- ಗ್ರಾಮ ಪಂಚಾಯಿತಿಯಿಂದ ಕಾರ್ಪೊರೇಷನ್ ವರೆಗೆ ಈ ಬಾರಿ ಯುವಕರಿಗೆ ಹಾಗೂ ಹೊಸಬರಿಗೆ ಅವಕಾಶ
- ಡಿಸೆಂಬರ್ ಅಂತ್ಯದೊಳಗೆ ಜಿಬಿಎ, ಮಾರ್ಚ್ ಅಂತ್ಯದೊಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ
ಸಚಿವ ಸಂಪುಟದ ವಿಸ್ತರಣೆಯ ಬಗ್ಗೆ ದೆಹಲಿಯಲ್ಲಿ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ಸಾಧ್ಯವಾಗದ ಕಾರಣ, ಅವರನ್ನು ಶನಿವಾರ ಭೇಟಿ ಮಾಡಲಾಗುವುದು. ವರಿಷ್ಠರಿಂದ ಮಾರ್ಗದರ್ಶನ ಪಡೆದು ಸಚಿವ ಸಂಪುಟ ವಿಸ್ತರಣೆಗೆ ಸಿದ್ಧತೆ ಮಾಡಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಹಳೇ ಕಚೇರಿ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.
“ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆಯಿಂದಾಗಿ ಜಿಬಿಎ ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲು ಡಿಸೆಂಬರ್ 31 ರವರೆಗೆ ಕಾಲಾವಕಾಶವನ್ನು ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಇಂದು ಸುಪ್ರೀಂ ಕೋರ್ಟ್ ಕಾಲಾವಕಾಶವನ್ನು ವಿಸ್ತರಿಸಿದೆ. ಜಿಬಿಎ ಚುನಾವಣೆಯಲ್ಲದೇ ಮಾರ್ಚ್ ಅಂತ್ಯದೊಳಗೆ ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿ, ಮುನಿಸಿಪಾಲಿಟಿ ಚುನಾವಣೆಗಳನ್ನು ನಡೆಸಲಾಗುವುದು” ಎಂದು ತಿಳಿಸಿದರು.
ಚುನಾವಣೆಯಲ್ಲಿ ಯುವಕರಿಗೆ ಅವಕಾಶ
“ಗ್ರಾಮ ಪಂಚಾಯಿತಿಯಿಂದ ಕಾರ್ಪೊರೇಷನ್ ವರೆಗೆ ಈ ಬಾರಿಯ ಚುನಾವಣೆಯಲ್ಲಿ ಯುವಕರಿಗೆ ಹಾಗೂ ಹೊಸ ಮುಖಗಳಿಗೆ ಅವಕಾಶ ನೀಡಲಾಗುವುದು. ಸ್ಥಳೀಯ ಸಂಸ್ಥೆಗಳನ್ನು ಬಲಪಡಿಸಲು ಮತ್ತು ಅಧಿಕಾರ ವಿಕೇಂದ್ರೀಕರಣವನ್ನು ತರಲು ಸಂವಿಧಾನಕ್ಕೆ ಮಾಡಲಾದ 73 ನೇ ಮತ್ತು 74 ನೇ ತಿದ್ದುಪಡಿಯನ್ನು ಅನುಷ್ಠಾನಕ್ಕೆ ತರಲಾಗುವುದು ಎಂದರು.
“ಎಐಸಿಸಿ ಕಚೇರಿ ನಮಗೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಗೆ ದೇವಾಲಯವಿದ್ದಂತೆ. ನಾವು ಅದರೊಂದಿಗೆ ಬೆಳೆದಿದ್ದೇವೆ. ನಮ್ಮ ಪಕ್ಷದ ಕಾರ್ಯದರ್ಶಿಯನ್ನು ದೇವಾಲಯದಲ್ಲಿಯೇ ಭೇಟಿಯಾಗುವುದು ನಮ್ಮ ಕರ್ತವ್ಯವಾಗಿದೆ” ಎಂದರು.


