ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ನಿಂದ ಕನ್ನಡ ನೆಲದಲ್ಲಿ ಉದ್ಯೋಗ ನಷ್ಟವಾಗದಂತೆ ನಮ್ಮ ಭಾಷೆಯನ್ನು ಹೊಸ ಸವಾಲಿಗೆ ಬೇಕಾದ ಹಾಗೆ ಸಿದ್ಧಪಡಿಸಲು ಸರ್ಕಾರ ಬದ್ದವಾಗಿದೆ. ಕನ್ನಡವನ್ನು ಹೊಸ ತಂತ್ರಜ್ಞಾನದ ಭಾಷೆಯನ್ನಾಗಿಸಲು ವಿದ್ವಾಂಸರು, ತಾಂತ್ರಿಕ ತಜ್ಞರು ಮುಂದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ 70ನೇ ಕನ್ನಡ ರಾಜ್ಯೋತ್ಸವದಲ್ಲಿ ನಾಡನ್ನು ಉದ್ದೇಶಿಸಿ ಮಾತನಾಡಿದರು.
ಮಾಹಿತಿ ತಂತ್ರಜ್ಞಾನ ಯುಗ ಈಗ ಆರ್ಟಿಫಿಷಿಯಲ್ ತಂತ್ರಜ್ಞಾನದ ಯುಗವಾಗಿ ಮಾರ್ಪಾಡಾಗುತ್ತಿದೆ. ಇದರಿಂದ ಉದ್ಯೋಗ ನಷ್ಟವಾಗಬಹುದು ಎಂಬ ಆತಂಕವೂ ಎದುರಾಗಿದೆ. ಕನ್ನಡ ಭಾಷೆ, ಪರಂಪರೆ ಮತ್ತು ಸಂಸ್ಕೃತಿಯನ್ನು ಜಾಗತಿಕ ಮಟ್ಟಕ್ಕೆ ಎತ್ತರಿಸುವ ಕಾರ್ಯವನ್ನೂ ನಮ್ಮ ಸರ್ಕಾರ ಮಾಡುತ್ತಿದೆ. ಇದರ ಭಾಗವಾಗಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ನಿಂದ ಉದ್ಯೋಗ ನಷ್ಟವಾಗದಂತೆ ನಮ್ಮ ಭಾಷೆಯನ್ನು ಹೊಸ ಸವಾಲಿಗೆ ಬೇಕಾದ ಹಾಗೆ ಸಿದ್ಧಪಡಿಸಲು ಸರ್ಕಾರ ಬದ್ದವಾಗಿದೆ. ಕನ್ನಡವನ್ನು ಹೊಸ ತಂತ್ರಜ್ಞಾನದ ಭಾಷೆಯನ್ನಾಗಿಸಲು ವಿದ್ವಾಂಸರು, ತಾಂತ್ರಿಕ ತಜ್ಞರು ಮುಂದಾಗಿ ಎಂದು ಕರೆ ನೀಡಿದರು.
ಇದರ ಜೊತೆಗೆ 800 ಕನ್ನಡ ಶಾಲೆಗಳು ಮತ್ತು 100 ಉರ್ದು ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಅಭಿವೃದ್ಧಿ ಮಾಡಲಾಗುತ್ತಿದೆ. ಮದರಸಾಗಳಲ್ಲಿ ಕನ್ನಡ ಕಲಿಸಲು ಆದ್ಯತೆ ನೀಡುತ್ತಿದ್ದೇವೆ. ಕನ್ನಡ ಭಾಷೆ, ಪರಂಪರೆಗಳನ್ನು ಜಾಗತಿಕ ಮಟ್ಟಕ್ಕೆ ಎತ್ತರಿಸಬೇಕಾದ ಅನಿವಾರ್ಯತೆಯಿರುವುದರಿಂದ ಇದಕ್ಕಾಗಿ ಹೊಸ ನೀತಿಯನ್ನು ತರುವ ಸಿದ್ಧತೆಯಲ್ಲಿದ್ದೇವೆ ಎಂದರು.
ರಾಜ್ಯದಲ್ಲಿ ಶತಮಾನ ಪೂರೈಸಿರುವ ಸುಮಾರು 3000 ಸರ್ಕಾರಿ ಶಾಲೆಗಳಿವೆ. ರಾಜ್ಯದಲ್ಲಿ ಶಾಲಾ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವ ಸಲುವಾಗಿ ರಾಜ್ಯಾದ್ಯಂತ 2,500 ಕೋಟಿ. ರೂ. ವೆಚ್ಚದಲ್ಲಿ 800 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ (KPS) ಪರಿವರ್ತಿಸಿ ಪ್ರತಿ ಶಾಲೆಯನ್ನು 4 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಲಾಗುವುದು ಎಂದರು.
ಅಲ್ಪಸಂಖ್ಯಾತ ಸಮುದಾಯಗಳು ಮುಖ್ಯವಾಹಿನಿಗೆ ಬರುವ ಜೊತೆಗೆ ಸುಲಭವಾಗಿ ಸಮಾಜದಲ್ಲಿ ಬೆರೆಯುವಂತೆ ಪ್ರಾಥಮಿಕ ಕನ್ನಡವನ್ನು ಮದರಸಾ ಶಿಕ್ಷಣದ ಭಾಗವಾಗಿ ಕಲಿಸಲು ಪ್ರಸ್ತುತ ವರ್ಷದಲ್ಲಿ 180 ಮದರಸಾಗಳಲ್ಲಿ ಕನ್ನಡ ಕಲಿಸಲಾಗುತ್ತಿದೆ. ಇದನ್ನು ರಾಜ್ಯದಲ್ಲಿರುವ 1500 ಮದರಸಾಗಳಿಗೆ ವಿಸ್ತರಿಸಲಾಗುವುದು. ಇದಕ್ಕಾಗಿ ರೂ.483 ಕೋಟಿ ವೆಚ್ಚದಲ್ಲಿ 100 ಉರ್ದು ಶಾಲೆಗಳನ್ನು ಕೆ.ಪಿ.ಎಸ್. ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯನ್ನು ಒಕ್ಕೊರಲಿನಿಂದ ಖಂಡಿಸಬೇಕಾಗಿದೆ. ಕಳೆದ 5 ವರ್ಷಗಳಲ್ಲಿ 15ನೇ ಹಣಕಾಸು ಆಯೋಗದ ಮೂಲಕ ಕೇಂದ್ರವು ಮಾಡಿದ ದ್ರೋಹದಿಂದ ಸುಮಾರು 70 ಸಾವಿರ ಕೋಟಿ ರೂ.ಗಳಷ್ಟು ನಷ್ಟವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
“4.5 ಲಕ್ಷ ಕೋಟಿ ರೂ.ಗಳಿಗಿಂತ ಹೆಚ್ಚಿನ ತೆರಿಗೆ ಸಂಪತ್ತನ್ನು ಕರ್ನಾಟಕವು ನೀಡುತ್ತಿದೆ. ಆದರೆ ನಮಗೆ ಬಿಡಿಗಾಸು ಕೊಟ್ಟು ಪ್ರತಿ ವರ್ಷ ಸಾವಿರಾರು ಕೋಟಿ ರೂಪಾಯಿಗಳನ್ನು ವಂಚಿಸುತ್ತಿದೆ. ಹಿಂದಿ ಭಾಷೆಯನ್ನು ಹೇರಿಕೆ ಮಾಡಲು ನಿರಂತರ ಹುನ್ನಾರ ನಡೆಯುತ್ತಿದೆ. ಹಿಂದಿ, ಸಂಸ್ಕೃತ ಭಾಷೆಗಳ ಅಭಿವೃದ್ಧಿಗೆ ಮಾತ್ರ ಅನುದಾನಗಳನ್ನು ನೀಡಲಾಗುತ್ತಿದೆ. ಕನ್ನಡವೂ ಸೇರಿದಂತೆ ಉಳಿದ ದೇಶಭಾಷೆಗಳನ್ನು ನಿರ್ಲಕ್ಷಿಸಲಾಗುತ್ತಿದೆ. ರಾಜ್ಯದ ಅಭಿವೃದ್ಧಿಗೆ ಪೂರಕವಾಗಬೇಕಾಗಿದ್ದ ಯೋಜನೆಗಳನ್ನು ಕರ್ನಾಟಕಕ್ಕೆ ಕೊಡದೆ ವಂಚಿಸಲಾಗುತ್ತಿದೆ. ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ನೀಡಲಾಗಿದ್ದರೂ, ನೀಡಬೇಕಾದ ಅನುದಾನಗಳನ್ನೂ ಕೊಡದೆ ಅನ್ಯಾಯ ಮಾಡಲಾಗುತ್ತಿದೆ” ಎಂದರು.
“ಶಿಕ್ಷಣ ಕ್ಷೇತ್ರದ ಬಲವರ್ಧನೆಗಾಗಿ ಈ ವರ್ಷ 65,000 ಕೋಟಿ ರೂ.ಗಳಿಗೂ ಹೆಚ್ಚಿನ ಸಂಪನ್ಮೂಲಗಳನ್ನು ವಿನಿಯೋಗಿಸುತ್ತಿದ್ದೇವೆ. ನಮ್ಮ ವಸತಿ ಶಾಲೆಗಳು, ವಸತಿ ನಿಲಯಗಳಲ್ಲಿ 8.36 ಲಕ್ಷಕ್ಕೂ ಹೆಚ್ಚಿನ ಮಕ್ಕಳು ಅತ್ಯುತ್ತಮ ಗುಣಮಟ್ಟದ ಶಿಕ್ಷಣ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಅಗತ್ಯ ಇರುವ ಕಡೆಗಳಲ್ಲಿ ಹೊಸದಾಗಿ ವಸತಿ ಶಾಲೆಗಳು, ವಸತಿ ನಿಲಯಗಳನ್ನು ಸ್ಥಾಪಿಸುತ್ತಿದ್ದೇವೆ. ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ಪ್ರತ್ಯೇಕ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ. ಕ್ಯಾನ್ಸರ್‌ನಿಂದ ಬಾಧಿತರಾದ ಮಕ್ಕಳಿಗೆ ವೈದ್ಯಕೀಯ ಬೆಂಬಲದೊಂದಿಗೆ ಶಿಕ್ಷಣವನ್ನು ಒದಗಿಸುವ ಕೆಲಸ ಮಾಡಲಾಗುತ್ತಿದೆ” ಎಂದು ತಿಳಿಸಿದರು.


