಾ ಪ್ರತ್ಯೇಕವಾಗಿ ಉಳಿದೆವು. ಈಗ ಜೆಡಿಎಸ್ ಮತ್ತೆ ಬಿಜೆಪಿ ಜತೆ ಬೆರೆಯುತ್ತಿದೆ. ನಾನು ಈ ಜೆಡಿಎಸ್ ಅನ್ನು ಬಿಜೆಪಿಯ ‘ಬಿ’ ಟೀಮ್ ಅಂದಿದ್ದಕ್ಕೆ ಸಿಟ್ಟಾಗಿದ್ದರು. ಅಂದು ನಾನು ಹೇಳಿದ್ದನ್ನು ಇಂದು ಅವರೇ ಸಾಬೀತುಪಡಿಸಿದ್ದಾರೆ” ಎಂದರು.

ನಿಮಗೆ ನಾಚಿಕೆ ಆಗಲ್ವಾ ಮೋದಿಯವರೇ?

“ನಾವು ಗ್ಯಾರಂಟಿ ಕಾರ್ಯಕ್ರಮಗಳನ್ನು ಕೊಟ್ಟಾಗ ಅವನ್ನು ಟೀಕಿಸಿದ್ದ ಪ್ರಧಾನಿಗಳು ಈಗ ‘ಮೋದಿ ಗ್ಯಾರಂಟಿ’ ಹೆಸರಿನಲ್ಲಿ ಪ್ರಚಾರ ಮಾಡುತ್ತಿದ್ದಾರೆ ಎಂದು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು ಪ್ರಧಾನಿ ಮೋದಿಯವರೇ, ನಿಮಗೆ ನಾಚಿಕೆ ಆಗತ್ತೋ ಇಲ್ವೋ” ಎಂದು ಪ್ರಶ್ನಿಸಿದರು.

“ರಾಜ್ಯದ, ಕನ್ನಡ ನಾಡಿನ ಜನತೆಯ ಹಣ ಇರುವ ಸರ್ಕಾರದ ಕಾರ್ಯಕ್ರಮಗಳನ್ನು ಪ್ರಧಾನಿ ಮೋದಿಯವರು ತಮ್ಮ ಕಾರ್ಯಕ್ರಮ ಎಂದು ಬಿಂಬಿಸಿ ಪ್ರಚಾರ ಪಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿ. ಇದಕ್ಕೆ ರಾಜ್ಯದ ಜನತೆಯ ಮತ್ತು ನಮ್ಮಗಳ ಬೆಂಬಲ ಇಲ್ಲ” ಎಂದು ಸ್ಪಷ್ಟಪಡಿಸಿದರು.

ಕೆಪಿಸಿಸಿ ಉಪಾಧ್ಯಕ್ಷ ಬಿ ಎಲ್ ಶಂಕರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಶಾಸಕರಾದ ನರೇಂದ್ರಸ್ವಾಮಿ, ಡಾ. ರಂಗನಾಥ, ನೆಲಮಂಗಲ ಶ್ರೀನಿವಾಸಯ್ಯ, ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ತಿನ ಸದಸ್ಯ ಕೆ ಗೋವಿಂದರಾಜು, ನಸೀರ್ ಅಹಮದ್ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments