Homeಕರ್ನಾಟಕನಂದಿಬೆಟ್ಟ ವಿಶೇಷ ಸಚಿವ ಸಂಪುಟ ಸಭೆ | ಬೆಂಗಳೂರು ಕಂದಾಯ ವಿಭಾಗಕ್ಕೆ 3,400 ಕೋಟಿ ರೂ....

ನಂದಿಬೆಟ್ಟ ವಿಶೇಷ ಸಚಿವ ಸಂಪುಟ ಸಭೆ | ಬೆಂಗಳೂರು ಕಂದಾಯ ವಿಭಾಗಕ್ಕೆ 3,400 ಕೋಟಿ ರೂ. ಅನುಮೋದನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬುಧವಾರ (ಜು.2) ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ನಡೆದ ಬೆಂಗಳೂರು ಕಂದಾಯ ವಿಭಾಗದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಒಂದಿಷ್ಟು ಮಹತ್ವದ ತೀರ್ಮಾನಗಳನ್ನು ಕೈಗೊಂಡಿತು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆಯನ್ನಾಗಿ ಮಾಡಲು ಕಾಂಗ್ರೆಸ್‌ ಸರ್ಕಾರ ಮುಂದಾಗಿದ್ದು, ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಹ ಗ್ರೀನ್ ಸಿಗ್ನಲ್ ಸಿಕ್ಕಿದೆ.

ಪ್ರತಿಪಕ್ಷಗಳ ವಿರೋಧದ ನಡುವೆಯೂ ರಾಮನಗರ ಜಿಲ್ಲೆ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಹಿಂದೆ ಸರ್ಕಾರ ಮರುನಾಮಕರಣ ಮಾಡಿದೆ. ಈಗ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇನ್ಮುಂದೆ ಬೆಂಗಳೂರು ಉತ್ತರವಾಗಲಿದೆ. ತುಮಕೂರು ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ಎಂದು ಹೆಸರಿಸಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಸೇರಿ ಕೆಲವರು ಒತ್ತಾಯಿಸಿದ್ದರು. ಈ ವಿಚಾರ ಸಚಿವ ಸಂಪುಟದಲ್ಲಿ ಚರ್ಚೆಗೆ ಬರಲಿಲ್ಲ.

ಹಾಗೆಯೇ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಹೆಸರು ಬದಲಾವಣೆಗೂ ಒಪ್ಪಿಗೆ ಸೂಚಿಸಿದ್ದು, ಭಾಗ್ಯನಗರ ಎಂದು ಮರು ನಾಮಕರಣಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ಸಚಿವ ಸಂಪುಟ ಸಭೆಯ ನಿರ್ಣಯಗಳು

ಶೇ.90 ರಷ್ಟು ಬೆಂಗಳೂರು ವಿಭಾಗದ ವಿಷಯಗಳನ್ನೇ ವಿಶೇಷ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗಿದೆ. ಒಟ್ಟು 48 ವಿಷಯಗಳು ಚರ್ಚೆಯಾದವು. ಆರೋಗ್ಯ, ಶಿಕ್ಷಣ, ಕೃಷಿ, ತೋಟಗಾರಿಕೆ, ನೀರಾವರಿ, ಪ್ರವಾಸೋದ್ಯಮ, ರಸ್ತೆ- ಸೇತುವೆ ಮುಂತಾದ ವಿಷಯಗಳಿಗೆ ಆದ್ಯತೆ ನೀಡಿ, 3400 ಕೋಟಿ ರೂ.ಗಳಿಗೆ ಅನುಮೋದನೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು.

ಸಚಿವ ಸಂಪುಟ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿ, “2,050 ಕೋಟಿ ರೂ. ಬೆಂಗಳೂರು ಜಿಲ್ಲಾ ಭಾಗಕ್ಕೆ ಕೊಟ್ಟಿದ್ದೇವೆ. ಎತ್ತಿನಹೊಳೆ ಯೋಜನೆಗೆ ಒಟ್ಟು 23,251 ಕೋಟಿ ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇಲ್ಲಿಯವರೆಗೂ 17,147 ಕೋಟಿ ಖರ್ಚಾಗಿದೆ. ಮೂಲತಃ ಕುಡಿಯುವ ನೀರಿನ ಯೋಜನೆ ಇದಾಗಿದೆ. ಕೆರೆಗಳಿಗೆ ನೀರು ತುಂಬಿಸುವುದು ನಂತರದ ಆದ್ಯತೆ” ಎಂದರು.

“24.1 TMC ನೀರಿನಲ್ಲಿ ಕುಡಿಯುವ ನೀರಿಗೆ 14 TMC ಬೇಕಾಗಿದೆ. ಆದ್ದರಿಂದ ಮೊದಲು ಕುಡಿಯುವ ನೀರನ್ನು ಕೊಡುವ ಯೋಜನೆ ಮುಗಿಸಲು ಸಂಪುಟ ಸಭೆ ತೀರ್ಮಾನ ಮಾಡಿದೆ. ಎರಡು ವರ್ಷಗಳಲ್ಲಿ ಉದ್ದೇಶಿತ ಜಿಲ್ಲೆ, ತಾಲ್ಲೂಕುಗಳಿಗೆ ನೀರು ಕೊಡುತ್ತೇವೆ. 9,807ಕೋಟಿ ರೂ. ಮೊತ್ತದಲ್ಲಿ ಗ್ರಾವಿಟಿ ಮುಖ್ಯ ಕೆನಲ್‌ನ ಕೆಲಸ 85% ಮಗಿದಿದೆ. ಹೆಚ್ಚುವರಿಯಾಗಿ ಇದಕ್ಕೆ 8,000 ಕೋಟಿ ಬೇಕಾಗಿದೆ. ಬಾಕಿ ಉಳಿದಿರುವುದು 6,000 ಚಿಲ್ಲರೆ ಕೋಟಿ. ಒಟ್ಟು 9 ಜಿಲ್ಲೆಗಳ 75 ಲಕ್ಷ ಜನರಿಗೆ ಕುಡಿಯುವ ನೀರು ಕೊಡುತ್ತೇವೆ” ಎಂದು ಭರವಸೆ ನೀಡಿದರು.

“ಬೆಂಗಳೂರು ಜಿಲ್ಲೆಗಳ 31 ವಿಷಯಗಳು ಚರ್ಚೆಯಾಗಿ 2,250 ಕೋಟಿ ರೂ. ಮಂಜೂರು ಮಾಡಲಾಗಿದೆ. ಪ್ರತೀ ಜಿಲ್ಲೆಯಲ್ಲಿ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ನಿರ್ಮಿಸಲು ತೀರ್ಮಾನಿಸಲಾಗಿದ್ದು, ಇದಕ್ಕೆ 1125.25 ಕೋಟಿ ರೂ. ಮಂಜೂರು ಮಾಡಲಾಗಿದೆ. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ನೀರಾವರಿ ಯೋಜನೆ, ಕೆರೆ ತುಂಬಿಸುವ ಯೋಜನೆಗಳನ್ನೇ ಪ್ರಮುಖವಾಗಿ ಚರ್ಚಿಸಲಾಗಿದೆ” ಎಂದು ತಿಳಿಸಿದರು.

ಬೆಂಗಳೂರು ಕೇಂದ್ರ ವಿವಿ ಹೆಸರು ಬದಲು

“ಹಿಂದುಳಿದ ವರ್ಗದ ಅಭ್ಯರ್ಥಿಗಳು IAS, IRS, IPS ಸೇರಿ ಸ್ಪರ್ಧಾತ್ಮಕ ಪರೀಕ್ಷಾ‌ ತರಬೇತಿಗೆ 10 ಕೋಟಿ ರೂ. ವೆಚ್ಚದ ಎರಡು ವಸತಿ ಶಾಲೆ ಬೆಂಗಳೂರಿನಲ್ಲಿ ನಿರ್ಮಿಸಲಾಗುವುದು. ಬೆಂಗಳೂರು ಕೇಂದ್ರ ವಿವಿಗೆ “ಡಾ.ಮನಮೋಹನ್ ಸಿಂಗ್ ಬೆಂಗಳೂರು ಸಿಟಿ ವಿವಿ” ಎಂದು ಹೆಸರಿಡಲು ತೀರ್ಮಾನ ಮಾಡಲಾಗಿದೆ. PHC ಗಳಿಲ್ಲದ ಹೊಸ ತಾಲ್ಲೂಕುಗಳಲ್ಲಿ CHC ಗಳನ್ನು ಆರಂಭಿಸಲು ತೀರ್ಮಾನ ಮಾಡಿದ್ದೇವೆ” ಎಂದರು.

ಸಿದ್ದರಾಮಯ್ಯ (17)

ಎತ್ತಿನಹೊಳೆ ಯೋಜನೆಯ ಕುರಿತು ವಿಸ್ತೃತ ಚರ್ಚೆ

“ಈ ಸಭೆಯಲ್ಲಿ ಅತ್ಯಂತ ಮುಖ್ಯವಾಗಿ ಕುಡಿಯುವ ನೀರಿನ ಯೋಜನೆಗಳು ಅದರಲ್ಲೂ ಮುಖ್ಯವಾಗಿ ಎತ್ತಿನಹೊಳೆ ಯೋಜನೆಯ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು. ಕಳೆದ ವರ್ಷವೇ ಎತ್ತಿನ ಹೊಳೆಯ ನೀರನ್ನು ಎತ್ತಿನ ಯಶಸ್ವಿಯಾಗಿ ಹರಿಸಲಾಯಿತು. ಸಭೆಯಲ್ಲಿ ನಾವು ಎತ್ತಿನಹೊಳೆ ಯೋಜನೆಯನ್ನು ವೇಗಗೊಳಿಸಲು ಹಾಗೂ ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಹಳ್ಳಿಗಳಿಗೆ ಹರಿಸಲು ನಿರ್ದೇಶನಗಳನ್ನು ನೀಡಲಾಯಿತು. ಇದರಲ್ಲಿ ಬೆಂಗಳೂರು ವಿಭಾಗದ ಜಿಲ್ಲೆಗಳಿಗೆ ಸಂಬಂಧಿಸಿದಂತೆ 31 ವಿಷಯಗಳಿಗೆ 2525 ಕೋಟಿ ರೂಗಳನ್ನು ಒದಗಿಸುವ ಕಾಮಗಾರಿ/ ಯೋಜನೆಗಳ ಕುರಿತು ಚರ್ಚಿಸಿ ಅನುಮೋದನೆ ನೀಡಲಾಯಿತು” ಎಂದು ಹೇಳಿದರು.

“ಶಿಕ್ಷಣಕ್ಕೆ- 1627.25 ಕೋಟಿ ರೂ ನೀಡಿದ್ದೇವೆ. ಇದರಲ್ಲಿ ಕಾಲೇಜು, ವಿಶ್ವವಿದ್ಯಾಲಯಗಳ ಮೂಲಭೂತ ಸೌಕರ್ಯ ಒದಗಿಸುತ್ತಿದ್ದೇವೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ 1125.25 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ಅನುಮೋದನೆ ನೀಡಿದ್ದೇವೆ. ನೀರಾವರಿ ಯೋಜನೆಗಳಿಗೆ – 1154 ಕೋಟಿ ನೀಡಿದ್ದೇವೆ. ಇದರಲ್ಲಿ 237 ಕೋಟಿ ರೂಗಳನ್ನು ಬೆಂಗಳೂರಿನ ತ್ಯಾಜ್ಯ ನೀರನ್ನು ಶುದ್ಧೀಕರಣ ಮಾಡಿ ಶಿಡ್ಲಘಟ್ಟ ಮತ್ತು ಚಿಂತಾಮಣಿ ತಾಲ್ಲೂಕಿನ 164 ಕೆರೆಗಳಿಗೆ ತುಂಬಿಸುವ ಯೋಜನೆಗೆ ಅನುಮೋದನೆ ನೀಡಿದ್ದೇವೆ” ಎಂದು ತಿಳಿಸಿದರು.

ಹೈಟೆಕ್ ಹೂವಿನ ಮಾರುಕಟ್ಟೆ ಸ್ಥಾಪನೆ

“ಈ ಭಾಗದಲ್ಲಿ ಅತಿ ಹೆಚ್ಚಾಗಿ ಗುಣಮಟ್ಟದ ಹೂ ಬೆಳೆಯುತ್ತಾರೆ. ಆದ್ದರಿಂದ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರವನ್ನು 10 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಅನುಮೋದನೆ ಮಾಡಲಾಗಿದೆ. ಇದರ ಜೊತೆಗೆ ಚಿಕ್ಕಬಳ್ಳಾಪುರದಲ್ಲಿ ಎಪಿಎಂಸಿ ವತಿಯಿಂದ 141.5 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಹೂವಿನ ಮಾರುಕಟ್ಟೆ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ” ಎಂದರು.

“ಆರೋಗ್ಯ ಇಲಾಖೆ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 46 ಕೋಟಿ ರೂ ವೆಚ್ಚದಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳಾಗಿ ಅಭಿವೃದ್ಧಿ ಪಡಿಸಲು ಹಾಗೂ 21.40 ಕೋಟಿ ವೆಚ್ಚದಲ್ಲಿ ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿಯಲ್ಲಿನ ಮೆಡಿಕಲ್ ಕಾಲೇಜುಗಳಿಗೆ ಎಂಆರ್ ಐ ಯಂತ್ರಗಳನ್ನು ಖರೀದಿಸಲು ಅನುಮತಿ ನೀಡಲಾಗಿದೆ. ಹಾಗೂ 56 ಕೋಟಿ ರೂ ವೆಚ್ಚದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಕೈವಾರ ಪಿಎಚ್ ಸಿ, ಹಾಗೂ ಮಂಚೇನಹಳ್ಳಿಯ ಆಸ್ಪತ್ರೆಗಳನ್ನು ಉನ್ನತೀಕರಿಸಲು ಹಾಗೂ ಹೆಚ್ಚುವರಿ ಕಾಮಗಾರಿ ತೆಗೆದುಕೊಳ್ಳಲು ತೀರ್ಮಾನಿಸಿದ್ದೇವೆ. ಒಟ್ಟಾರೆ 123 ಕೋಟಿ ರೂ. ವೆಚ್ಚದಲ್ಲಿ ಆರೋಗ್ಯ ಸಂಬಂಧಿತ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ” ಎಂದು ಹೇಳಿದರು.

“ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಇದುವರೆಗೆ ಆಗಿರುವ ಪ್ರಗತಿ, ಆಗಬೇಕಾಗಿರುವ ಕ್ರಮಗಳು ಸೇರಿದಂತೆ ಹಲವು ವಿಷಯಗಳ ಕುರಿತು ಪರಿಶೀಲಿಸಲು ಹೆಚ್ ಕೆ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ” ಎಂದು ಸಿಎಂ ವಿವರಿಸಿದರು

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments