ಪರಿಶಿಷ್ಟ ಜಾತಿಗಳ ಒಳಮೀಸಲಾತಿಗಾಗಿ ನಡೆದ 40 ವರ್ಷಗಳ ಸುದೀರ್ಘ ಹೋರಾಟಕ್ಕೆ ಅಂತ್ಯ ದೊರೆತಿದ್ದು, ಮೀಸಲಾತಿಯನ್ನು ಅಣ್ಣ-ತಮ್ಮಂದಿರಂತೆ ಹಂಚಿಕೊಂಡು ಎಲ್ಲರೂ ಒಗ್ಗಟ್ಟಿನಿಂದ ಮುನ್ನಡೆಯಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.
ತಾಲೂಕಿನ ಜಾಲಿಗೆ ಗ್ರಾಮದಲ್ಲಿ ಅಂಬೇಡ್ಕರ್ ಸೇವಾ ಸಂಘದ ವತಿಯಿಂದ ಆಯೋಜಿಸಿದ್ದ ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಅವರ ಏಳು ಅಡಿ ಎತ್ತರದ ಪುತ್ಥಳಿಗಳನ್ನು ಅನಾವರಣಗೊಳಿಸಿ ಅವರು ಮಾತನಾಡಿದರು.
ಎಲ್ಲ ಜಾತಿ, ವರ್ಗ ಮತ್ತು ಧರ್ಮಗಳ ಸರ್ವತೋಮುಖ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಡಾ.ಬಿ.ಆರ್. ಅಂಬೇಡ್ಕರ್ ಅವರು ದೇಶಕ್ಕೆ ಬೃಹತ್ ಸಂವಿಧಾನವನ್ನು ನೀಡಿದ್ದಾರೆ. ಸಂವಿಧಾನವೇ ದೇಶದ ಅಭಿವೃದ್ಧಿಗೆ ಮೂಲ ಆಧಾರವಾಗಿದೆ. ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಮ್ ಅವರ ಕೊಡುಗೆಯೂ ಸ್ಮರಣೀಯವಾಗಿದೆ. ಇಬ್ಬರು ಮಹಾನ್ ನಾಯಕರ ಪುತ್ಥಳಿಗಳನ್ನು ಪ್ರತಿಷ್ಠಾಪಿಸುವ ಮೂಲಕ ನಾವೆಲ್ಲರೂ ಒಂದೇ ಎಂಬ ಸಂದೇಶ ಸಾರಿರುವ ಜಾಲಿಗೆ ಗ್ರಾಮ ಪಂಚಾಯಿತಿ ಹಾಗೂ ಅಂಬೇಡ್ಕರ್ ಸೇವಾ ಸಂಘದ ಕಾರ್ಯ ಶ್ಲಾಘನೀಯ ಎಂದರು.
ದೇಶದ ಸ್ವಾತಂತ್ರ್ಯಕ್ಕಾಗಿ ಮಹಾತ್ಮ ಗಾಂಧೀಜಿ, ಸುಭಾಷ್ ಚಂದ್ರ ಬೋಸ್, ಮೌಲಾನಾ ಅಬುಲ್ ಕಲಾಂ ಆಜಾದ್, ಜವಾಹರಲಾಲ್ ನೆಹರು ಹಾಗೂ ಬಾಬು ಜಗಜೀವನ್ ರಾಮ್ ಸೇರಿದಂತೆ ಅನೇಕ ನಾಯಕರು ಹೋರಾಟ ನಡೆಸಿದ್ದಾರೆ. ಹಲವು ವರ್ಷಗಳ ಜೈಲುವಾಸ ಅನುಭವಿಸಿದ ಜವಾಹರಲಾಲ್ ನೆಹರು ಅವರ ತ್ಯಾಗವೂ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ವದ್ದಾಗಿದೆ ಎಂದು ಸ್ಮರಿಸಿದರು.
ಮಹಾತ್ಮ ಗಾಂಧೀಜಿ ಮತ್ತು ಜವಾಹರಲಾಲ್ ನೆಹರು ಅವರ ಕಾಲಘಟ್ಟದಲ್ಲಿ ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಆಯ್ಕೆ ಮಾಡುವ ಮೂಲಕ ದೇಶಕ್ಕೆ ಶ್ರೇಷ್ಠ ಸಂವಿಧಾನ ದೊರೆಯಲು ಕಾರಣವಾಯಿತು ಎಂದರು.
ಒಳಮೀಸಲಾತಿಗಾಗಿ ಸುಮಾರು 40 ವರ್ಷಗಳಿಂದ ನಡೆದ ಹೋರಾಟದ ಫಲವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಒಳಮೀಸಲಾತಿ ಜಾರಿಗೆ ಬಂದಿದೆ. ಅಣ್ಣ-ತಮ್ಮಂದಿರ ನಡುವಿನ ವ್ಯಾಜ್ಯದಂತಿದ್ದ ಸಮಸ್ಯೆ ಬಗೆಹರಿದಿದ್ದು, ಇನ್ನು ಎಲ್ಲರೂ ಅಣ್ಣ-ತಮ್ಮಂದಿರಂತೆ ಒಗ್ಗಟ್ಟಿನಿಂದ ಇರಬೇಕು. ಹೋರಾಟಗಳು ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ನಡೆಯಬೇಕು. ಮುಂದುವರಿದ ಸಮುದಾಯಗಳೊಂದಿಗೂ ಪ್ರೀತಿ, ವಿಶ್ವಾಸ ಮತ್ತು ಸೌಹಾರ್ದತೆಯಿಂದ ಸಾಗಿದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.
ದೇವನಹಳ್ಳಿ ತಾಲೂಕಿನಲ್ಲಿ ರಸ್ತೆ, ಚರಂಡಿ, ಯುಜಿಡಿ ಸೇರಿದಂತೆ ವಿವಿಧ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲಿಯೂ ಹಂತ ಹಂತವಾಗಿ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು. ದೇವನಹಳ್ಳಿಯ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವುದು ನನ್ನ ಸಂಕಲ್ಪವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪಾಲನಹಳ್ಳಿ ಮಠದ ಪೀಠಾಧ್ಯಕ್ಷ ಸಿದ್ದರಾಜು ಸ್ವಾಮೀಜಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜಣ್ಣ, ಡಿಸಿಸಿ ಅಧ್ಯಕ್ಷ ಪ್ರಸನ್ನ ಕುಮಾರ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಗನ್ನಾಥ್, ಮಾಜಿ ಬಯಪ್ಪ ಅಧ್ಯಕ್ಷ ಶಾಂತಕುಮಾರ್, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಸಿ. ಮಂಜುನಾಥ್, ಜಾಲಿಗೆ ಮುನಿರಾಜು, ಬುಲ್ಲಹಳ್ಳಿ ರಾಜಪ್ಪ ಸೇರಿದಂತೆ ದಲಿತ ಮುಖಂಡರು ಉಪಸ್ಥಿತರಿದ್ದರು.


