ಕಾವೇರಿ ನೀರಾವರಿ ನಿಗಮದ ಪ್ರಗತಿ ಪರಿಶೀಲನಾ ಸಭೆ ನಡೆಯುತ್ತಿದ್ದ ಮಧ್ಯೆಯೇ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಅವರು ಹಾಸನ ಜಿಲ್ಲೆಯ ರೈತರ ಸಮಸ್ಯೆಗೆ ತಕ್ಷಣ ಸ್ಪಂದಿಸುವ ಮೂಲಕ ತಮ್ಮ ರೈತಪರ ಕಾಳಜಿಯನ್ನು ಮತ್ತೊಮ್ಮೆ ಪ್ರದರ್ಶಿಸಿದ್ದಾರೆ.
ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಪ್ರೀತಂಗೌಡ ಹಾಗೂ ಪುಷ್ಪಗಿರಿ ಮಠದ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಅವರೊಂದಿಗೆ ವಿಡಿಯೋ ಕಾಲ್ ಮೂಲಕ ಮಾತನಾಡಿದ ಸಚಿವರು, ಕಸಬಾ ಹೋಬಳಿಯ ಸೀಗೆ, ದಸೂರು, ಲಕ್ಷ್ಮೀಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವಂತೆ ರೈತರು ನಡೆಸುತ್ತಿರುವ ಪ್ರತಿಭಟನೆ ಕುರಿತು ಮಾಹಿತಿ ಪಡೆದರು. ವಿಷಯ ಗಮನಕ್ಕೆ ಬಂದ ಕೂಡಲೇ ಸಭೆಯ ನಡುವೆಯೇ ವಿಡಿಯೋ ಕರೆ ಮೂಲಕ ರೈತರ ಅಹವಾಲು ಆಲಿಸಿದ ಸಚಿವರು, ರೈತರು ಆತಂಕಪಡುವ ಅಗತ್ಯವಿಲ್ಲ, ಸಮಸ್ಯೆಯನ್ನು ಕೂಡಲೇ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಮಸ್ಯೆ ಕುರಿತು ಚರ್ಚಿಸಲು ಶೀಘ್ರದಲ್ಲೇ ಹಾಸನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಶಾಸಕರ ಸಭೆ ಕರೆಯಲಾಗುವುದು. ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣವೇ ಸೂಚನೆ ನೀಡಿ ಕೆರೆ-ಕಟ್ಟೆಗಳಿಗೆ ನೀರು ತುಂಬಿಸಲಾಗುವುದು ಎಂದು ತಿಳಿಸಿದರು. ಜೊತೆಗೆ ಪರಿಸ್ಥಿತಿಯನ್ನು ಖುದ್ದು ಪರಿಶೀಲಿಸಲು ಶೀಘ್ರದಲ್ಲೇ ಸ್ಥಳಕ್ಕೆ ಭೇಟಿ ನೀಡುವುದಾಗಿಯೂ ಭರವಸೆ ನೀಡಿದರು.
ಸಭೆಯಲ್ಲಿದ್ದ ಸಂದರ್ಭದಲ್ಲಿಯೇ ಯಾವುದೇ ವಿಳಂಬವಿಲ್ಲದೆ ರೈತರ ಸಮಸ್ಯೆಗೆ ಸ್ಪಂದಿಸಿ ಅಧಿಕಾರಿಗಳಿಗೆ ಕ್ರಮಕ್ಕೆ ಸೂಚಿಸಿರುವುದು ರೈತರಲ್ಲಿ ವಿಶ್ವಾಸ ಮೂಡಿಸಿದೆ. “ಅಧಿಕಾರಿಗಳ ಸಭೆಗಿಂತ ರೈತರ ಸಮಸ್ಯೆಯೇ ಮುಖ್ಯ” ಎಂಬಂತೆ ಸಚಿವರು ನಡೆದುಕೊಂಡಿರುವುದು ಅವರ ಜನಪರ ಕಾರ್ಯವೈಖರಿಗೆ ಸಾಕ್ಷಿಯಾಗಿದೆ ಎಂದು ರೈತರು ಹಾಗೂ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


