ಪ್ರಮುಖ ಧಾರ್ಮಿಕ ಕ್ಷೇತ್ರವಾದ ಧರ್ಮಸ್ಥಳದಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅತ್ಯಾಚಾರ, ನಿಗೂಢ ಕೊಲೆಯ ಅಪರಾಧ ಕೃತ್ಯಗಳ ಪ್ರಕರಣ ಈಗ ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದು, ಸರಕಾರ ಕೊನೆಗೂ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿದೆ.
ಧರ್ಮಸ್ಥಳದ ಸುತ್ತಲಿನ ಅರಣ್ಯ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ಇತ್ತೀಚೆಗೆ ತಲೆ ಬುರಡೆ ಸಮೇತ ಪೊಲೀಸರ ಮುಂದೆ ಹಾಜರಾಗಿ, ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ. ಇದನ್ನು ಉಲ್ಲೇಖಿಸಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವಂತೆ ಕೋರಿದ್ದರು.
ಮಹಿಳಾ ಆಯೋಗದ ಅಧ್ಯಕ್ಷರ ಮನವಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರ, ಬೆಂಗಳೂರು ಆಂತರಿಕ ವಿಭಾಗದ ಪೊಲೀಸ್ ಮಹಾ ನಿರ್ದೇಶಕ ಡಾ. ಪ್ರಣವ ಮೊಹಾಂತಿ ನೇತೃತ್ವದಲ್ಲಿ ಎಸ್ಐಟಿ ರಚಿಸಿದೆ. ಎಸ್ಐಟಿ ತಂಡದಲ್ಲಿ ನೇಮಕಾತಿ ವಿಭಾಗದ ಉಪ ಪೊಲೀಸ್ ಮಹಾ ನಿರೀಕ್ಷಕ ಎಂ ಎನ್ ಅನುಚೇತ್, ಸಿಎಆರ್ ಕೇಂದ್ರಸ್ಥಾನದ ಉಪ ಪೊಲೀಸ್ ಆಯುಕ್ತರಾದ ಸೌಮ್ಯಲತಾ ಹಾಗೂ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ತಂಡದ ಸದಸ್ಯರಾಗಿದ್ದಾರೆ.
ಧರ್ಮಸ್ಥಳದಲ್ಲಿನ ಸರಣಿ ಹತ್ಯೆ ಪ್ರಕರಣವೂ ಸೇರಿದಂತೆ ಹಾಗೂ ಇದರ ಸಂಬಂಧ ಕರ್ನಾಟಕ ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ / ದಾಖಲಾಗುವ ಇತರ ಎಲ್ಲಾ ಕ್ರಿಮಿನಲ್ ಪ್ರಕರಣಗಳ ತನಿಖೆಯನ್ನು ಡಿಜಿ ಮತ್ತು ಐಜಿಪಿ ರವರು ಈ ವಿಶೇಷ ತನಿಖಾ ತಂಡ (Special Investigation Team)ಕ್ಕೆ ವರ್ಗಾಯಿಸುವುದು ಹಾಗೂ ವಿಶೇಷ ತನಿಖಾ ತಂಡಕ್ಕೆ ಅವಶ್ಯವಿರುವ ಇತರೆ ಅಧಿಕಾರಿ/ಸಿಬ್ಬಂದಿಗಳನ್ನು ಒದಗಿಸುವುದು. ಈ ವಿಶೇಷ ತನಿಖಾ ತಂಡವು (Special Investigation Team) ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಳ್ಳುವುದು. ವಿಶೇಷ ತನಿಖಾ ತಂಡವು ತನಿಖೆಗೆ ಸಂಬಂಧಿಸಿದ ತನಿಖಾ ಪ್ರಗತಿಯನ್ನು ಆಗಿಂದಾಗ್ಗೆ ಡಿಜಿ ಮತ್ತು ಐಜಿಪಿ ರವರಿಗೆ ವರದಿ ಮಾಡಲು ಸೂಚಿಸಲಾಗಿದೆ.
ವಿಶೇಷ ತನಿಖಾ ತಂಡವು ಮೇಲ್ಕಂಡ ವಿಷಯಕ್ಕೆ ದಾಖಲಾಗಿರುವ ಪ್ರಕರಣ ಹಾಗೂ ಇದರ ಸಂಬಂಧ ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗುವ ಎಲ್ಲಾ ಪ್ರಕರಣಗಳ ಸಮಗ್ರ ತನಿಖೆಯನ್ನು ನಡೆಸಿ, ತನಿಖಾ ವರದಿಯನ್ನು ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾನಿರೀಕ್ಷಕರು, ಬೆಂಗಳೂರು ಅವರ ಮುಖಾಂತರ ಶೀಘ್ರವಾಗಿ ಸರ್ಕಾರಕ್ಕೆ ಸಲ್ಲಿಸಲು ಆದೇಶಲ್ಲಿ ಸೂಚಿಸಲಾಗಿದೆ.