Homeಕರ್ನಾಟಕಈ ಬಾರಿ11 ದಿನಗಳ ಕಾಲ ದಸರಾ, ಸೆಪ್ಟಂಬರ್‌ 22ಕ್ಕೆ ಚಾಲನೆ: ಸಿಎಂ ಸಿದ್ದರಾಮಯ್ಯ

ಈ ಬಾರಿ11 ದಿನಗಳ ಕಾಲ ದಸರಾ, ಸೆಪ್ಟಂಬರ್‌ 22ಕ್ಕೆ ಚಾಲನೆ: ಸಿಎಂ ಸಿದ್ದರಾಮಯ್ಯ

ಸೆಪ್ಟಂಬರ್‌ 22ರಂದು ದಸರಾ ಹಬ್ಬಕ್ಕೆ ಚಾಲನೆ ದೊರೆಯಲಿದ್ದು, ಅಕ್ಟೋಬರ್‌ 2ರಂದು ವಿಜಯದಶಮಿ, ಜಂಬೂ ಸವಾರಿ ನಡೆಯಲಿದೆ. ದಸರಾ ಈ ಬಾರಿ 10ದಿನಗಳ ಬದಲು 11ದಿನಗಳ ಕಾಲ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಶನಿವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ನಾಡಹಬ್ಬ ಮೈಸೂರು ದಸರಾ-2025 ಆಚರಣೆ ಕುರಿತ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಸೂಚನೆಗಳನ್ನು ನೀಡಿ ಮಾತನಾಡಿದರು. “ಸರ್ಕಾರದ ಸಾಧನೆಗಳು, ನಾವು ಪ್ರತೀ ಇಲಾಖೆಯಲ್ಲೂ ಜಾರಿ ಮಾಡಿರುವ ಜನಪರ ಕಾರ್ಯಕ್ರಮಗಳು ಜನರಿಗೆ ಸಮರ್ಪಕವಾಗಿ ಮನವರಿಕೆ ಆಗುವ ರೀತಿಯಲ್ಲಿ ಯೋಜನೆ ರೂಪಿಸಬೇಕು. ಈ ಬಾರಿ ರಾಜ್ಯದಾದ್ಯಂತ ಮಳೆ ಬೆಳೆ ಉತ್ತಮವಾಗಿದ್ದು, ನದಿ, ಕೆರೆಗಳು ತುಂಬಿದ್ದು, ವೈಭವದಿಂದ ದಸರಾ ಆಚರಿಸಲಾಗುವುದು. ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ” ಎಂದು ಸೂಚನೆ ನೀಡಿದರು. “ಕಳೆದ ವರ್ಷ ದಸರಾ ಆಚರಣೆಗೆ ಒಟ್ಟು ರೂ. 40 ಕೋಟಿ ಅನುದಾನ ಒದಗಿಸಲಾಗಿತ್ತು. ಈ ಬಾರಿ ಅದ್ದೂರಿಯಾಗಿ ದಸರಾ ಆಚರಣೆಗೆ ಬೇಕಾದಷ್ಟು ಅನುದಾನವನ್ನು ಒದಗಿಸಲಾಗುವುದು. ಸರ್ಕಾರದ ಸಾಧನೆಗಳನ್ನು ಮತ್ತು ಇಲಾಖಾ ಕಾರ್ಯಕ್ರಮಗಳನ್ನು ಸರಿಯಾಗಿ ಪ್ರತಿಬಿಂಬಿಸುವಂತಹ ವಸ್ತು ಪ್ರದರ್ಶನ, ಸ್ತಬ್ಧಚಿತ್ರ ಪ್ರದರ್ಶನ ಆಯೋಜಿಸಬೇಕು. ಅಕ್ಟೋಬರ್‌ 2ರಂದು ವಿಜಯದಶಮಿ ಬಂದಿರುವ ಕಾರಣ ಸ್ತಬ್ಧ ಚಿತ್ರಗಳಲ್ಲಿ ಗಾಂಧೀಜಿ ವಿಚಾರಧಾರೆಗಳಿಗೆ ಸಹ ಅವಕಾಶ ಕಲ್ಪಿಸಬೇಕು. ಕಲ್ಯಾಣ ಕಾರ್ಯಕ್ರಮಗಳು, ಗ್ಯಾರಂಟಿ ಯೋಜನೆಗಳ ಮಾಹಿತಿ ಒದಗಿಸಲು ವ್ಯವಸ್ಥೆ ಮಾಡಬೇಕು” ಎಂದರು. “ದಸರಾ ಸಂದರ್ಭದಲ್ಲಿ ಜನದಟ್ಟಣೆ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಬೇಕು. 10ಲಕ್ಷಕ್ಕೂ ಹೆಚ್ಚು ಮಂದಿ ಸೇರುವ ಸಂದರ್ಭ ಇದಾಗಿದೆ. ವಿದೇಶಿಗರೂ ಹೆಚ್ಚಿನ ಪ್ರಮಾಣದಲ್ಲಿ ಆಗಮಿಸುತ್ತಾರೆ. ಯಾವುದೇ ಕಾರಣಕ್ಕೂ ಅನಾಹುತ ಸಂಭವಿಸದಂತೆ ಎಲ್ಲಾ ಕಡೆ ಮುನ್ನೆಚ್ಚರಿಕೆ ವಹಿಸಬೇಕು. ಅರಮನೆ ಮುಂಭಾಗದಲ್ಲಿ ಆಸನದ ವ್ಯವಸ್ಥೆಯನ್ನು ಕಳೆದ ಬಾರಿಗಿಂತ ಈ ಬಾರಿ ಕಡಿಮೆ ಮಾಡಿ ಜನದಟ್ಟಣೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಿ. ಪೊಲೀಸರು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು” ಎಂದು ಹೇಳಿದರು. “ಚಾಮುಂಡಿ ಬೆಟ್ಟಕ್ಕೆ ಹೋಗುವ ರಸ್ತೆ, ಕೆಆರ್‌ಎಸ್‌ಗೆ ಹೋಗುವ ರಸ್ತೆ ಸೇರಿದಂತೆ ಎಲ್ಲಾ ಪ್ರಮುಖ ರಸ್ತೆಗಳನ್ನು ದುರಸ್ತಿ ಮಾಡುವ ಕಾರ್ಯವನ್ನು ಈಗಲೇ ಆರಂಭಿಸಬೇಕು. ಜಾನಪದ ಕಲೆಗಳನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸಬೇಕು. ಜಾನಪದ ಪ್ರದರ್ಶನದಲ್ಲಿ ಏಕತಾನತೆ ಇಲ್ಲದಂತೆ ನೋಡಿಕೊಳ್ಳಬೇಕು. ಕಳೆದ ಬಾರಿ ವಿದ್ಯುತ್‌ ದೀಪ ಅಲಂಕಾರವನ್ನು ವೈಭವದಿಂದ ಮಾಡಲಾಗಿತ್ತು. ಇದಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈ ಬಾರಿಯೂ ವಿದ್ಯುತ್‌ ದೀಪಾಲಂಕಾರವನ್ನು ಇನ್ನಷ್ಟು ಉತ್ತಮವಾಗಿ ಮಾಡಬೇಕು. ಎಲ್ಲ ಜಿಲ್ಲೆಗಳಿಂದ ಆಗಮಿಸುವ ಸ್ತಬ್ಧಚಿತ್ರಗಳು ವೈವಿಧ್ಯಮಯವಾಗಿರುವಂತೆ ನೋಡಿಕೊಳ್ಳಬೇಕು. ವಸ್ತು ಪ್ರದರ್ಶನದ ಮಳಿಗೆಗಳು ಉದ್ಘಾಟನೆ ಸಂದರ್ಭದಲ್ಲೇ ಪೂರ್ಣ ಪ್ರಮಾಣದಲ್ಲಿ ಸಜ್ಜುಗೊಂಡಿರಬೇಕು. ಯಾವುದೇ ಮಳಿಗೆಗಳು ಖಾಲಿಯಿರಬಾರದು” ಎಂದು ಸೂಚಿಸಿದರು. “ಗೋಲ್ಡ್ ಕಾರ್ಡ್‌ ಯಾವುದೇ ಗೊಂದಲಕ್ಕೆ ಆಸ್ಪದವಾಗದಂತೆ ವಿತರಿಸಬೇಕು. ಮೈಸೂರು ನಗರದ ಸೌಂದರ್ಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ದಸರಾ ವೀಕ್ಷಿಸಲು ಆಗಮಿಸುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಶೌಚಾಲಯ, ವಾಹನ ಪಾರ್ಕಿಂಗ್‌ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಬೇಕು. ಈ ಬಾರಿಯೂ ದೊಡ್ಡ ಪ್ರಮಾಣದಲ್ಲಿ ಡ್ರೋಣ್‌ ಶೋ ಆಯೋಜಿಸಲಾಗುವುದು” ಎಂದು ತಿಳಿಸಿದರು. “ದಸರಾ ಸಂದರ್ಭದಲ್ಲಿ ಅಧಿಕಾರಿಗಳು ಜನಸಾಮಾನ್ಯರಿಗೆ ದೊರೆಯುವುದಿಲ್ಲ ಎಂಬ ದೂರುಗಳಿದ್ದು, ಇದಕ್ಕೆ ಈ ಬಾರಿ ಅವಕಾಶ ನೀಡಬಾರದು. ಜನಸಾಮಾನ್ಯರ ಕೆಲಸ ಕಾರ್ಯಗಳು, ಅಭಿವೃದ್ದಿ ಕಾರ್ಯಗಳು ಯಾವುದೇ ಕಾರಣಕ್ಕೂ ಕುಂಠಿತವಾಗಬಾರದು” ಎಂದರು. ಈ ಬಾರಿ ದಸರಾ ಉದ್ಘಾಟನೆಗೆ ಯಾರನ್ನು ಆಹ್ವಾನಿಸಬೇಕು ಎಂಬುವುದನ್ನು ಮುಖ್ಯಮಂತ್ರಿ ಅವರ ವಿವೇಚನೆಗೆ ಬಿಡಲು ಸಭೆಯಲ್ಲಿ ನಿರ್ಧರಿಸಲಾಯಿತು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್‌, ಶಿವರಾಜ ತಂಗಡಗಿ, ಕೆ. ವೆಂಕಟೇಶ್, ಸುರೇಶ್‌ ಭೈರತಿ, ಜಿ.ಟಿ.ದೇವೇಗೌಡ, ರಮೇಶ್‌ ಬಂಡಿಸಿದ್ದೇಗೌಡ, ಪುಟ್ಟರಂಗಶೆಟ್ಟಿ,, ತನ್ವೀರ್‌ ಸೇಠ್‌, ಡಾ.ಯತೀಂದ್ರ ಎಸ್‌, ಡಾ.ಡಿ.ತಿಮ್ಮಯ್ಯ, ಅನಿಲ್‌ ಕುಮಾರ್, ಎ.ಆರ್.ಕೃಷ್ಣಮೂರ್ತಿ, ಮಧು ಜಿ ಮಾದೇಗೌಡ, ಕೆ.ಹರೀಶ್‌ ಗೌಡ, ದರ್ಶನ್‌ ಧ್ರುವನಾರಾಯಣ, ಡಾ.ಮಾನಸ, ಪುಷ್ಪಾ ಅಮರನಾಥ್, ಅಯೂಬ್‌ ಖಾನ್, ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಮತ್ತಿತರರು ಉಪಸ್ಥಿತರಿದ್ದರು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments