ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿಗೆ ಭಾಜನರಾದ ಲೇಖಕಿ ಬಾನು ಮುಷ್ತಾಕ್ ಅವರಿಗೆ ಆಹ್ವಾನ ಕೊಟ್ಟ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಪ್ರತಾಪ್ ಸಿಂಹ ಅರ್ಜಿ ಸಲ್ಲಿಸಿದ್ದು, ದಸರಾ ಉದ್ಘಾಟನೆ ವೇಳೆ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಬೇಕು. ವೇದ ಮಂತ್ರ, ಧಾರ್ಮಿಕ ಆಚರಣೆಗಳೊಂದಿಗೆ ಉದ್ಘಾಟನೆಯ ಸಂಪ್ರದಾಯವಿದೆ. ಬಾನು ಮುಷ್ತಾಕ್ ಹಿಂದೂ ವಿರೋಧಿ, ಕನ್ನಡ ವಿರೋಧಿ ಭಾವನೆ ಹೊಂದಿದ್ದಾರೆ. ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಅವರನ್ನು ಆಯ್ಕೆ ಮಾಡಿದೆ ಎಂದಿದ್ದಾರೆ.
ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಬಾನು ಮುಷ್ತಾಕ್ ಅವರ ಆಯ್ಕೆ ಮಾಡಿದೆ. ಮೈಸೂರಿನ ರಾಜಮನೆತನದವರು ಕೂಡ ಸರ್ಕಾರದ ನಡೆ ವಿರೋಧಿಸಿದ್ದಾರೆ. ಸರ್ಕಾರದ ನಿರ್ಧಾರದಿಂದ ಹಿಂದೂಗಳ ಭಾವನೆಗೆ ಘಾಸಿ ಉಂಟಾಗಿದೆ. ಬಾನು ಮುಷ್ತಾಕ್ ರಿಗೆ ನೀಡಿದ ಆಹ್ವಾನ ಹಿಂಪಡೆಯಲು ನಿರ್ದೇಶಿಸುವಂತೆ ಹೈಕೋರ್ಟ್ಗೆ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ರನ್ನು ಆಯ್ಕೆ ಮಾಡಿದ ವಿಚಾರವಾಗಿ ವಿವಾದವಾಗಿ ಮಾರ್ಪಟ್ಟಿದೆ. ಭುವನೇಶ್ವರಿ ಬಗ್ಗೆ ಬಾನು ಮುಷ್ತಾಕ್ ಮಾತಾಡಿರುವ ವಿಡಿಯೋ ವೈರಲ್ ಆದ ಬಳಿಕ ಹಿಂದೂ ಸಂಘಟನೆ ಹಾಗೂ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದರು.
ಸರ್ಕಾರ ತನ್ನ ನಿರ್ಧಾರಕ್ಕೆ ಬದ್ಧವಾಗಿದ್ದು, ಇತ್ತೀಚೆಗೆ ಹಾಸನದ ಅಮೀರ್ ಮೊಹಲ್ಲಾದಲ್ಲಿನ ಅವರ ನಿವಾಸಕ್ಕೆ ತೆರಳಿ, ಸರ್ಕಾರದ ಪರ ಜಿಲ್ಲಾಡಳಿತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಅಧಿಕೃತ ಆಹ್ವಾನ ನೀಡಿದೆ.
ಅಧಿಕೃತ ಆಹ್ವಾನ ಬಳಿಕ ಪ್ರತಿಕ್ರಿಯಿಸಿದ್ದ ಬಾನು ಮುಷ್ತಾಕ್, “ಆಹ್ವಾನ ಕೊಟ್ಟಿರೋದಕ್ಕೆ ಜಿಲ್ಲಾಡಳಿತಕ್ಕೆ ಧನ್ಯವಾದ. ದಸರಾ ನಮ್ಮ ಎಲ್ಲರ ಮನೆಯ ಹಬ್ಬ” ಎಂದು ಬಣ್ಣಿಸಿದ್ದರು.