Homeಕರ್ನಾಟಕಹಿರಿಯೂರು ಕ್ಷೇತ್ರಕ್ಕೆ ಒಮ್ಮತದ ಅಭ್ಯರ್ಥಿ ಕಣಕ್ಕಿಳಿಸುತ್ತೇವೆ: ಹೆಚ್.ಡಿ. ಕುಮಾರಸ್ವಾಮಿ

ಹಿರಿಯೂರು ಕ್ಷೇತ್ರಕ್ಕೆ ಒಮ್ಮತದ ಅಭ್ಯರ್ಥಿ ಕಣಕ್ಕಿಳಿಸುತ್ತೇವೆ: ಹೆಚ್.ಡಿ. ಕುಮಾರಸ್ವಾಮಿ

ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಥವಾ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಬಿಜೆಪಿ-ಜೆಡಿಎಸ್ ಎನ್‌ಡಿಎ ಮೈತ್ರಿಕೂಟದಲ್ಲಿ ಯಾವುದೇ ಗೊಂದಲವಿಲ್ಲ. ಎರಡೂ ಪಕ್ಷಗಳ ನಾಯಕರು ಪರಸ್ಪರ ಚರ್ಚಿಸಿ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದ್ದಾರೆ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಮತ್ತು ಬಿಜೆಪಿ ನಡುವೆ ಉತ್ತಮ ಸಮನ್ವಯವಿದೆ. ಕಾಂಗ್ರೆಸ್ ನಾಯಕರು ಮೈತ್ರಿಕೂಟದಲ್ಲಿ ಬಿರುಕು ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ರಾಜ್ಯದ ಹಿತದೃಷ್ಟಿಯಿಂದ ಎರಡೂ ಪಕ್ಷಗಳು ಒಗ್ಗಟ್ಟಾಗಿ ಕೆಲಸ ಮಾಡುತ್ತಿವೆ. ರಾಜ್ಯ ಸರ್ಕಾರದ ಭ್ರಷ್ಟಾಚಾರ, ಆಡಳಿತ ವೈಫಲ್ಯ ಹಾಗೂ ಹಗರಣಗಳ ವಿರುದ್ಧ ಜಂಟಿಯಾಗಿ ಹೋರಾಟ ರೂಪಿಸಲಾಗುವುದು ಎಂದರು.

ಹಿರಿಯೂರು ಕ್ಷೇತ್ರದಲ್ಲಿ ಉತ್ತಮ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಎರಡೂ ಪಕ್ಷಗಳ ನಾಯಕರು ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಒಗ್ಗಟ್ಟಿನಿಂದ ಎದುರಿಸುತ್ತೇವೆ ಎಂದು ಹೇಳಿದರು.

ಗ್ಯಾರಂಟಿಗಳ ಹೆಸರಿನಲ್ಲಿ ಅಭಿವೃದ್ಧಿಗೆ ಕತ್ತರಿ

ಕಾಂಗ್ರೆಸ್ ಸರ್ಕಾರ ಕಳೆದ ಮೂರೂವರೆ ವರ್ಷಗಳಿಂದ ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿ ಗ್ಯಾರಂಟಿ ಯೋಜನೆಗಳ ಮೂಲಕ ಜನರನ್ನು ದಿಕ್ಕು ತಪ್ಪಿಸುತ್ತಿದೆ. ಗ್ಯಾರಂಟಿಗಳಿಗೆ ಹಣ ಎಲ್ಲಿಂದ ಬರುತ್ತಿದೆ? ಮುಖ್ಯಮಂತ್ರಿ ಮತ್ತು ಸಚಿವರು ತಮ್ಮ ಜೇಬಿನಿಂದ ಹಣ ನೀಡುತ್ತಿದ್ದಾರೆಯೇ ಎಂದು ಪ್ರಶ್ನಿಸಿದ ಅವರು, ಮುದ್ರಾಂಕ ಶುಲ್ಕ, ಮೋಟಾರು ವಾಹನ ತೆರಿಗೆ ಹಾಗೂ ಅಬಕಾರಿ ಸುಂಕ ಹೆಚ್ಚಿಸುವ ಮೂಲಕ ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ ಹಾಕಲಾಗುತ್ತಿದೆ ಎಂದು ಆರೋಪಿಸಿದರು.

ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ₹32 ಸಾವಿರ ಕೋಟಿ ಮೊತ್ತದ ಯೋಜನೆಗಳನ್ನು ಘೋಷಿಸಲಾಗಿದೆ. ಆದರೆ ಬೊಕ್ಕಸದಲ್ಲಿ ಹಣವಿಲ್ಲದಿರುವಾಗ ಈ ಯೋಜನೆಗಳಿಗೆ ಅನುದಾನ ಎಲ್ಲಿಂದ ತರುತ್ತಾರೆ? ಇದು ಕೇವಲ ಜನರ ಕಣ್ಣೊರೆಸುವ ತಂತ್ರ ಎಂದು ಟೀಕಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರೇ ಅನುದಾನ ಹಂಚಿಕೆ ವಿಚಾರದಲ್ಲಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳ ನೆಪದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಕಡಿತಗೊಳಿಸಲಾಗುತ್ತಿದೆ. ರಾಜ್ಯ ಸರ್ಕಾರ ಕೇಂದ್ರದ ಮೇಲೆ ಅನಗತ್ಯವಾಗಿ ಆರೋಪ ಮಾಡುವುದನ್ನು ಬಿಟ್ಟು ತನ್ನ ಆಡಳಿತ ವೈಫಲ್ಯ ಸರಿಪಡಿಸಿಕೊಳ್ಳಲಿ ಎಂದರು.

ರೈತರ ಪರಿಹಾರ ವಿಚಾರದಲ್ಲಿ ಗೊಂದಲ

ಬರ ನಿರ್ವಹಣೆ ಹಾಗೂ ರೈತರಿಗೆ ಪರಿಹಾರ ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ ಸ್ಪಷ್ಟ ನಿಲುವು ಹೊಂದಿಲ್ಲ. ಕೇಂದ್ರ ಸರ್ಕಾರದ ಎನ್‌ಡಿಆರ್‌ಎಫ್ ನಿಯಮಗಳ ಅಡಿಯಲ್ಲಿ ಪರಿಹಾರ ಕೇಳುವಾಗಲೂ ಸರಿಯಾದ ಲೆಕ್ಕಾಚಾರ ನೀಡುತ್ತಿಲ್ಲ. ಮೊದಲು ₹3 ಸಾವಿರ ಕೋಟಿ ಪರಿಹಾರ ಕೇಳಿದ್ದ ರಾಜ್ಯ ಸರ್ಕಾರ ನಂತರ ₹7,500 ಕೋಟಿ, ₹11 ಸಾವಿರ ಕೋಟಿ ಹಾಗೂ ಈಗ ₹22 ಸಾವಿರ ಕೋಟಿ ಬೇಡಿಕೆ ಮುಂದಿಟ್ಟಿದೆ. ಪ್ರಧಾನಿಗಳ ಎದುರು ₹62 ಸಾವಿರ ಕೋಟಿ ಕೃಷಿ ನಷ್ಟವಾಗಿದೆ ಎಂದು ಹೇಳಿರುವ ಮುಖ್ಯಮಂತ್ರಿ, ಅದಕ್ಕೆ ಸಂಬಂಧಿಸಿದ ಸ್ಪಷ್ಟ ಲೆಕ್ಕ ನೀಡಿಲ್ಲ ಎಂದು ಆರೋಪಿಸಿದರು.

ರೈತರು ಪ್ರತಿ ಎಕರೆಗೆ ₹15 ಸಾವಿರದಿಂದ ₹20 ಸಾವಿರದವರೆಗೆ ಖರ್ಚು ಮಾಡುತ್ತಿದ್ದರೆ, ರಾಜ್ಯ ಸರ್ಕಾರ ಕೇವಲ ₹2 ಸಾವಿರ ಪರಿಹಾರ ನೀಡುತ್ತಿದೆ. ರೈತರ ಸಂಕಷ್ಟಕ್ಕೆ ಸೂಕ್ತವಾಗಿ ಸ್ಪಂದಿಸದೆ ಕೇಂದ್ರದತ್ತ ಬೊಟ್ಟು ಮಾಡುವುದು ಸರಿಯಲ್ಲ ಎಂದರು.

ಕಾರ್ಮಿಕರ ₹40 ಸಾವಿರ ಕೋಟಿ ಹಣ ದುರ್ಬಳಕೆ ಆರೋಪ

ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಸುಮಾರು ₹40 ಸಾವಿರ ಕೋಟಿ ಸೆಸ್ ಹಣವನ್ನು ಬೇರೆ ಉದ್ದೇಶಗಳಿಗೆ ಬಳಸಲಾಗುತ್ತಿದೆ ಎಂದು ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.

ಕಾರ್ಮಿಕರಿಗಾಗಿ ಮೀಸಲಾದ ಇಷ್ಟು ದೊಡ್ಡ ಮೊತ್ತದ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಲಾಗುತ್ತಿದೆಯೇ ಅಥವಾ ದುರ್ಬಳಕೆ ಮಾಡಲಾಗುತ್ತಿದೆಯೇ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು. ಸರ್ಕಾರಿ ಶಾಲೆಗಳ ನಿರ್ವಹಣೆಗೂ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ ಸಾಲ ಹಾಗೂ ಸಿಎಸ್‌ಆರ್ ನಿಧಿಯನ್ನು ಅವಲಂಬಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕಿಸಿದರು.

ಹಾಸನಾಂಬ ದೇವಸ್ಥಾನದಲ್ಲಿ ಈ ಬಾರಿ ದಾಖಲೆಯ ₹29 ಕೋಟಿ ಆದಾಯ ಸಂಗ್ರಹವಾಗಿದೆ. ಇದೀಗ ಸರ್ಕಾರದ ಕಣ್ಣು ದೇವಸ್ಥಾನಗಳ ಹುಂಡಿ ಹಣದ ಮೇಲೂ ಬಿದ್ದಿದೆ. ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಬಳಕೆಯಾಗಬೇಕಾದ ಹಣವನ್ನು ಬೇರೆ ಉದ್ದೇಶಗಳಿಗೆ ವರ್ಗಾಯಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

ಸ್ಟಿಂಗ್ ಆಪರೇಷನ್: ಪೊಲೀಸ್ ಕಮಿಷನರ್ ವಿರುದ್ಧ ವಾಗ್ದಾಳಿ

ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣದ ಕುರಿತು ಮಾತನಾಡಿದ ಅವರು, ತಮ್ಮ ದೆಹಲಿ ನಿವಾಸದಲ್ಲಿಯೇ ಪ್ರಕರಣದ ಆರೋಪಿಗೆ ಮೊಬೈಲ್ ಹಸ್ತಾಂತರವಾಗಿದೆ ಎಂಬ ಬೆಂಗಳೂರು ಪೊಲೀಸ್ ಕಮಿಷನರ್ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದರು.

ಪೊಲೀಸ್ ಕಮಿಷನರ್ ಒಬ್ಬರು ಹೆಡ್‌ಕ್ಲರ್ಕ್‌ಗಿಂತ ಕಡೆಯಾಗಿ ಹೇಳಿಕೆ ನೀಡಿದ್ದಾರೆ. ತಮ್ಮ ಸ್ಥಾನ ಉಳಿಸಿಕೊಳ್ಳಲು ಯಾರ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಈ ಸರ್ಕಾರ ಮತ್ತು ಅಧಿಕಾರಿಗಳಿಂದ ತಮ್ಮನ್ನು ಸುಲಭವಾಗಿ ಎದುರಿಸಲು ಸಾಧ್ಯವಿಲ್ಲ. ಸ್ಟಿಂಗ್ ಆಪರೇಷನ್ ಯಾರಿಗೆ ತಿರುಗುಬಾಣವಾಗಲಿದೆ ಎಂಬುದನ್ನು ಶೀಘ್ರದಲ್ಲೇ ಬಹಿರಂಗಪಡಿಸುತ್ತೇನೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಇದು ಕೇವಲ ಟ್ರೇಲರ್ ಎಂದಿದ್ದಾರೆ. ನಾನು ಸಿನಿಮಾ ಮಾಡಿದವನು, ಇವರು ಈಗ ಸಿನಿಮಾ ಮಾಡಲು ಹೊರಟಿದ್ದಾರೆ. ಇವರ ಸಿನಿಮಾದ ಬಗ್ಗೆಯೂ ಮುಂದಿನ ದಿನಗಳಲ್ಲಿ ವಿವರವಾಗಿ ಮಾತನಾಡುತ್ತೇನೆ ಎಂದು ತಿರುಗೇಟು ನೀಡಿದರು.

ನಾಡಿನ ಸಂಕಷ್ಟ ದೂರವಾಗಲಿ ಎಂದು ಪ್ರಾರ್ಥನೆ

ನಮ್ಮ ಕುಟುಂಬಕ್ಕೆ ದೈವದಲ್ಲಿ ಅಪಾರ ನಂಬಿಕೆಯಿದೆ. ಬಹಳ ದಿನಗಳಿಂದ ಕೊಲ್ಲೂರು ಮತ್ತು ಧರ್ಮಸ್ಥಳಕ್ಕೆ ಭೇಟಿ ನೀಡಬೇಕೆಂದು ಬಯಸಿದ್ದೆ. ಕೊಲ್ಲೂರು ಶ್ರೀ ಮೂಕಾಂಬಿಕೆ ಹಾಗೂ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು, ನಾಡಿನಲ್ಲಿ ಎದುರಾಗಿರುವ ಪ್ರಕೃತಿ ವಿಕೋಪಗಳು ಹಾಗೂ ಆಡಳಿತಾತ್ಮಕ ಸಂಕಷ್ಟಗಳು ದೂರವಾಗಲಿ ಎಂದು ಪ್ರಾರ್ಥಿಸಿದ್ದೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ವಿಧಾನ ಪರಿಷತ್‌ನ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಸ್.ಎಲ್. ಭೋಜೇಗೌಡ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಕುಮಾರಸ್ವಾಮಿ ಅವರು ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ, ಸೊಸೆ ರೇವತಿ ನಿಖಿಲ್ ಹಾಗೂ ಮೊಮ್ಮಗ ಅವ್ಯಾನ್ ದೇವ್ ಅವರೊಂದಿಗೆ ಶ್ರೀ ಮೂಕಾಂಬಿಕೆಯ ದರ್ಶನ ಪಡೆದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments