ದಾವಣಗೆರೆ ಜಿಲ್ಲೆಯಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ (ಐಟಿ–ಬಿಟಿ) ಕ್ಷೇತ್ರದ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಿಸುವುದು, ಹೊಸ ಬಂಡವಾಳ ಹೂಡಿಕೆಗಳನ್ನು ಆಕರ್ಷಿಸುವುದು ಹಾಗೂ ಸ್ಥಳೀಯ ಯುವಜನತೆಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ಅಗತ್ಯ ಪ್ರಯತ್ನಗಳನ್ನು ಕೈಗೊಳ್ಳಲಾಗುವುದು ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.
ಬೆಂಗಳೂರಿನ ಬಿಐಇಸಿಯಲ್ಲಿ ಆಯೋಜಿಸಲಾಗಿರುವ ಬೆಂಗಳೂರು ಟೆಕ್ ಸಮಿಟ್–2026ರಲ್ಲಿ ಭಾಗವಹಿಸಿದ ಅವರು, ತಂತ್ರಜ್ಞಾನ, ನಾವೀನ್ಯತೆ, ನವೋದ್ಯಮ ಮತ್ತು ಉದ್ಯಮಶೀಲತೆ ಕ್ಷೇತ್ರಗಳಲ್ಲಿನ ಹೊಸ ಆವಿಷ್ಕಾರಗಳು ಹಾಗೂ ಭವಿಷ್ಯದ ಅವಕಾಶಗಳ ಕುರಿತು ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಅವರನ್ನು ಭೇಟಿಯಾಗಿ ದಾವಣಗೆರೆ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತು ಚರ್ಚಿಸಿದರು. ದಾವಣಗೆರೆಯಲ್ಲಿ ಐಟಿ–ಬಿಟಿ ಆಧಾರಿತ ಉದ್ಯಮಗಳ ಸ್ಥಾಪನೆಗೆ ಉತ್ತೇಜನ, ಹೊಸ ಹೂಡಿಕೆಗಳ ಆಕರ್ಷಣೆ, ನವೋದ್ಯಮಗಳಿಗೆ ಪ್ರೋತ್ಸಾಹ ಹಾಗೂ ಸ್ಥಳೀಯ ವಿದ್ಯಾವಂತ ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸುವ ಸಾಧ್ಯತೆಗಳ ಕುರಿತು ವಿಚಾರ ವಿನಿಮಯ ನಡೆಸಿದರು.
ದಾವಣಗೆರೆ ವಿಷನ್ ಮಳಿಗೆಗೆ ಭೇಟಿ
ಟೆಕ್ ಸಮಿಟ್ನಲ್ಲಿ ದಾವಣಗೆರೆ ವಿಷನ್ ತಂಡ ಸ್ಥಾಪಿಸಿದ್ದ ಪ್ರದರ್ಶನ ಮಳಿಗೆಗೆ ಭೇಟಿ ನೀಡಿದ ಸಂಸದೆ, ತಂಡದ ಸದಸ್ಯರು ಪ್ರಸ್ತುತಪಡಿಸಿದ ನವೀನ ಪರಿಕಲ್ಪನೆಗಳು, ತಂತ್ರಜ್ಞಾನ ಆಧಾರಿತ ಯೋಜನೆಗಳು ಹಾಗೂ ಅಭಿವೃದ್ಧಿ ಸಂಬಂಧಿತ ವಿಚಾರಗಳ ಕುರಿತು ಮಾಹಿತಿ ಪಡೆದರು.
ಮಳಿಗೆಯನ್ನು ಉದ್ಘಾಟಿಸಿ ವಿವಿಧ ತಂತ್ರಜ್ಞಾನ ಆಧಾರಿತ ಪಾಡ್ಗಳು ಮತ್ತು ನವೀನ ಆವಿಷ್ಕಾರಗಳನ್ನು ವೀಕ್ಷಿಸಿದರು. ಅವುಗಳ ಕಾರ್ಯವಿಧಾನ, ಪ್ರಾಯೋಗಿಕ ಬಳಕೆ ಹಾಗೂ ಭವಿಷ್ಯದ ಸಾಧ್ಯತೆಗಳ ಕುರಿತು ತಂಡದ ಸದಸ್ಯರೊಂದಿಗೆ ಸಂವಾದ ನಡೆಸಿದರು.
ಯುವಜನತೆಗೆ ಹೊಸ ಅವಕಾಶಗಳ ಸೃಷ್ಟಿ
ದಾವಣಗೆರೆಯ ಶಿಕ್ಷಣ ಸಂಸ್ಥೆಗಳು, ತಾಂತ್ರಿಕ ಪರಿಣತರು, ಉದ್ಯಮಿಗಳು ಹಾಗೂ ನವೋದ್ಯಮಗಳನ್ನು ಪರಸ್ಪರ ಸಂಪರ್ಕಿಸುವ ಮೂಲಕ ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸಬಹುದು. ಈ ನಿಟ್ಟಿನಲ್ಲಿ ದಾವಣಗೆರೆ ವಿಷನ್ ತಂಡದ ಪ್ರಯತ್ನಗಳು ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಲಿವೆ ಎಂದು ಪ್ರಭಾ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು.
ತಂತ್ರಜ್ಞಾನ ಕ್ಷೇತ್ರದಲ್ಲಿನ ಬದಲಾವಣೆಗಳಿಗೆ ಅನುಗುಣವಾಗಿ ಯುವಜನರ ಕೌಶಲ್ಯ ಅಭಿವೃದ್ಧಿಗೆ ಆದ್ಯತೆ ನೀಡುವುದು ಅಗತ್ಯ. ಹೊಸ ತಂತ್ರಜ್ಞಾನಗಳ ಪರಿಚಯ, ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಹೂಡಿಕೆ ಅವಕಾಶಗಳ ವಿಸ್ತರಣೆಯ ಮೂಲಕ ಜಿಲ್ಲೆಯ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶವಿದೆ ಎಂದರು.
ದಾವಣಗೆರೆಯನ್ನು ತಂತ್ರಜ್ಞಾನ, ನಾವೀನ್ಯತೆ ಮತ್ತು ಉದ್ಯಮಶೀಲತೆಯ ಪ್ರಮುಖ ಕೇಂದ್ರವನ್ನಾಗಿ ರೂಪಿಸುವ ಮೂಲಕ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹೊಸ ಆಯಾಮ ನೀಡುವುದು ತಮ್ಮ ಗುರಿಯಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಸಮರ್ಥ್ ಶಾಮನೂರು, ಬಿಐಇಟಿ ಕಾಲೇಜಿನ ಪ್ರಾಂಶುಪಾಲ ಡಾ. ಎಚ್.ಬಿ. ಅರವಿಂದ್, ದಾವಣಗೆರೆ ವಿಷನ್ ತಂಡದ ಸದಸ್ಯ ವಿರೇಶ್ ಪಟೇಲ್ ಸೇರಿದಂತೆ ವಿವಿಧ ತಂಡಗಳ ಪ್ರತಿನಿಧಿಗಳು ಹಾಗೂ ತಂತ್ರಜ್ಞಾನ ಕ್ಷೇತ್ರದ ಪರಿಣತರು ಉಪಸ್ಥಿತರಿದ್ದರು.


