ರೈತರ ಸಮಸ್ಯೆಗಳಿಗೆ ಸ್ಪಂದಿಸುವುದು ಜನಪ್ರತಿನಿಧಿಗಳ ಆದ್ಯ ಕರ್ತವ್ಯ. ನೀರಾವರಿ ಕಾಲುವೆಗಳ ದುರಸ್ತಿ ಹಾಗೂ ಕೊನೆಯ ಭಾಗದ ರೈತರ ಜಮೀನುಗಳಿಗೆ ಸಮರ್ಪಕವಾಗಿ ನೀರು ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಭರವಸೆ ನೀಡಿದರು.
ಹಳೇಬಾತಿ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ನ ದೊಡ್ಡಬಾತಿ ವಲಯದ ವತಿಯಿಂದ ಆಯೋಜಿಸಿದ್ದ ಶ್ರೀ ಸತ್ಯನಾರಾಯಣ ಸ್ವಾಮಿ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನೀರಾವರಿ ಕಾಲುವೆಗಳಲ್ಲಿ ನೀರು ಹರಿಸಿದರೂ ಕೊನೆಯ ಭಾಗದ ರೈತರ ಜಮೀನುಗಳಿಗೆ ತಲುಪಲು ಐದಾರು ದಿನಗಳು ಬೇಕಾಗುತ್ತಿವೆ. ಇದರಿಂದ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಕಾಲುವೆಗಳ ದುರಸ್ತಿ ಹಾಗೂ ನೀರಿನ ಸಮರ್ಪಕ ಹಂಚಿಕೆಗೆ ವೈಜ್ಞಾನಿಕ ಯೋಜನೆ ರೂಪಿಸುವ ಅಗತ್ಯವಿದೆ. ಕೊಂಡಜ್ಜಿ ಭಾಗದಲ್ಲಿ ಏತ ನೀರಾವರಿ ಯೋಜನೆಗಳನ್ನು ಕೈಗೊಳ್ಳುವ ಪ್ರಸ್ತಾವಗಳಿದ್ದು, ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ನೀರಾವರಿ ಸಚಿವರೊಂದಿಗೆ ಚರ್ಚಿಸಿ ಸೂಕ್ತ ಕ್ರಮಕ್ಕೆ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.
ಮಹಿಳಾ ಸಬಲೀಕರಣಕ್ಕೆ ಧರ್ಮಸ್ಥಳ ಯೋಜನೆ ಮಾದರಿ
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ಹೆಗ್ಗಡೆ ಅವರು ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಕೈಗೊಂಡಿರುವ ಸೇವಾ ಕಾರ್ಯಗಳು ಸಾಮಾಜಿಕ ಪರಿವರ್ತನೆಗೆ ನಾಂದಿ ಹಾಡಿವೆ. ಗ್ರಾಮೀಣ ಮಹಿಳೆಯರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ಆರೋಗ್ಯದ ದೃಷ್ಟಿಯಿಂದ ಸಬಲರನ್ನಾಗಿಸುವಲ್ಲಿ ಯೋಜನೆಯ ಪಾತ್ರ ಮಹತ್ವದ್ದಾಗಿದೆ ಎಂದು ಶ್ಲಾಘಿಸಿದರು.
ಮಹಾತ್ಮ ಗಾಂಧೀಜಿ ಕಂಡ ಗ್ರಾಮ ಸ್ವರಾಜ್ಯದ ಕನಸನ್ನು ನನಸಾಗಿಸುವ ದಿಸೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಹಿಸುತ್ತಿದೆ. ಮಹಿಳೆಯರ ಸ್ವಾವಲಂಬನೆ, ಶಿಕ್ಷಣ, ಆರೋಗ್ಯ, ಶಿಸ್ತು, ಸಂಸ್ಕಾರ ಹಾಗೂ ಸಾಮಾಜಿಕ ಜಾಗೃತಿಗೆ ಒತ್ತು ನೀಡುವ ಮೂಲಕ ಆದರ್ಶ ಗ್ರಾಮಗಳ ನಿರ್ಮಾಣಕ್ಕೆ ಪೂರಕ ವಾತಾವರಣ ಸೃಷ್ಟಿಸುತ್ತಿದೆ ಎಂದು ಹೇಳಿದರು.
ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಮಾತಿನಂತೆ ಮಹಿಳೆಯರ ಶಿಕ್ಷಣ ಮತ್ತು ಸಬಲೀಕರಣದಿಂದ ಇಡೀ ಕುಟುಂಬವೇ ಪ್ರಗತಿಯತ್ತ ಸಾಗುತ್ತದೆ. ಮಹಿಳೆಯರು ಸ್ವಸಹಾಯ ಸಂಘಗಳ ಮೂಲಕ ದೊರೆಯುವ ಬಡ್ಡಿರಹಿತ ಹಾಗೂ ಕಡಿಮೆ ಬಡ್ಡಿದರದ ಸಾಲ ಸೌಲಭ್ಯಗಳು, ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಸಲಹೆ ನೀಡಿದರು.
ಮದ್ಯವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕರೆ
ಗ್ರಾಮೀಣ ಪ್ರದೇಶಗಳಲ್ಲಿ ಮದ್ಯವ್ಯಸನದಿಂದ ಅನೇಕ ಕುಟುಂಬಗಳು ಸಂಕಷ್ಟ ಎದುರಿಸುತ್ತಿವೆ. ಕ್ಷೇತ್ರ ಪ್ರವಾಸದ ಸಂದರ್ಭದಲ್ಲಿ ಮಹಿಳೆಯರು ಮದ್ಯದಂಗಡಿಗಳಿಂದ ಆಗುತ್ತಿರುವ ಸಮಸ್ಯೆಗಳನ್ನು ಗಮನಕ್ಕೆ ತಂದಿದ್ದಾರೆ. ಈ ಕುರಿತು ದಿಶಾ ಸಮಿತಿ ಸಭೆಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಸೂಚನೆ ನೀಡಲಾಗಿದೆ’ ಎಂದು ತಿಳಿಸಿದರು.ಮದ್ಯವ್ಯಸನದಿಂದ ದೂರವಿರುವ ದೃಢನಿರ್ಧಾರವನ್ನು ಪ್ರತಿಯೊಬ್ಬರೂ ಕೈಗೊಳ್ಳಬೇಕು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ನಡೆಸುತ್ತಿರುವ ಜಾಗೃತಿ ಕಾರ್ಯಕ್ರಮಗಳು ಶ್ಲಾಘನೀಯ ಎಂದರು.
30 ಸಾವಿರಕ್ಕೂ ಅಧಿಕ ಉಚಿತ ಡಯಾಲಿಸಿಸ್
ಡಾ. ಶಾಮನೂರು ಶಿವಶಂಕರಪ್ಪ ಅವರ ಆಶಯದಂತೆ ಸ್ಥಾಪನೆಯಾಗಿರುವ ಎಸ್ಎಸ್ಕೆ ಟ್ರಸ್ಟ್ ಮೂಲಕ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಹಲವು ಸೇವಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಕೇರ್ ಟ್ರಸ್ಟ್ಗೆ ಮೀಸಲಿರಿಸಿರುವ ಸುಮಾರು ₹20 ಕೋಟಿ ನಿಧಿಯ ಬಡ್ಡಿ ಆದಾಯವನ್ನು ಸಾರ್ವಜನಿಕರ ಆರೋಗ್ಯ ಹಾಗೂ ಶೈಕ್ಷಣಿಕ ನೆರವಿಗೆ ಬಳಸಲಾಗುತ್ತಿದೆ ಎಂದು ವಿವರಿಸಿದರು.
ಬಿಪಿಎಲ್ ಪಡಿತರ ಚೀಟಿದಾರರಿಗೆ ಉಚಿತ ಡಯಾಲಿಸಿಸ್ ಸೌಲಭ್ಯ ಒದಗಿಸಲಾಗುತ್ತಿದ್ದು, ತಿಂಗಳಿಗೆ ಸುಮಾರು 600ರಿಂದ 700 ಡಯಾಲಿಸಿಸ್ ಪ್ರಕ್ರಿಯೆಗಳನ್ನು ನಡೆಸಲಾಗುತ್ತಿದೆ. ಈವರೆಗೆ 30 ಸಾವಿರಕ್ಕೂ ಅಧಿಕ ಉಚಿತ ಡಯಾಲಿಸಿಸ್ ಪ್ರಕ್ರಿಯೆಗಳನ್ನು ಕೈಗೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.
ಜನ ಕಲ್ಯಾಣ ಟ್ರಸ್ಟ್ ಮೂಲಕ ಇದುವರೆಗೆ 10 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಸುಮಾರು ₹5 ಕೋಟಿ ವಿದ್ಯಾರ್ಥಿವೇತನ ವಿತರಿಸಲಾಗಿದೆ. ಪ್ರಸಕ್ತ ವರ್ಷವೂ ಸುಮಾರು 700 ವಿದ್ಯಾರ್ಥಿಗಳಿಗೆ ನೆರವು ನೀಡಲಾಗಿದೆ. ವೈದ್ಯಕೀಯ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಸುಮಾರು ₹15 ಸಾವಿರ ಹಾಗೂ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸುಮಾರು ₹6 ಸಾವಿರ ವಿದ್ಯಾರ್ಥಿವೇತನ ನೀಡಲಾಗುತ್ತಿದೆ’ ಎಂದರು. ಆರ್ಥಿಕ ಸಂಕಷ್ಟದ ಕಾರಣಕ್ಕೆ ಯಾವುದೇ ವಿದ್ಯಾರ್ಥಿಯ ಉನ್ನತ ಶಿಕ್ಷಣ ಮೊಟಕುಗೊಳ್ಳಬಾರದು. ಪೋಷಕರು ಸರ್ಕಾರ ಹಾಗೂ ವಿವಿಧ ಸಂಘ–ಸಂಸ್ಥೆಗಳ ವಿದ್ಯಾರ್ಥಿವೇತನ ಯೋಜನೆಗಳ ಕುರಿತು ಮಾಹಿತಿ ಪಡೆದು ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಬೇಕು ಎಂದು ಕಿವಿಮಾತು ಹೇಳಿದರು.
ಗ್ರಾಮದ ಮೂಲಸೌಕರ್ಯ ಅಭಿವೃದ್ಧಿಗೆ ಭರವಸೆ
ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಪ್ರಸ್ತಾಪಿಸಿದ ಮೂಲಸೌಕರ್ಯ ಸಮಸ್ಯೆಗಳಿಗೆ ಪ್ರತಿಕ್ರಿಯಿಸಿದ ಸಂಸದರು, ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಮಳೆಗಾಲದಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಈ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಬಾತಿ ಭಾಗದಲ್ಲಿ ಪಶು ಆಸ್ಪತ್ರೆ ಸ್ಥಾಪಿಸುವ ಬೇಡಿಕೆಯನ್ನು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರಲಾಗುವುದು. ಮುಂದಿನ ವರ್ಷ ಪಶು ಆಸ್ಪತ್ರೆ ಮಂಜೂರಾಗುವಂತೆ ಪ್ರಯತ್ನಿಸಲಾಗುವುದು. ಸಾರ್ವಜನಿಕರ ಅನುಕೂಲಕ್ಕಾಗಿ ಅಗತ್ಯವಿರುವ ಫೇವರ್ ಬ್ಲಾಕ್ಗಳ ಅಳವಡಿಕೆಗೆ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ ಅನುದಾನ ಒದಗಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಎಸ್ಎಸ್ಕೇರ್ ಟ್ರಸ್ಟ್ ವತಿಯಿಂದ ಹಳೇಬಾತಿ ಹಾಗೂ ಹೊಸಬಾತಿ ಭಾಗದಲ್ಲಿ ತಲಾ ನಾಲ್ಕು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಆರೋಗ್ಯ ಹಾಗೂ ದಂತ ತಪಾಸಣಾ ಶಿಬಿರಗಳನ್ನು ನಡೆಸುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯ ತರಬೇತಿ ಮತ್ತು ಉನ್ನತ ಶಿಕ್ಷಣದ ಕುರಿತು ಮಾರ್ಗದರ್ಶನ ನೀಡಲಾಗಿದೆ ಎಂದು ವಿವರಿಸಿದರು.
ಈ ಕಾರ್ಯಕ್ರಮದಲ್ಲಿ ಶ್ರೀ ಡಾ. ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಮಹಾಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಗ್ರಾಮದ ಎಂ.ಆರ್. ಗಣೇಶಯ್ಯ ಅಧ್ಯಕ್ಷತೆ ವಹಿಸಿದ್ದರು. ಲಕ್ಷ್ಮಣ್ ಎಂ., ಅಂಜನಪ್ಪ, ಕೆಂಚಪ್ಪ, ಪ್ರಭು, ಚಿಗಳಿ ಹನುಮಂತಪ್ಪ, ಮಂಜಪ್ಪ ಭೀಮನಹಳ್ಳಿ, ಸಿದ್ದೇಶ್, ಶಂಕರಮೂರ್ತಿ, ರಾಘವೇಂದ್ರ ರಾಜ ಅರಸ್ ಸೇರಿದಂತೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪದಾಧಿಕಾರಿಗಳು, ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.


