ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ಈ ಕುರಿತು ಮುಖ್ಯಮಂತ್ರಿ ಅವರು ಶ್ವೇತಪತ್ರ ಹೊರಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು.
ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ₹4 ಲಕ್ಷ ಕೋಟಿಗೂ ಅಧಿಕ ಹೊಸ ಸಾಲ ಮಾಡಿದ್ದು, ಒಟ್ಟಾರೆ ರಾಜ್ಯದ ಸಾಲದ ಪ್ರಮಾಣ ₹8 ಲಕ್ಷ ಕೋಟಿಗೆ ತಲುಪಿದೆ ಎಂದು ಆರೋಪಿಸಿದರು. ಸಾಲ ಮಾಡುವುದನ್ನು ಹೊರತುಪಡಿಸಿ ರಾಜ್ಯದಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕಾಣಿಸುತ್ತಿಲ್ಲ ಎಂದು ಟೀಕಿಸಿದರು.
ಮುಖ್ಯಮಂತ್ರಿಗಳು ಎಲ್ಲೆಡೆ ₹32 ಸಾವಿರ ಕೋಟಿ, ₹10 ಸಾವಿರ ಕೋಟಿ ನೀಡುವುದಾಗಿ ಘೋಷಣೆ ಮಾಡುತ್ತಿದ್ದಾರೆ. ಆದರೆ, ರಾಜ್ಯದ ಖಜಾನೆಯಲ್ಲಿ ಹಣವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಹೊಸ ಘೋಷಣೆಗಳನ್ನು ಮಾಡದಂತೆ ಹಾಗೂ ಬರ ಪರಿಹಾರ ನೀಡಲು ಸಹ ಹಣದ ಕೊರತೆ ಇದೆ ಎಂದು ಹಣಕಾಸು ಇಲಾಖೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ ಎಂದು ವಿಜಯೇಂದ್ರ ಹೇಳಿದರು.
ರಾಜ್ಯದ ಆರ್ಥಿಕ ಪರಿಸ್ಥಿತಿ ದಿವಾಳಿಯಾಗಿದೆ ಎಂದು ಆರೋಪಿಸಿದ ವಿಜಯೇಂದ್ರ, ವಾಸ್ತವಿಕವಾಗಿ ರಾಜ್ಯದ ಹಣಕಾಸು ಪರಿಸ್ಥಿತಿ ಹೇಗಿದೆ ಎಂಬುದನ್ನು ಸರ್ಕಾರ ಜನರಿಗೆ ತಿಳಿಸಬೇಕು ಎಂದು ಒತ್ತಾಯಿಸಿದರು.
“ಕಾಂಗ್ರೆಸ್ ಸರ್ಕಾರವೇ ಇಂದು ಐಸಿಯುನಲ್ಲಿದೆ. ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ. ಬಡವರು ಮತ್ತು ರೈತರಿಗೆ ಪರಿಹಾರ ನೀಡಲು ಸಾಧ್ಯವಾಗುತ್ತಿಲ್ಲ. ಜಾಹೀರಾತುಗಳನ್ನು ನೀಡುತ್ತಾ ಸರ್ಕಾರ ದಿನಗಳನ್ನು ಕಳೆಯುತ್ತಿದೆ” ಎಂದು ಅವರು ದೂರಿದರು.
ರಾಜ್ಯದಲ್ಲಿ ವಿಕಲಚೇತನರ ಪಿಂಚಣಿ, ವೃದ್ಧಾಪ್ಯ ವೇತನ ಹಾಗೂ ವಿಧವಾ ವೇತನ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದ ಅವರು, ಶಿಕ್ಷಣ ಇಲಾಖೆಯಲ್ಲಿಯೂ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಟೀಕಿಸಿದರು. ಶಾಲಾ ಮಕ್ಕಳ ಶೂ ಮತ್ತು ಸಾಕ್ಸ್ ಖರೀದಿಯಲ್ಲಿಯೂ ಅಕ್ರಮ ನಡೆದಿದೆ ಎಂದು ಆರೋಪಿಸಿದರು.
ಶಿಕ್ಷಕರ ನೇಮಕಾತಿಗೂ ಹಣಕಾಸಿನ ಸಮಸ್ಯೆ
ಹಣಕಾಸಿನ ಸಮಸ್ಯೆಯಿಂದ ಶಿಕ್ಷಕರ ನೇಮಕಾತಿ ಮಾಡಲು ಸಾಧ್ಯವಾಗುತ್ತಿಲ್ಲ. ಶಿಕ್ಷಕರಿಗೆ ವೇತನ ನೀಡುವುದಕ್ಕೂ ಸಮಸ್ಯೆ ಎದುರಾಗಿದೆ. ಯುವಕರಿಗೆ ಉದ್ಯೋಗ ನೀಡುವಲ್ಲಿಯೂ ಸರ್ಕಾರ ವಿಫಲವಾಗಿದೆ ಎಂದು ವಿಜಯೇಂದ್ರ ಆರೋಪಿಸಿದರು.
ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಬದಲು ವಿಶೇಷ ಅಧಿವೇಶನ ಕರೆದು ಕೇಂದ್ರ ಸರ್ಕಾರದ ಮೇಲೆ ಆರೋಪ ಹೊರಿಸುವ ಮೂಲಕ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ದೂರಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿರುವ ಅವಧಿಯಲ್ಲಿ ಉಚಿತ ಘೋಷಣೆಗಳು ಮತ್ತು ಭಾಷಣಗಳಿಗೆ ಸೀಮಿತವಾಗದೆ, ರಾಜ್ಯದ ನೈಜ ಆರ್ಥಿಕ ಪರಿಸ್ಥಿತಿಯನ್ನು ಜನರ ಮುಂದಿಡಬೇಕು. ಜಾಹೀರಾತುಗಳ ಮೂಲಕ ಜನರನ್ನು ಮರಳು ಮಾಡಲು ಸಾಧ್ಯವಿಲ್ಲ. ರಾಜ್ಯದ ಆರ್ಥಿಕ ಪರಿಸ್ಥಿತಿ ಕುರಿತು ಶ್ವೇತಪತ್ರ ಹೊರಡಿಸಿ ವಾಸ್ತವಾಂಶಗಳನ್ನು ಬಹಿರಂಗಪಡಿಸಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ಉಪಸ್ಥಿತರಿದ್ದರು.


