ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ತಮ್ಮ ಉಪಮುಖ್ಯಮಂತ್ರಿಯಾಗಿದ್ದ ಡಿಕೆ ಶಿವಕುಮಾರ್ ಅವರಿಗೆ ಅತ್ಯಂತ ಗೌರವಯುತವಾಗಿ ಅಧಿಕಾರ ಹಸ್ತಾಂತರ ಮಾಡಿದ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಮಂಗಳವಾರ ಮಹತ್ವದ ಹುದ್ದೆ ನೀಡಿದೆ.
ಈ ಕುರಿತು ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಸಿದ್ದರಾಮಯ್ಯ, ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ನನ್ನನ್ನು ನೇಮಕ ಮಾಡಿರುವ ಕಾಂಗ್ರೆಸ್ ವರಿಷ್ಠರಾದ ಶ್ರೀಮತಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ನನ್ನ ಮೇಲೆ ವಿಶ್ವಾಸವನ್ನಿಟ್ಟು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ನೀತಿ – ನಿರೂಪಣೆಗಳನ್ನು ರೂಪಿಸುವ ಉನ್ನತ ಸಮಿತಿಗೆ ನನ್ನನ್ನು ನೇಮಿಸಿರುವುದಕ್ಕೆ ನನಗೆ ಹೆಮ್ಮೆಯಿದೆ. ಸಂವಿಧಾನ, ಪ್ರಜಾಪ್ರಭುತ್ವದ ಉಳಿವಿಗಾಗಿ ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಈ ನಿರ್ಣಾಯಕ ಹೋರಾಟದಲ್ಲಿ ನನ್ನ ರಾಜಕೀಯ ಅನುಭವ ಮತ್ತು ಸೈದ್ಧಾಂತಿಕ ಚಿಂತನೆಗಳು ಅನುಕೂಲಕ್ಕೆ ಬಂದರೆ ಅದಕ್ಕಿಂತ ಸಂತಸದ ವಿಚಾರ ಬೇರೆಯಿಲ್ಲ. ಪಕ್ಷದ ವೇದಿಕೆಯಲ್ಲಿ ನನ್ನ ಸಲಹೆ – ಮಾರ್ಗದರ್ಶನವನ್ನು ನೀಡಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.


