ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಕುಡಿಯುವ ನೀರು ಮತ್ತು ಕೃಷಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸುದೀರ್ಘ ಪತ್ರ ಬರೆದು, ಕಾವೇರಿ ನೀರು ನಿರ್ವಹಣೆಯಲ್ಲಿನ ಸಮಸ್ಯೆಗಳಿಗೆ ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಪರಿಹಾರ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.
ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರಕ್ಕೆ (CWMA) ನೀಡಲಾಗಿರುವ ಅಧಿಕಾರಗಳನ್ನು ಮೊಟಕುಗೊಳಿಸಬೇಕು, ಹಳೆಯ ದತ್ತಾಂಶಗಳ ಆಧಾರದ ಮೇಲೆ ರೂಪಿಸಿರುವ ಕಾವೇರಿ ನ್ಯಾಯಮಂಡಳಿಯ ತೀರ್ಪುಗಳನ್ನು ಮರುಪರಿಶೀಲಿಸಬೇಕು ಹಾಗೂ ಮೇಕೆದಾಟು ಯೋಜನೆಗೆ ಶೀಘ್ರ ಅನುಮೋದನೆ ನೀಡಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.
2026ರಲ್ಲಿ ಕರ್ನಾಟಕವು ತೀವ್ರ ಮಳೆ ಕೊರತೆ ಎದುರಿಸಿದ್ದು, ವಾಡಿಕೆಯ ಮಳೆಯ ಶೇ.60ರಷ್ಟು ಮಾತ್ರ ಸುರಿದಿದೆ. ಪರಿಣಾಮ ರಾಜ್ಯದ ಜಲಾಶಯಗಳು ತಮ್ಮ ಒಟ್ಟು ಸಾಮರ್ಥ್ಯದ ಶೇ.50ರಿಂದ 55ರಷ್ಟು ಮಾತ್ರ ಭರ್ತಿಯಾಗಿವೆ. ಇಂತಹ ಪರಿಸ್ಥಿತಿಯಲ್ಲಿ ಮುಂಬರುವ ಬೇಸಿಗೆಯಲ್ಲಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳ ಕುಡಿಯುವ ನೀರಿನ ಅಗತ್ಯಕ್ಕಾಗಿ ಕಾಯ್ದಿರಿಸಬೇಕಾದ ನೀರನ್ನು ತಮಿಳುನಾಡಿನ ಕೃಷಿ ಬಳಕೆಗೆ ಬಿಡುಗಡೆ ಮಾಡುವಂತೆ CWMA ಪದೇಪದೆ ನಿರ್ದೇಶನ ನೀಡುತ್ತಿರುವುದು ಆತಂಕಕಾರಿ ಎಂದು ದೇವೇಗೌಡರು ಪತ್ರದಲ್ಲಿ ತಿಳಿಸಿದ್ದಾರೆ.
CWMA ಅಧಿಕಾರಕ್ಕೆ ಆಕ್ಷೇಪ:
ಸಂವಿಧಾನದ ಏಳನೇ ಅನುಸೂಚಿಯ ರಾಜ್ಯಪಟ್ಟಿಯ ನಮೂದು 17ರ ಪ್ರಕಾರ ನೀರಾವರಿ ರಾಜ್ಯಗಳ ವ್ಯಾಪ್ತಿಗೆ ಬರುವ ವಿಷಯವಾಗಿದೆ. ಆದರೆ, ಕಾವೇರಿ ನೀರಿನ ಸಂಗ್ರಹ, ಹಂಚಿಕೆ, ಬೆಳೆ ಪದ್ಧತಿ ಹಾಗೂ ಜಲಾಶಯಗಳ ಕಾರ್ಯಾಚರಣೆಯಲ್ಲಿಯೂ CWMA ಹಸ್ತಕ್ಷೇಪ ಮಾಡಲು ಅವಕಾಶ ನೀಡಿರುವುದು ರಾಜ್ಯಗಳ ಸಾಂವಿಧಾನಿಕ ಅಧಿಕಾರಕ್ಕೆ ವಿರುದ್ಧವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
2025ರ ನವೆಂಬರ್ 13ರಂದು ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಉಲ್ಲೇಖಿಸಿರುವ ಅವರು, ಕರ್ನಾಟಕಕ್ಕೆ ಹಂಚಿಕೆಯಾದ ನೀರನ್ನು ತನ್ನ ಅಗತ್ಯಕ್ಕೆ ಅನುಗುಣವಾಗಿ ಬಳಸುವ ಸ್ವಾತಂತ್ರ್ಯವಿದೆ ಎಂದು ಪ್ರತಿಪಾದಿಸಿದ್ದಾರೆ. ಹೀಗಾಗಿ, CWMAಯ ಅಧಿಕಾರವನ್ನು ಕರ್ನಾಟಕ-ತಮಿಳುನಾಡು ಗಡಿಯ ಬಿಳಿಗುಂಡ್ಲು ಅಳತೆ ಕೇಂದ್ರದಲ್ಲಿ ನೀರಿನ ಹರಿವಿನ ಮೇಲ್ವಿಚಾರಣೆಗೆ ಸೀಮಿತಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ನ್ಯಾಯಮಂಡಳಿ ತೀರ್ಪು ಮರುಪರಿಶೀಲನೆಗೆ ಆಗ್ರಹ:
ಕಾವೇರಿ ನ್ಯಾಯಮಂಡಳಿಯು 50 ವರ್ಷಗಳಿಗಿಂತ ಹಳೆಯ ದತ್ತಾಂಶಗಳನ್ನು ಆಧರಿಸಿ ನೀರು ಹಂಚಿಕೆ ಮಾಡಿದೆ. ಪ್ರಸ್ತುತ ಜಾಗತಿಕ ತಾಪಮಾನ ಏರಿಕೆ ಹಾಗೂ ಹವಾಮಾನ ಬದಲಾವಣೆಯಿಂದ ಮುಂಗಾರು ಮಳೆಯ ಸ್ವರೂಪದಲ್ಲಿ ಅನಿಶ್ಚಿತತೆ ಹೆಚ್ಚಾಗಿದೆ. ಹೀಗಾಗಿ, ಬದಲಾಗಿರುವ ಪರಿಸ್ಥಿತಿಗೆ ಅನುಗುಣವಾಗಿ ನ್ಯಾಯಮಂಡಳಿಯ ತೀರ್ಪು ಮತ್ತು 2018ರ ಸುಪ್ರೀಂ ಕೋರ್ಟ್ ಆದೇಶವನ್ನು ಸಮಗ್ರವಾಗಿ ಮರುಪರಿಶೀಲಿಸುವ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಹೊಸ ನ್ಯಾಯಮಂಡಳಿ ರಚನೆಗೆ ಮನವಿ ಮಾಡಿರುವ ಹಿನ್ನೆಲೆಯಲ್ಲಿ, ಅಂತಹ ನ್ಯಾಯಮಂಡಳಿ ರಚನೆಯಾದರೆ ಹಳೆಯ ಕಾವೇರಿ ತೀರ್ಪಿನ ಮರುಪರಿಶೀಲನೆಯ ಜವಾಬ್ದಾರಿಯನ್ನೂ ಅದಕ್ಕೆ ವಹಿಸಬೇಕು ಎಂದು ಕೋರಿದ್ದಾರೆ.
ಮೇಕೆದಾಟು ಯೋಜನೆಗೆ ಆದ್ಯತೆ ನೀಡಲು ಮನವಿ:
ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ಮಹಾನಗರದ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಮೇಕೆದಾಟು ಕುಡಿಯುವ ನೀರು ಸರಬರಾಜು ಯೋಜನೆ ಅತ್ಯಂತ ಮಹತ್ವದ್ದಾಗಿದೆ. ಈ ಸಂಬಂಧ ಕೇಂದ್ರ ಜಲ ಆಯೋಗಕ್ಕೆ ಪರಿಷ್ಕೃತ ಸಮಗ್ರ ಯೋಜನಾ ವರದಿ (DPR) ಸಲ್ಲಿಸಲಾಗಿದ್ದು, ಯೋಜನೆಗೆ ಅತ್ಯುನ್ನತ ಆದ್ಯತೆಯಲ್ಲಿ ಅನುಮೋದನೆ ನೀಡಬೇಕು ಎಂದು ಪ್ರಧಾನಿಯವರನ್ನು ಒತ್ತಾಯಿಸಿದ್ದಾರೆ.
ಇದಲ್ಲದೆ, ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ ರೂಪಿಸುತ್ತಿರುವ ಗೋದಾವರಿ-ಕೃಷ್ಣಾ-ಕಾವೇರಿ ನದಿ ಜೋಡಣೆ ಯೋಜನೆಯ ಒಟ್ಟು 147.7 ಟಿಎಂಸಿ ನೀರಿನಲ್ಲಿ ಕರ್ನಾಟಕಕ್ಕೆ ತಾತ್ಕಾಲಿಕವಾಗಿ ಕೇವಲ 15.9 ಟಿಎಂಸಿ ಹಂಚಿಕೆ ಮಾಡಲಾಗಿದೆ. ಇದು ಇತರ ರಾಜ್ಯಗಳಿಗೆ ಹೋಲಿಸಿದರೆ ಕಡಿಮೆ ಪ್ರಮಾಣವಾಗಿದ್ದು, ಸಮಾನತೆ ಮತ್ತು ನೈಸರ್ಗಿಕ ನ್ಯಾಯದ ಆಧಾರದ ಮೇಲೆ ಕರ್ನಾಟಕದ ಪಾಲನ್ನು ಹೆಚ್ಚಿಸಬೇಕು ಎಂದು ಮನವಿ ಮಾಡಿದ್ದಾರೆ.
ಕಾವೇರಿ ಜಲ ನಿರ್ವಹಣೆಯಲ್ಲಿನ ಸಮಸ್ಯೆಗಳು, ರಾಜ್ಯದ ಕುಡಿಯುವ ನೀರಿನ ಅಗತ್ಯ ಹಾಗೂ ಕೃಷಿ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಜಲಶಕ್ತಿ ಸಚಿವಾಲಯದ ಮೂಲಕ ತುರ್ತು ಕ್ರಮ ಕೈಗೊಳ್ಳುವಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದಿರುವ ಪತ್ರದಲ್ಲಿ ಆಗ್ರಹಿಸಿದ್ದಾರೆ.


