ಪಂಚಾಯಿತಿಯಿಂದ ಸಂಸತ್ತಿನವರೆಗೆ ಹೊಸ ನಾಯಕತ್ವದ ಅಗತ್ಯವಿದೆ. ವಿಶೇಷವಾಗಿ ಮಹಿಳೆಯರು ನಾಯಕತ್ವ ವಹಿಸಿಕೊಳ್ಳಬೇಕು. ಇದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ಮಾಜಿ ಸಚಿವರು ಹಾಗೂ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ಅವರು ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಸಿಎಂ ಈ ಮಾತುಗಳನ್ನು ಆಡಿದರು.
ರಾಜಾಜಿನಗರದ ವಿದ್ಯಾವರ್ಧಕ ಶಾಲೆಯಲ್ಲಿ ತಾವು ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ನಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದೆ ಎಂದು ಸಿಎಂ ನೆನಪಿಸಿಕೊಂಡರು.
ಈ ಸಂದರ್ಭದಲ್ಲಿ ಸಿಂಧ್ಯಾ ಅವರು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ವತಿಯಿಂದ ನಡೆಯುತ್ತಿರುವ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ನಲ್ಲಿ ಪಾಲ್ಗೊಂಡಿರುವ ವಿದ್ಯಾರ್ಥಿಗಳಿಗೆ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಸೀಟುಗಳ ಮೀಸಲಾತಿಯನ್ನು ಹೆಚ್ಚಿಸಬೇಕು ಎಂದು ಮನವಿ ಸಲ್ಲಿಸಿದರು. ಅಲ್ಲದೆ, ನಿವೃತ್ತ ನೌಕರರಿಗೆ ಪಿಂಚಣಿ ಬಿಡುಗಡೆ ಮಾಡುವಂತೆ ಕೋರಿದರು.
ಧಾರವಾಡ ಮತ್ತು ವಿಜಯಪುರದಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ಗೆ ನೀಡಿರುವ ಸ್ಥಳದ ಗುತ್ತಿಗೆ ಅವಧಿ ಮುಗಿದಿದ್ದು, ಅದನ್ನು ಮುಂದುವರೆಸಬೇಕು ಎಂದೂ ಸಿಂಧ್ಯಾ ಅವರು ವಿನಂತಿಸಿದರು.
ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುದಾನ ಬಿಡುಗಡೆಗೆ ಕೂಡ ಮನವಿ ಮಾಡಿದಾಗ,“ಮುಖ್ಯಮಂತ್ರಿಗಳ ವಿವೇಚನಾ ಅಧಿಕಾರದಡಿ ಬಿಡುಗಡೆ ಮಾಡುವಂತೆ” ಸಿಎಂ ಸೂಚಿಸಿದರು.


