ಕರ್ನಾಟಕದ ಮಾಜಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ, ತಿಪಟೂರು ಕ್ಷೇತ್ರದ ಮಾಜಿ ಶಾಸಕ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ.ಸಿ. ನಾಗೇಶ್ (67) ಅವರು ಮಂಗಳವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಜಯನಗರದಲ್ಲಿರುವ ಪುತ್ರಿಯ ನಿವಾಸದಲ್ಲಿ ಕೊನೆಯುಸಿರೆಳೆದರು.
1959ರ ಜುಲೈ 1ರಂದು ಜನಿಸಿದ್ದ ಬಿ.ಸಿ. ನಾಗೇಶ್ ಅವರು ವಿದ್ಯಾರ್ಥಿ ದಿಸೆಯಲ್ಲೇ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಮೂಲಕ ಸಾರ್ವಜನಿಕ ಜೀವನಕ್ಕೆ ಕಾಲಿಟ್ಟಿದ್ದರು. ಬಳಿಕ ರಾಷ್ಟ್ರೀಯ ಸ್ವಯಂಸೇವಕ ಸಂಘದೊಂದಿಗೆ ಸಕ್ರಿಯವಾಗಿ ಕಾರ್ಯನಿರ್ವಹಿಸಿ, 1984ರಲ್ಲಿ ಭಾರತೀಯ ಜನತಾ ಪಕ್ಷವನ್ನು ಅಧಿಕೃತವಾಗಿ ಸೇರಿದ್ದರು. ಪಕ್ಷ ಸಂಘಟನೆಯಲ್ಲಿ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಅವರು, ಸರಳತೆ ಮತ್ತು ಸೈದ್ಧಾಂತಿಕ ಬದ್ಧತೆಯಿಂದ ಗುರುತಿಸಿಕೊಂಡಿದ್ದರು.
ತಿಪಟೂರು ವಿಧಾನಸಭಾ ಕ್ಷೇತ್ರದಿಂದ 2008 ಮತ್ತು 2018ರಲ್ಲಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ನಾಗೇಶ್ ಅವರು, ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ 2021ರಿಂದ 2023ರವರೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಇಲಾಖೆಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಶಿಕ್ಷಣ ಸಚಿವರಾಗಿದ್ದ ಅವಧಿಯಲ್ಲಿ ಶಾಲಾ ಶಿಕ್ಷಣಕ್ಕೆ ಸಂಬಂಧಿಸಿದ ಹಲವು ಮಹತ್ವದ ನಿರ್ಧಾರಗಳು, ಪಠ್ಯಪುಸ್ತಕ ಪರಿಷ್ಕರಣೆ, ಶಾಲಾ ಶಿಸ್ತು ಸೇರಿದಂತೆ ಹಲವು ವಿಚಾರಗಳಲ್ಲಿ ಅವರು ಕೈಗೊಂಡ ಕ್ರಮಗಳು ರಾಜ್ಯಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದ್ದವು. ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೇ ಆದ ಆಡಳಿತಾತ್ಮಕ ನಿಲುವುಗಳಿಂದ ಅವರು ಗಮನ ಸೆಳೆದಿದ್ದರು.
ಕಳೆದ ಸುಮಾರು ಒಂದು ವರ್ಷದಿಂದ ಅವರು ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಎರಡು ಬಾರಿ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು. ಚಿಕಿತ್ಸೆ ಪಡೆಯುತ್ತಿದ್ದ ಅವರು ಮಂಗಳವಾರ ನಿಧನರಾಗಿದ್ದಾರೆ.
ಬಿ.ಸಿ. ನಾಗೇಶ್ ಅವರ ನಿಧನಕ್ಕೆ ರಾಜ್ಯದ ರಾಜಕೀಯ ವಲಯದಲ್ಲಿ ತೀವ್ರ ಸಂತಾಪ ವ್ಯಕ್ತವಾಗಿದೆ. ಹಿರಿಯ ನಾಯಕ, ಜನಪ್ರತಿನಿಧಿ ಹಾಗೂ ಶಿಕ್ಷಣ ಸಚಿವರಾಗಿ ಅವರು ಸಲ್ಲಿಸಿದ ಸೇವೆಯನ್ನು ಹಲವು ನಾಯಕರು ಸ್ಮರಿಸಿದ್ದಾರೆ.
ಬಿ.ಸಿ. ನಾಗೇಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಆ.19ರಂದು ಬೆಳಗ್ಗೆ ವ್ಯವಸ್ಥೆ ಮಾಡಲಾಗಿದ್ದು, ಬಳಿಕ ಅವರ ಹುಟ್ಟೂರು ತಿಪಟೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ವರದಿಗಳು ತಿಳಿಸಿವೆ.


