Homeಕರ್ನಾಟಕಜೆಟ್ಟಿಂಗ್ ಯಂತ್ರಗಳ ಮೂಲಕ ಬೆಂಗಳೂರು ಸ್ವಚ್ಛತೆಗೆ ಆದ್ಯತೆ: ಕೃಷ್ಣ ಬೈರೇಗೌಡ

ಜೆಟ್ಟಿಂಗ್ ಯಂತ್ರಗಳ ಮೂಲಕ ಬೆಂಗಳೂರು ಸ್ವಚ್ಛತೆಗೆ ಆದ್ಯತೆ: ಕೃಷ್ಣ ಬೈರೇಗೌಡ

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ಜೆಟ್ಟಿಂಗ್ ಯಂತ್ರಗಳನ್ನು ಬಳಸಿ ರಸ್ತೆ ಜಂಕ್ಷನ್‌ಗಳು, ಪಾದಚಾರಿ ಮಾರ್ಗಗಳು, ಬಸ್ ತಂಗುದಾಣಗಳು ಹಾಗೂ ಮೇಲ್ಸೇತುವೆಗಳ ಪಿಲ್ಲರ್‌ಗಳನ್ನು ಸ್ವಚ್ಛಗೊಳಿಸುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಬಿಎ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಾರ್ಡ್ ಒನ್ ಅಭಿಯಾನದ ಪ್ರಗತಿ ಕುರಿತು ಇಂದು ನಡೆದ ವರ್ಚುವಲ್ ಸಭೆಯಲ್ಲಿ ಮಾತನಾಡಿದ ಅವರು, ನಗರದ ಸೌಂದರ್ಯ ಹೆಚ್ಚಿಸಲು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಜೆಟ್ಟಿಂಗ್ ಯಂತ್ರಗಳ ಮೂಲಕ ಪ್ರೆಶರ್ ವಾಷ್ ಮಾಡಿ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛ ಹಾಗೂ ಸುಂದರವಾಗಿಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಸ್ವಚ್ಛತೆಗೆ ಸಂಸ್ಕರಿಸಿದ ನೀರು ಬಳಸಿ

ರಸ್ತೆ ಮತ್ತು ಸಾರ್ವಜನಿಕ ಸ್ಥಳಗಳ ಸ್ವಚ್ಛತಾ ಕಾರ್ಯಕ್ಕೆ ಕುಡಿಯುವ ನೀರಿನ ಬದಲಾಗಿ ಜಲಮಂಡಳಿಯ ಸಮೀಪದ ಸಂಸ್ಕರಣಾ ಘಟಕಗಳಿಂದ ಲಭ್ಯವಿರುವ ಸಂಸ್ಕರಿಸಿದ ನೀರನ್ನು ಬಳಸಿಕೊಳ್ಳಬೇಕು. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಸ್ವಚ್ಛತಾ ಕಾರ್ಯವನ್ನು ತಕ್ಷಣ ಆರಂಭಿಸುವಂತೆ ಸೂಚಿಸಿದರು.

ವಾರ್ಡ್ ಒನ್ ಅಭಿಯಾನಕ್ಕೆ ವೇಗ ನೀಡಿ

ನವೆಂಬರ್ 1ರಿಂದ ಆರಂಭವಾಗಿರುವ ವಾರ್ಡ್ ಒನ್ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಅಭಿಯಾನ ನಡೆಯುತ್ತಿರುವ ವಾರ್ಡ್‌ಗಳಲ್ಲಿ ಸ್ವಚ್ಛತಾ ಕಾರ್ಯಗಳಿಗೆ ಆದ್ಯತೆ ನೀಡುವುದರ ಜತೆಗೆ ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಬೇಕು. ನವೆಂಬರ್ 21ರಂದು ನಡೆಯಲಿರುವ ಅಭಿಯಾನವನ್ನು ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದರು.

ಕೋಣನಕುಂಟೆ ಕ್ರಾಸ್ ಅಭಿವೃದ್ಧಿಗೆ ಸೂಚನೆ

ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಕೋಣನಕುಂಟೆ ಕ್ರಾಸ್‌ನ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚಿಸಿದರು. ಈ ಸಂಬಂಧ ಮೆಟ್ರೋ ಅಧಿಕಾರಿಗಳೊಂದಿಗೆ ಚರ್ಚಿಸಿ ಜಂಕ್ಷನ್‌ನ ಐಲ್ಯಾಂಡ್ ಹಾಗೂ ಪಾದಚಾರಿ ಮಾರ್ಗಗಳನ್ನು ಅಭಿವೃದ್ಧಿಪಡಿಸಬೇಕು. ಸಂಚಾರ ದಟ್ಟಣೆ ನಿಯಂತ್ರಿಸಲು ಲೇನ್ ಮಾರ್ಕಿಂಗ್ ಮತ್ತು ಫ್ರೀ ಲೆಫ್ಟ್ ವ್ಯವಸ್ಥೆ ಕಲ್ಪಿಸುವ ಕುರಿತು ಯೋಜನೆ ರೂಪಿಸುವಂತೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ನಗರ ಪಾಲಿಕೆ ಆಯುಕ್ತರಾದ ರಮೇಶ್ ಡಿ.ಎಸ್., ಪೊಮ್ಮಲ ಸುನಿಲ್ ಕುಮಾರ್, ಶಿಲ್ಪಾ ನಾಗ್, ರಮೇಶ್ ಕೆ.ಎನ್., ಜಗದೀಶ್ ಜಿ., ಅಪರ ಆಯುಕ್ತರು, ಮುಖ್ಯ ಅಭಿಯಂತರರು, ಕಾರ್ಯಪಾಲಕ ಅಭಿಯಂತರರು ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments