ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ (ಎಸ್ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್ಟಿ) ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿರುವ ಕಾಯ್ದೆಗೆ ಸಂವಿಧಾನಾತ್ಮಕ ರಕ್ಷಣೆ ಒದಗಿಸುವಂತೆ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಡಾ. ವೀರೇಂದ್ರ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.
ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸುವ ಉದ್ದೇಶದಿಂದ 2022ರಲ್ಲಿ ಕಾಯ್ದೆ ರೂಪಿಸಲಾಗಿತ್ತು. 2023ರ ಜನವರಿ 11ರಂದು ರಾಜ್ಯಪಾಲರ ಅಂಕಿತ ಪಡೆದ ಕಾಯ್ದೆ, 2022ರ ನವೆಂಬರ್ 1ರಿಂದ ಪೂರ್ವಾನ್ವಯವಾಗಿ ಜಾರಿಗೆ ಬಂದಿತ್ತು.
2011ರ ಜನಗಣತಿ ಪ್ರಕಾರ ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಜನಸಂಖ್ಯೆ ಶೇ.17.15 ಹಾಗೂ ಪರಿಶಿಷ್ಟ ಪಂಗಡಗಳ ಜನಸಂಖ್ಯೆ ಶೇ.6.95ರಷ್ಟಿದೆ. ಈ ಸಮುದಾಯಗಳ ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದಿರುವಿಕೆಯನ್ನು ಪರಿಗಣಿಸಿ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಆಯೋಗವು ಮೀಸಲಾತಿ ಹೆಚ್ಚಳಕ್ಕೆ ಶಿಫಾರಸು ಮಾಡಿತ್ತು. ಅಲ್ಲದೆ, ಕಾಯ್ದೆಗೆ ಸಂವಿಧಾನಾತ್ಮಕ ರಕ್ಷಣೆ ಒದಗಿಸಲು ಸಂವಿಧಾನದ 9ನೇ ಅನುಸೂಚಿಗೆ ಸೇರಿಸುವಂತೆಯೂ ಸಲಹೆ ನೀಡಿತ್ತು.
ಆದರೆ, ರಾಜ್ಯದಲ್ಲಿ ಒಟ್ಟು ಮೀಸಲಾತಿ ಪ್ರಮಾಣ ಶೇ.56ಕ್ಕೆ ಏರಿಕೆಯಾಗಿರುವುದು ಶೇ.50ರ ಮಿತಿಯನ್ನು ಮೀರಿದೆ ಎಂಬ ಕಾರಣಕ್ಕೆ ಕರ್ನಾಟಕ ಹೈಕೋರ್ಟ್ 2026ರ ಅಕ್ಟೋಬರ್ 12ರಂದು ಮೀಸಲಾತಿ ಹೆಚ್ಚಳದ ನಿಬಂಧನೆಗಳನ್ನು ರದ್ದುಗೊಳಿಸಿದೆ. ಈ ತೀರ್ಪಿನ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದೆ.
ಈ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಶೇ.69ರ ಮೀಸಲಾತಿಗೆ ಸಂವಿಧಾನದ 76ನೇ ತಿದ್ದುಪಡಿ ಮೂಲಕ 9ನೇ ಅನುಸೂಚಿಯಲ್ಲಿ ರಕ್ಷಣೆ ಒದಗಿಸಿರುವ ಮಾದರಿಯಲ್ಲಿಯೇ ಕರ್ನಾಟಕದ ಮೀಸಲಾತಿ ಹೆಚ್ಚಳದ ಕಾಯ್ದೆಗೂ ರಕ್ಷಣೆ ನೀಡಬೇಕು ಎಂದು ಪರಮೇಶ್ವರ ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಈ ಸಂಬಂಧ ರಾಜ್ಯ ಸರ್ಕಾರ 2023ರ ಮಾರ್ಚ್ 23ರಂದೇ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, 2025ರ ಡಿಸೆಂಬರ್ 18ರಂದು ವಿಧಾನಸಭೆಯಲ್ಲಿಯೂ ನಿರ್ಣಯ ಅಂಗೀಕರಿಸಲಾಗಿದೆ. 2026ರ ಏಪ್ರಿಲ್ 16ರಂದು ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಪ್ರಧಾನಿಗೆ ಪತ್ರ ಬರೆದಿದ್ದರು. ಆದರೂ ನ್ಯಾಯಾಲಯದಲ್ಲಿ ಪ್ರಕರಣ ಬಾಕಿಯಿರುವ ಕಾರಣ ಕೇಂದ್ರ ಸರ್ಕಾರ ಈ ವಿಚಾರದಲ್ಲಿ ನಿರ್ಧಾರ ಕೈಗೊಳ್ಳದೆ ಮುಂದೂಡಿದೆ ಎಂದು ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನ್ಯಾಯಾಂಗ ಪ್ರಕ್ರಿಯೆ ನಡೆಯುತ್ತಿದೆ ಎಂಬ ಕಾರಣಕ್ಕೆ ಸಾಮಾಜಿಕ ನ್ಯಾಯದ ಉದ್ದೇಶವನ್ನು ಅನಿರ್ದಿಷ್ಟಾವಧಿಗೆ ಮುಂದೂಡಬಾರದು. ಹಿಂದುಳಿದ ಸಮುದಾಯಗಳ ಶೈಕ್ಷಣಿಕ ಮತ್ತು ಉದ್ಯೋಗಾವಕಾಶಗಳನ್ನು ರಕ್ಷಿಸುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜಂಟಿ ಜವಾಬ್ದಾರಿಯಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.
ಪ್ರಧಾನಮಂತ್ರಿಗಳು ಈ ವಿಚಾರದಲ್ಲಿ ಖುದ್ದು ಮಧ್ಯಪ್ರವೇಶಿಸಿ, ಕರ್ನಾಟಕದ ಮೀಸಲಾತಿ ಹೆಚ್ಚಳ ಕಾಯ್ದೆಯನ್ನು 9ನೇ ಅನುಸೂಚಿಗೆ ಸೇರಿಸಲು ಅಗತ್ಯವಾದ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.
ಜತೆಗೆ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗ ಮತ್ತು ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗಗಳೊಂದಿಗೆ ಸಮಾಲೋಚನೆ ನಡೆಸಿ, ನ್ಯಾಯಾಲಯ ಗುರುತಿಸಿರುವ ಸಂವಿಧಾನಾತ್ಮಕ ಹಾಗೂ ಪ್ರಕ್ರಿಯಾತ್ಮಕ ಸಮಸ್ಯೆಗಳನ್ನು ಪರಿಹರಿಸಬೇಕು. ಕೇಂದ್ರದ ಕಾನೂನು ಮತ್ತು ನ್ಯಾಯ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ, ಬುಡಕಟ್ಟು ವ್ಯವಹಾರಗಳು ಹಾಗೂ ಗೃಹ ಸಚಿವಾಲಯಗಳು ಸಮನ್ವಯದಿಂದ ಕಾಲಮಿತಿಯೊಳಗೆ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ.
ದೇಶದ ಬದಲಾಗುತ್ತಿರುವ ಸಾಮಾಜಿಕ ಪರಿಸ್ಥಿತಿಗೆ ಅನುಗುಣವಾಗಿ ಶೇ.50ರ ಮೀಸಲಾತಿ ಮಿತಿಯ ಪ್ರಸ್ತುತತೆಯ ಬಗ್ಗೆಯೂ ರಾಷ್ಟ್ರಮಟ್ಟದಲ್ಲಿ ಮರುಪರಿಶೀಲನೆ ಮತ್ತು ವ್ಯಾಪಕ ಚರ್ಚೆ ನಡೆಯಬೇಕಿದೆ. ಸಾಮಾಜಿಕ ನ್ಯಾಯ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮೀರಿದ ವಿಚಾರವಾಗಿದ್ದು, ಶತಮಾನಗಳಿಂದ ಅವಕಾಶವಂಚಿತರಾದ ಸಮುದಾಯಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಸಮಾನ ಅವಕಾಶ ಕಲ್ಪಿಸುವುದು ರಾಷ್ಟ್ರದ ಸಾಮೂಹಿಕ ಕರ್ತವ್ಯವಾಗಿದೆ ಎಂದು ಡಾ.ಜಿ. ಪರಮೇಶ್ವರ ಪತ್ರದಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕದ ದೀರ್ಘಕಾಲದ ಬೇಡಿಕೆಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿ, ಎಸ್ಸಿ ಮೀಸಲಾತಿಯನ್ನು ಶೇ.17ಕ್ಕೆ ಹಾಗೂ ಎಸ್ಟಿ ಮೀಸಲಾತಿಯನ್ನು ಶೇ.7ಕ್ಕೆ ಹೆಚ್ಚಿಸಿರುವ ಕಾಯ್ದೆಗೆ ಸಂವಿಧಾನದ 9ನೇ ಅನುಸೂಚಿಯಡಿ ರಕ್ಷಣೆ ಒದಗಿಸಲು ನಿಗದಿತ ಅವಧಿಯೊಳಗೆ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.


