ಕಚೇರಿಯಲ್ಲಿ ಪೊಲೀಸ್ ಸಮವಸ್ತ್ರದಲ್ಲಿರುವಾಗಲೇ ಮಹಿಳೆಯರ ಜೊತೆ ರಾಸಲೀಲೆ ನಡೆಸಿದ ವಿಡಿಯೊ ವೈರಲ್ ಆದ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರನ್ನು ತಕ್ಷಣವೇ ಹುದ್ದೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಸೋಮವಾರ ಮಧ್ಯಾಹ್ನದ ಹೊತ್ತಿಗೆ 10 ದಿನಗಳ ಕಡ್ಡಾಯ ರಜೆ ಮೇಲೆ ತೆರಳಿದ್ದ ರಾಮಚಂದ್ರ ರಾವ್ ಅವರನ್ನು ರಾತ್ರಿ ನಡೆದ ದಿಢೀರ್ ಬೆಳವಣಿಗೆಯಲ್ಲಿ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ವಿಚಾರಣೆ ಇನ್ನೂ ಬಾಕಿಯಿರುವ ಕಾರಣ ಅಮಾನತುಗೊಳಿಸಿರುವುದಾಗಿ ಸರ್ಕಾರದ ಆದೇಶದಲ್ಲಿ ತಿಳಿಸಿದೆ.
ಅಮಾನತು ಅವಧಿಯಲ್ಲಿ, ರಾಮಚಂದ್ರ ರಾವ್, 1969 ರ ಅಖಿಲ ಭಾರತ ಸೇವೆಗಳ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳ ನಿಯಮ -4 ರ ಪ್ರಕಾರ ಜೀವನಾಧಾರ ಭತ್ಯೆಗೆ ಅರ್ಹರಾಗಿರುತ್ತಾರೆ. ಆದೇಶವು ಅವರ ಚಲನವಲನದ ಮೇಲೆ ನಿರ್ಬಂಧಗಳನ್ನು ವಿಧಿಸುತ್ತದೆ. ಅಮಾನತು ಅವಧಿಯಲ್ಲಿ, ಅಧಿಕಾರಿಯು ರಾಜ್ಯ ಸರ್ಕಾರದ ಲಿಖಿತ ಅನುಮತಿಯಿಲ್ಲದೆ ಯಾವುದೇ ಸಂದರ್ಭಗಳಲ್ಲಿ ಪ್ರಧಾನ ಕಚೇರಿಯನ್ನು ತೊರೆಯುವಂತಿಲ್ಲ.


