Homeಕರ್ನಾಟಕಮೈಸೂರಿನಲ್ಲಿ ಮನೆಮನೆಗೆ ಶುದ್ಧ ಕುಡಿಯುವ ನೀರು: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರಿನಲ್ಲಿ ಮನೆಮನೆಗೆ ಶುದ್ಧ ಕುಡಿಯುವ ನೀರು: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಪ್ರತಿಯೊಂದು ಮನೆಗೂ ನಲ್ಲಿಯ ಮೂಲಕ ನೇರವಾಗಿ ಕುಡಿಯಬಹುದಾದ ಶುದ್ಧ ನೀರು ಪೂರೈಸುವ ಉದ್ದೇಶದಿಂದ ‘ಮನೆಮನೆಗೆ ಶುದ್ಧ ಜಲ’ ಅಭಿಯಾನವನ್ನು ಮೈಸೂರಿನಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಒಂದು ವರ್ಷದೊಳಗೆ ಯೋಜನೆಯನ್ನು ಅನುಷ್ಠಾನಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮೈಸೂರಿನಲ್ಲಿ ಇಂದು ನಡೆದ ಸಭೆಯಲ್ಲಿ ಸಚಿವರು ಯೋಜನೆಯ ಅನುಷ್ಠಾನ, ತಾಂತ್ರಿಕ ಕಾರ್ಯಸಾಧ್ಯತೆ ಹಾಗೂ ಅಗತ್ಯ ಮೂಲಸೌಕರ್ಯಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಪಾಶ್ಚಿಮಾತ್ಯ ರಾಷ್ಟ್ರಗಳ ಹಲವು ನಗರಗಳಲ್ಲಿ ಮನೆಗಳಿಗೆ ನಲ್ಲಿಯ ಮೂಲಕ ನೇರವಾಗಿ ಶುದ್ಧ ಕುಡಿಯುವ ನೀರು ಪೂರೈಸುವ ವ್ಯವಸ್ಥೆ ಜಾರಿಯಲ್ಲಿದೆ. ಇದೇ ಮಾದರಿಯನ್ನು ಕರ್ನಾಟಕದಲ್ಲಿಯೂ ಪರಿಚಯಿಸಿ, ನಗರ ಪ್ರದೇಶಗಳ ಜನರಿಗೆ ಸುರಕ್ಷಿತ ಕುಡಿಯುವ ನೀರನ್ನು ಸುಲಭವಾಗಿ ಒದಗಿಸುವುದು ಈ ಅಭಿಯಾನದ ಉದ್ದೇಶವಾಗಿದೆ.

ಒಡಿಶಾದ ಪುರಿ ನಗರದಲ್ಲಿ ಈಗಾಗಲೇ ಈ ಮಾದರಿಯ ಯೋಜನೆ ಜಾರಿಯಲ್ಲಿದ್ದು, ಅದರ ಅನುಭವದ ಆಧಾರದ ಮೇಲೆ ಕರ್ನಾಟಕದಲ್ಲಿ ಅನುಷ್ಠಾನಕ್ಕೆ ಮೈಸೂರನ್ನು ಪ್ರಾಯೋಗಿಕ ನಗರವಾಗಿ ಆಯ್ಕೆ ಮಾಡಲಾಗಿದೆ. ನೀರಿನ ಗುಣಮಟ್ಟವನ್ನು ಖಾತರಿಪಡಿಸುವುದು, ಅಗತ್ಯ ತಾಂತ್ರಿಕ ವ್ಯವಸ್ಥೆ ರೂಪಿಸುವುದು ಹಾಗೂ ಯೋಜನೆ ಜಾರಿಯಲ್ಲಿನ ಸವಾಲುಗಳನ್ನು ಗುರುತಿಸುವ ಕುರಿತು ಸಭೆಯಲ್ಲಿ ಸಮಾಲೋಚನೆ ನಡೆಸಲಾಯಿತು.

ಒಡಿಶಾ ಸರ್ಕಾರದ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಂ.ಜಿ. ಮತಿ ವಾತನನ್ ಅವರು ಸಭೆಯಲ್ಲಿ ಪಾಲ್ಗೊಂಡು, ಪುರಿಯಲ್ಲಿ ಯೋಜನೆ ಅನುಷ್ಠಾನಗೊಳಿಸಿದ ಅನುಭವಗಳನ್ನು ಹಂಚಿಕೊಂಡರು. ಯೋಜನೆಯ ತಾಂತ್ರಿಕ ಸ್ವರೂಪ, ಕಾರ್ಯಸಾಧ್ಯತೆ ಮತ್ತು ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿದ ಸಲಹೆಗಳನ್ನು ನೀಡಿದರು.

ಕೊಳಗೇರಿ ಪ್ರದೇಶಗಳ ಸಮಗ್ರ ಅಭಿವೃದ್ಧಿಗೂ ಒತ್ತು

ನಗರ ಪ್ರದೇಶಗಳ ಕೊಳಗೇರಿ ನಿವಾಸಿಗಳ ಜೀವನಮಟ್ಟ ಸುಧಾರಿಸುವುದು, ಮೂಲಭೂತ ನಾಗರಿಕ ಸೌಲಭ್ಯಗಳನ್ನು ಬಲಪಡಿಸುವುದು ಹಾಗೂ ಸಮಗ್ರ ನಗರಾಭಿವೃದ್ಧಿಗೆ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಕೊಳಗೇರಿ ಪ್ರದೇಶಗಳ ಸಮಗ್ರ ಪರಿವರ್ತನೆ, ಸಾಮಾಜಿಕ ಮೂಲಸೌಕರ್ಯಗಳ ಅಭಿವೃದ್ಧಿ, ಸುಸ್ಥಿರ ಜೀವನೋಪಾಯದ ಅವಕಾಶಗಳ ಸೃಷ್ಟಿ ಮತ್ತು ಯೋಜನೆಗಳ ಅನುಷ್ಠಾನದಲ್ಲಿ ಸಮುದಾಯದ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸುವ ಕಾರ್ಯತಂತ್ರಗಳ ಬಗ್ಗೆಯೂ ಸಮಾಲೋಚನೆ ನಡೆಯಿತು.

ಮೈಸೂರಿನಲ್ಲಿ ‘ಮನೆಮನೆಗೆ ಶುದ್ಧ ಜಲ’ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಿದ ಬಳಿಕ ಅದರ ಫಲಿತಾಂಶಗಳು, ಸಾಧಕ-ಬಾಧಕಗಳು ಹಾಗೂ ಕಾರ್ಯಸಾಧ್ಯತೆಯನ್ನು ಸಮಗ್ರವಾಗಿ ಪರಿಶೀಲಿಸಿ, ರಾಜ್ಯದ ಇತರ ನಗರಗಳಿಗೂ ವಿಸ್ತರಿಸುವ ಕುರಿತು ಸಭೆಯಲ್ಲಿ ನಿರ್ಧರಿಸಲಾಯಿತು.

ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಬಿ.ಬಿ. ಕಾವೇರಿ, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ನಿರ್ದೇಶಕರು ಹಾಗೂ ಸಂಬಂಧಿತ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments