Homeಕರ್ನಾಟಕಪ್ರಧಾನಿ ಭೇಟಿಗೆ ಸಮಯ ನೀಡದಿರುವುದು ಸರಿಯಲ್ಲ: ಈಶ್ವರ ಖಂಡ್ರೆ

ಪ್ರಧಾನಿ ಭೇಟಿಗೆ ಸಮಯ ನೀಡದಿರುವುದು ಸರಿಯಲ್ಲ: ಈಶ್ವರ ಖಂಡ್ರೆ

ರಾಜ್ಯ ತೀವ್ರ ಬರ ಪರಿಸ್ಥಿತಿ ಎದುರಿಸುತ್ತಿದ್ದು, ಕೇಂದ್ರ ಸರ್ಕಾರದಿಂದ ಬರ ಪರಿಹಾರ ಸೇರಿದಂತೆ ವಿವಿಧ ಅನುದಾನಗಳ ಕೋಟ್ಯಂತರ ರೂಪಾಯಿ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಪ್ರಧಾನಿಯವರ ಭೇಟಿಗೆ ಮುಖ್ಯಮಂತ್ರಿ ಸಮಯ ಕೋರಿದರೂ ಇನ್ನೂ ಕಾಲಾವಕಾಶ ನೀಡದಿರುವುದು ಸರಿಯಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿಯವರು ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ರಾಜ್ಯದ ಜನರ ಹಿತದೃಷ್ಟಿಯಿಂದ ಕೂಡಲೇ ಮುಖ್ಯಮಂತ್ರಿಗಳ ನೇತೃತ್ವದ ಸರ್ವಪಕ್ಷ ನಿಯೋಗದ ಭೇಟಿಗೆ ಸಮಯ ನೀಡಬೇಕು ಎಂದು ಒತ್ತಾಯಿಸಿದರು.

ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳನ್ನೂ ಸಮಾನವಾಗಿ ಕಾಣಬೇಕು. ಸಂವಿಧಾನದ ಆಶಯ ಹಾಗೂ ಒಕ್ಕೂಟ ವ್ಯವಸ್ಥೆಗೆ ಧಕ್ಕೆಯಾಗದಂತೆ ನಡೆದುಕೊಳ್ಳಬೇಕು ಎಂದು ಹೇಳಿದರು.

ಗ್ರಾಮ ಪಂಚಾಯಿತಿಗಳಿಗೆ ₹2,186.20 ಕೋಟಿ ಬಿಡುಗಡೆಗೆ ಆಗ್ರಹ

15ನೇ ಹಣಕಾಸು ಆಯೋಗದ ಶಿಫಾರಸಿನಂತೆ 2025-26ನೇ ಸಾಲಿನಲ್ಲಿ ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ನ್ಯಾಯಯುತವಾಗಿ ಬಿಡುಗಡೆಯಾಗಬೇಕಿದ್ದ ₹2,186.20 ಕೋಟಿ ಅನುದಾನವನ್ನು ಕೇಂದ್ರ ಸರ್ಕಾರ ಕ್ಷುಲ್ಲಕ ಕಾರಣ ನೀಡಿ ತಡೆಹಿಡಿದಿದೆ. ಇದು ರಾಜ್ಯಕ್ಕೆ ಮಾಡಿರುವ ಅನ್ಯಾಯ ಎಂದು ಖಂಡ್ರೆ ಆಕ್ಷೇಪಿಸಿದರು.

ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡದ ಕಾರಣ ರಾಜ್ಯದ 5,927 ಗ್ರಾಮ ಪಂಚಾಯಿತಿಗಳು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಇಂತಹ ಧೋರಣೆ ಗ್ರಾಮ ಪಂಚಾಯಿತಿಗಳ ಮೂಲ ಉದ್ದೇಶವನ್ನೇ ದುರ್ಬಲಗೊಳಿಸುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ರಾಜ್ಯದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ರಾಜ್ಯದಿಂದ ಎನ್‌ಡಿಎ ಮೈತ್ರಿಕೂಟದ 19 ಸಂಸದರು ಆಯ್ಕೆಯಾಗಿದ್ದರೂ, ರಾಜ್ಯದ ಹಿತಾಸಕ್ತಿಯ ವಿಚಾರದಲ್ಲಿ ಅವರು ಧ್ವನಿ ಎತ್ತುತ್ತಿಲ್ಲ ಎಂದು ಟೀಕಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments