ನಟಿ ರಮ್ಯಾಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ. ಉಳಿದ 11 ಜನರಿಗೆ ನಡುಕ ಶುರುವಾಗಿದೆ. ಪೊಲೀಸರು ಅವರ ಬಂಧನಕ್ಕೆ ಹುಡುಕಾಟ ನಡೆಸುತ್ತಿದ್ದಾರೆ.
ನಟಿ ರಮ್ಯಾ ಅವರ ದೂರಿನನ್ವಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಬಂದ ಕಾಮೆಂಟ್, ಮೆಸೇಜ್‌ಗಳನ್ನು ಪರಿಶೀಲಿಸಿ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದ 13 ಜನರನ್ನು ಗುರುತಿಸಲಾಗಿದೆ. ಆ ಪೈಕಿ ಇಬ್ಬರನ್ನು ಸಿಸಿಬಿ ಸೈಬರ್ ಪೊಲೀಸರು ಬಂಧಿಸಿದ್ದಾರೆ.
ರಮ್ಯಾ ಅವರು ಇತ್ತೀಚೆಗೆ ರೇಣುಕಾಸ್ವಾಮಿ ಪರ ಮಾತನಾಡಿದ್ದರು. ಸುಪ್ರೀಂ ಕೋರ್ಟ್ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯುವಾಗ ‘ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗೋ ಭರವಸೆ ಇದೆ’ ಎಂದಿದ್ದರು. ಇದು ದರ್ಶನ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣ ಆಗಿತ್ತು. ದರ್ಶನ್ ಫ್ಯಾನ್ಸ್ ರಮ್ಯಾ ಅವರ ಸೋಶಿಯಲ್ ಮೀಡಿಯಾ ಪೋಸ್ಟ್ಗಳ ಕಮೆಂಟ್ ಬಾಕ್ಸ್ನಲ್ಲಿ ಅಶ್ಲೀಲ ಕಮೆಂಟ್ಗಳನ್ನು ಮಾಡಿದ್ದರು.
ಸಾಮಾಜಿಕ ಜಾಲತಾಣಗಳ ಮೂಲಕ ನಡೆಯುವ ಈ ರೀತಿಯ ಕೃತ್ಯಗಳನ್ನು ತಡೆಯಲು ಮಾನಿಟರಿಂಗ್ ಟೀಂಗಳಿಗೆ ಹೆಚ್ಚಿನ ತರಬೇತಿ ಕೊಡಿಸಿ ಚುರುಕುಗೊಳಿಸಲಾಗಿದೆ. ಸಿಸಿಬಿ ಹಾಗೂ ನಗರದ 8 ಸೈಬರ್ ಕ್ರೈಂ ಠಾಣೆಗಳ ಸಿಬ್ಬಂದಿ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಮುಂದೆಯೂ ಸಹ ಯಾರಾದರೂ ಈ ರೀತಿ ಇತರರ ಬಗ್ಗೆ ಅಶ್ಲೀಲ ಸಂದೇಶ, ಕಾಮೆಂಟ್ ರವಾನಿಸಿದರೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.
ಬಳ್ಳಾರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿರುವ ಸುಮಾರು 50 ಖಾತೆಗಳ ಬಳಕೆದಾರರನ್ನು ಪತ್ತೆಹಚ್ಚಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ನಗರದ ಹೊರವಲಯದಲ್ಲಿನ ಕೆಲ ವ್ಯಕ್ತಿಗಳ ಖಾತೆಗಳಿಂದಲೂ ಮೆಸೇಜ್ ಹಾಗೂ ಕಾಮೆಂಟ್ ಮಾಡಿರುವುದು ತಿಳಿದು ಬಂದಿದ್ದು, ಅವುಗಳ ಬಳಕೆದಾರರ ಪತ್ತೆ ಕಾರ್ಯ ಮುಂದುವರೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಟ ದರ್ಶನ್ ಅಭಿಮಾನಿಗಳು ಎಂದು ಹೇಳಿಕೊಂಡು ಅಶ್ಲೀಲ ಸಂದೇಶ ರವಾನೆ, ಕಾಮೆಂಟ್ ಮಾಡುತ್ತಿದ್ದವರ ವಿರುದ್ಧ ಜುಲೈ 28ರಂದು ಖುದ್ದು ರಮ್ಯಾ ಅವರೇ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು.
ಅದರನ್ವಯ ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆ ಕಾಯ್ದೆ 2023ರ 351(2) (ಕ್ರಿಮಿನಲ್ ಬೆದರಿಕೆಯ ಉದ್ದೇಶದ ಅಪರಾಧ), 351(3) (ಸಾವು, ತೀವ್ರ ನೋವುಂಟು ಮಾಡುವ ಉದ್ದೇಶದ ಕ್ರಿಮಿನಲ್ ಬೆದರಿಕೆ), 352 (ಉದ್ದೇಶಪೂರ್ವಕ ಅವಮಾನದ ಮೂಲಕ ಶಾಂತಿಭಂಗದ ಯತ್ನ), 75(1) (ಲೈಂಗಿಕ ಕಿರುಕುಳ) 75(1)(IV) (ಲೈಂಗಿಕ ಟೀಕೆ) ಹಾಗೂ 79 (ಮಹಿಳೆಯ ಗೌರವಕ್ಕೆ ಧಕ್ಕೆ) ಆರೋಪದಡಿಯಲ್ಲಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.