ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂನ್ 4 ರಂದು ಆರ್‌ಸಿಬಿ ವಿಜಯೋತ್ಸವ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ 11 ಜನರು ಪ್ರಾಣ ಕಳೆದುಕೊಂಡಿದ್ದು ಗೊತ್ತಿರುವ ವಿಷಯ. ಘಟನೆಯ 3 ತಿಂಗಳ ಬಳಿಕ ಇತ್ತೀಚೆಗೆ “RCB CARES” ಯೋಜನೆ ಘೋಷಣೆ ಮಾಡಿದ್ದ ಬೆಂಗಳೂರು ಫ್ರಾಂಚೈಸಿ ಸಂತ್ರಸ್ತ ಕುಟುಂಬಗಳಿಗೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಹೇಳಿತ್ತು.
ಇದೀಗ ಮತ್ತೊಂದು ಹೆಜ್ಜೆ ಮುಂದೆ ಸಾಗಿದ್ದು ಮೃತರ ಕುಟುಂಬಗಳಿಗೆ ಮತ್ತೊಂದು ಹಂತದ ಪರಿಹಾರವನ್ನು ಘೋಷಣೆ ಮಾಡಿದೆ. ಕಾಲ್ತುಳಿತ ಘಟನೆಯಲ್ಲಿ ಪ್ರಾಣಕಳೆದುಕೊಂಡವರ ಪ್ರತಿ ಕುಟುಂಬಗಳಿಗೆ ಹೆಚ್ಚುವರಿಯಾಗಿ 15 ಲಕ್ಷ ಪರಿಹಾರ ಘೋಷಣೆ ಮಾಡಿದೆ. ಇದರೊಂದಿಗೆ ತಲಾ ಕುಟುಂಬಗಳಿಗೆ 25 ಲಕ್ಷ ಪರಿಹಾರ ರೂಪದಲ್ಲಿ ಹಣ ಸಿಗಲಿದೆ.
ಈ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆಗೊಳಿಸಿರುವ ಆರ್‌ಸಿಬಿ ಫ್ರಾಂಚೈಸಿ, ಸಹಾನುಭೂತಿ, ಏಕತೆ ಮತ್ತು ನಿರಂತರ ಆರೈಕೆಯ ಭರವಸೆಯಾಗಿ “RCB CARES” ಎಂಬ ಹೊಸ ಯೋಜನೆಯ ಪರಿಚಯಿಸುತ್ತಿರುವ ಸುಳಿವು ನೀಡಿದೆ.
ಜೂನ್ 4, 2025ರಂದು ನಡೆದ ಘಟನೆಯಿಂದ ನಮ್ಮೆಲ್ಲರ ಹೃದಯಗಳು ಒಡೆದುಹೋಗಿವೆ. ನಾವು ಕಳೆದುಕೊಂಡಿದ್ದು ಹನ್ನೊಂದು ಅಭಿಮಾನಿಗಳನ್ನಷ್ಟೇ ಅಲ್ಲ… ಅವರು ನಮ್ಮ ಕುಟುಂಬದ ಸದಸ್ಯರಾಗಿದ್ದರು, ನಮ್ಮ ಹೃದಯದ ಭಾಗವಾಗಿದ್ದರು. ಅವರ ಉತ್ಸಾಹವೇ ನಮ್ಮ ಊರು, ಸಮುದಾಯ ಮತ್ತು ತಂಡಕ್ಕೆ ಜೀವ ತುಂಬುವ ಬೆಳಕಾಗಿತ್ತು. ನಮ್ಮ ನೆನಪುಗಳಲ್ಲಿ ಅವರು ಸದಾ ಜೀವಂತವಾಗಿರುತ್ತಾರೆ.
ಅವರ ಜಾಗವನ್ನು ಯಾವ ಸಹಾಯವೂ ತುಂಬಲಾರದು. ಆದರೆ, ಮೊದಲನೇ ಮತ್ತು ಗೌರವದ ಸಂಕೇತವಾಗಿ, ಆರ್‌ಸಿಬಿ ಪ್ರತಿ ಕುಟುಂಬಕ್ಕೆ 25 ಲಕ್ಷ ರೂಪಾಯಿಯ ನೆರವನ್ನು ನೀಡಿದೆ. ಇದು ಕೇವಲ ಆರ್ಥಿಕ ಸಹಾಯವಲ್ಲ, ಕರುಣೆ, ಒಗಟ್ಟು ಮತ್ತು ನಿರಂತರ ಕಾಳಜಿಯ ಭರವಸೆ.
ಇದು ಆರ್‌ಸಿಬಿ ಕೇರ್ಸ್ನ ಆರಂಭವೂ ಹೌದು. ಅವರ ನೆನಪನ್ನು ಗೌರವಿಸುವ ಮೂಲಕ ಶುರುವಾದ ಈ ಪ್ರಯತ್ನ, ಅಭಿಮಾನಿಗಳ ಭಾವನೆ, ನಂಬಿಕೆ ಮತ್ತು ಸುರಕ್ಷತೆ ಪ್ರತಿಬಿಂಬಿಸುವ ದೀರ್ಘಕಾಲದ ಬದ್ಧತೆಯಾಗಿದೆ. ಆರ್‌ಸಿಬಿ ಕೇರ್ಸ್ ಕುರಿತು ಇನ್ನಷ್ಟು ವಿವರಗಳು ಶೀಘ್ರದಲ್ಲೇ… ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತನ್ನ ಅಧಿಕೃತ ಸಾಮಾಜಿಕ ಜಾಲತಾಣದ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಪೋಸ್ಟ್ನಲ್ಲಿ ಬರೆದುಕೊಂಡಿದೆ.
ಕಾಲ್ತುಳಿತ ಘಟನೆ ಬಗ್ಗೆ ಆರ್‌ಸಿಬಿ ಫ್ರಾಂಚೈಸಿ ಕಳೆದು ಎರಡು ದಿನಗಳ ಹಿಂದೆಯಷ್ಟೇ ಮೊದಲ ಬಾರಿ ಮೌನ ಮುರಿಯುವ ಮೂಲಕ ಪ್ರತಿಕ್ರಿಯೆ ನೀಡಿತ್ತು. ಘಟನೆ ನಡೆದ ಮೂರು ತಿಂಗಳ ಬಳಿಕ ಇದು ಮೊದಲ ಪ್ರತಿಕ್ರಿಯೆಯಾಗಿತ್ತು. ಇದೀಗ ಮೃತ 11 ಜನ ಅಭಿಮಾನಿಗಳ ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿ ಆರ್ಥಿಕ ನೆರವು ಘೋಷಿಸಿರುವ ಕುರಿತು ಜಾಲತಾಣದಲ್ಲಿ ಮತ್ತೊಂದು ಪೋಸ್ಟ್ ಮಾಡಿಕೊಂಡಿದೆ.
ಜೂನ್ 3ರಂದು ಅಹಮದಾಬಾದ್ನಲ್ಲಿ ನಡೆದ ಐಪಿಎಲ್-2025 ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಮಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೊಚ್ಚಲ ಬಾರಿಗೆ ಕಪ್ ಮುಡಿಗೇರಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಜೂನ್ 4ರಂದು ಸಂಭ್ರಮಾಚರಣೆಗಾಗಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಕಣ್ತುಂಬಿಸಿಕೊಳ್ಳಲು ನಿರೀಕ್ಷೆಗೂ ಮೀರಿ ಲಕ್ಷಾಂತರ ಅಭಿಮಾನಿಗಳು ಜಮಾವಣೆಗೊಂಡಿದ್ದರಿಂದ ಸ್ಟೇಡಿಯಂ ಪ್ರವೇಶ ದ್ವಾರದಲ್ಲಿ ಉಂಟಾದ ನೂಕುನುಗ್ಗಲಿನಿಂದ ಕಾಲ್ತುಳಿತಕ್ಕೆ ಒಳಗಾಗಿ 11 ಮಂದಿ ಸಾವನ್ನಪ್ಪಿದ್ದರು. ಅಲ್ಲದೆ, 50ಕ್ಕಿಂತ ಹೆಚ್ಚು ಮಂದಿ ಗಾಯಗೊಂಡಿದ್ದರು. ಇದರ ಬೆನ್ನಲ್ಲೇ ಫ್ರಾಂಚೈಸಿ ವಿರುದ್ಧ ತೀವ್ರ ಟೀಕೆಗಳು ಕೇಳಿ ಬಂದಿದ್ದವು.