- 371 (ಜೆ) ಆದೇಶಗಳ ಅನುಷ್ಠಾನ ಕುರಿತ ಸಂಪುಟ ಉಪ ಸಮಿತಿ ಸಭೆ
ಕಲ್ಯಾಣ ಕರ್ನಾಟಕ ಭಾಗದಲ್ಲಿ ಸ್ಥಳೀಯ ವೃಂದ ಮತ್ತು ಉಳಿಕೆ ಮೂಲ ವೃಂದದಲ್ಲಿನ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಸಂದರ್ಭದಲ್ಲಿ ವಿವಿಧ ನೇಮಕಾತಿ ಪ್ರಾಧಿಕಾರಗಳು ಅನುಸರಿಸಬೇಕಾದ ಕ್ರಮಗಳ ಬಗ್ಗೆ 371 (ಜೆ) ಅಡಿ ಹೊರಡಿಸಲಾಗಿರುವ ಆದೇಶಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಮತ್ತು ಪರಾಮರ್ಶೆ ಕುರಿತ ಸಂಪುಟ ಉಪ ಸಮಿತಿ ಅಧ್ಯಕ್ಷರಾದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿತು.
ಉನ್ನತ ಶಿಕ್ಷಣ ಇಲಾಖೆ ಮೂಲಕ ಪ್ರಥಮ ದರ್ಜೆ ಕಾಲೇಜುಗಳ 310 ಹುದ್ದೆಗಳ ಆಯ್ಕೆ ಇತ್ತೀಚೆಗೆ ನಡೆದಿದ್ದು, ಆಯ್ಕೆ ಪ್ರಕ್ರಿಯೆಯಲ್ಲಿ ಲೋಪವಾಗಿದೆ ಎಂದು ಕೆಲವು ಅಭ್ಯರ್ಥಿಗಳು ಉಪಸಮಿತಿಯ ಅಧ್ಯಕ್ಷರಾದ ಪ್ರಿಯಾಂಕ್ ಖರ್ಗೆ ಅವರಿಗೆ ದೂರು ನೀಡಿದ್ದು, ಈ ಸಂಬಂಧದಲ್ಲಿ ಇಂದು ಸಚಿವ ಸಂಪುಟದ ಉಪ ಸಮಿತಿ ಸಭೆಯನ್ನು ನಡೆಸಲಾಯಿತು.
ಸಭೆಯಲ್ಲಿ ಸಚಿವ ಸಂಪುಟ ಉಪ ಸಮಿತಿಯ ಸದಸ್ಯರಾದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಭಾಗವಹಿಸಿ ಹಲವಾರು ಸಲಹೆ ಸೂಚನೆಗಳನ್ನು ನೀಡಿದರು.
ಉನ್ನತ ಶಿಕ್ಷಣ ಇಲಾಖೆ ಮೂಲಕ ಪ್ರಥಮ ದರ್ಜೆ ಕಾಲೇಜುಗಳ 310 ಹುದ್ದೆಗಳ ಆಯ್ಕೆ ಇತ್ತೀಚೆಗೆ ನಡೆದಿದ್ದು, ಆಯ್ಕೆ ಪ್ರಕ್ರಿಯೆಯಲ್ಲಿ ಡಿಪಿಎಆರ್ ನೀಡಿರುವ ಸ್ಪಷ್ಟ ನಿರ್ದೇಶನಗಳನ್ನು ಪಾಲಿಸುವಲ್ಲಿ ಲೋಪವಾಗಿದೆ ಎಂಬುದನ್ನು ಮನಗಂಡ ಆಯ್ಕೆ ಸಮಿತಿ ಆಯ್ಕೆ ಪಟ್ಟಿಯನ್ನು ಮರು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಿತು.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹೊರಡಿಸಿರುವ ಸುತ್ತೋಲೆಗಳನ್ನು ಕಡ್ಡಾಯವಾಗಿ ಪಾಲಿಸಲು ಅಧಿಕಾರಿಗಳಿಗೆ ಸೂಚಿಸಿದ ಸಮಿತಿಯು ತಪ್ಪಿದಲ್ಲಿ ಸಂಬಂಧಪಟ್ಟ ನೇಮಕಾತಿ ಪ್ರಾಧಿಕಾರಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂಬ ಎಚ್ಚರಿಕೆಯನ್ನು ನೀಡಿತು.
ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಖುಷ್ಬು ಚೌಧರಿ, ಡಿಪಿಎಆರ್ ಪ್ರಧಾನ ಕಾರ್ಯದರ್ಶಿ ಕೆ.ಜಿ.ಜಗದೀಶ್, ಉನ್ನತ ಶಿಕ್ಷಣ ಇಲಾಖೆಯ ಆಯುಕ್ತೆ ಮಂಜುಶ್ರೀ ಭಾಗವಹಿಸಿದ್ದರು.


