ದೇವದುರ್ಗ ತಿಂಥಣಿ ಕಾಗಿನೆಲೆ ಕನಕಗುರುಪೀಠದ ಸಿದ್ದರಾಮಾನಂದ ಸ್ವಾಮೀಜಿ (50) ವಿಧಿವಶರಾಗಿದ್ದಾರೆ. ಇಂದು ಬೆಳಗಿನ ಜಾವ 3:30ರ ವೇಳೆ ಹೃದಯ ಸ್ತಂಭನದಿಂದ ಅಸ್ತಂಗತರಾಗಿದ್ದಾರೆ. ಬುಧವಾರ ರಾತ್ರಿಯಿಂದ ಲಿಂಗಸುಗೂರು ಖಾಸಗಿ ಆಸ್ಪತ್ರೆಯಲ್ಲಿ ಲೋ ಬಿಪಿಗೆ ಚಿಕಿತ್ಸೆ ಪಡೆಯುತ್ತಿದ್ದ ಸ್ವಾಮೀಜಿ ಚಿಕತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಮೃತಪಟ್ಟಿದ್ದಾರೆ.
ಸ್ವಾಮೀಜಿಗಳ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
“ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಶಾಖಾ ಮಠ ತಿಂಥಿಣಿ ಬ್ರಿಜ್ ಕಲಬುರ್ಗಿ ವಿಭಾಗೀಯ ಪೀಠದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳು ದೈವಾಧೀನರಾದ ಸುದ್ದಿ ನೋವುಂಟುಮಾಡಿದೆ.
ಧಾರ್ಮಿಕ ಕಾರ್ಯಗಳ ಜೊತೆಗೆ ಸಮಾಜದ ಏಳಿಗೆಯ ಬಗ್ಗೆ ಅಪಾರ ಕಾಳಜಿ, ಶ್ರದ್ಧೆ ಹೊಂದಿದ್ದ ಶ್ರೀಗಳ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ. ಶ್ರೀಗಳ ದಿವ್ಯಾತ್ಮಕ್ಕೆ ಚಿರಶಾಂತಿ ದೊರಕಲಿ, ಶ್ರೀ ಮಠದ ಭಕ್ತಾದಿಗಳು ಹಾಗೂ ಅಪಾರ ಅನುಯಾಯಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.


