Homeಕರ್ನಾಟಕದಲಿತರು, ಶೋಷಿತರ ಏಳಿಗೆಯಾಗದೆ ದೇಶದ ಅಭಿವೃದ್ಧಿ ಸಾರ್ಥಕವಾಗುವುದಿಲ್ಲ: ಡಾ. ಜಿ. ಪರಮೇಶ್ವರ

ದಲಿತರು, ಶೋಷಿತರ ಏಳಿಗೆಯಾಗದೆ ದೇಶದ ಅಭಿವೃದ್ಧಿ ಸಾರ್ಥಕವಾಗುವುದಿಲ್ಲ: ಡಾ. ಜಿ. ಪರಮೇಶ್ವರ

ಕರ್ನಾಟಕದಲ್ಲಿ ಆಚರಿಸುತ್ತಿರುವ ಮಾದರಿಯಲ್ಲಿಯೇ ದೇಶದಾದ್ಯಂತ ಸಂವಿಧಾನ ದಿನಾಚರಣೆಯನ್ನು ವ್ಯಾಪಕವಾಗಿ ಆಚರಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಬೇಕು. ಆ ಮೂಲಕ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವ ಕೆಲಸ ಮಾಡಬೇಕು ಎಂದು ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದರು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಇಂದು ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಇಂದು ಐತಿಹಾಸಿಕ ಹೆಜ್ಜೆ ಇಡಲಾಗುತ್ತಿದೆ. ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದಲ್ಲಿ ಡಾ. ಎಚ್.ಸಿ. ಮಹದೇವಪ್ಪ ಅವರು ಸಮಾಜ ಕಲ್ಯಾಣ ಸಚಿವರಾಗಿದ್ದ ಸಂದರ್ಭದಲ್ಲಿ ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪಠಣಕ್ಕೆ ಆದೇಶ ಹೊರಡಿಸಲಾಯಿತು. ಇದು ದೇಶದಲ್ಲಿಯೇ ಮೊದಲ ಪ್ರಯತ್ನವಾಗಿತ್ತು. ನಂತರ ಸಂವಿಧಾನ ದಿನಾಚರಣೆಯನ್ನು ಆಚರಿಸುವ ನಿರ್ಧಾರ ಕೈಗೊಳ್ಳಲಾಯಿತು. ಇದೀಗ ರಾಜ್ಯ ಸರ್ಕಾರ ಪ್ರತಿ ವರ್ಷ ಸಂವಿಧಾನ ದಿನಾಚರಣೆ ನಡೆಸುತ್ತಿದೆ. ಕರ್ನಾಟಕದ ಮಾದರಿಯಲ್ಲಿ ದೇಶದ ಎಲ್ಲ ರಾಜ್ಯಗಳಲ್ಲಿಯೂ ಸಂವಿಧಾನ ದಿನಾಚರಣೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸಂವಿಧಾನವನ್ನು ವಿರೋಧಿಸಿದವರೇ ಇಂದು ಹೊಗಳುತ್ತಿದ್ದಾರೆ:

ಭಾರತದ ಪ್ರತಿಯೊಂದು ಸಮಸ್ಯೆಗೂ ಪರಿಹಾರ ನೀಡಬಲ್ಲ ಸಂವಿಧಾನವನ್ನು ಬಾಬಾಸಾಹೇಬ್ ಅಂಬೇಡ್ಕರ್ ಅವರು ನಮಗೆ ನೀಡಿದ್ದಾರೆ. ಭಾರತದ ಸಂವಿಧಾನ ಇಡೀ ವಿಶ್ವದ ಗಮನ ಸೆಳೆದಿದ್ದು, ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ. ಒಂದು ಕಾಲದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ವಿರೋಧಿಸುತ್ತಿದ್ದವರು, ತಮ್ಮ ಕಚೇರಿಗಳಲ್ಲಿ ಅಂಬೇಡ್ಕರ್ ಅವರ ಭಾವಚಿತ್ರವನ್ನೂ ಇಡದಿದ್ದವರು ಇಂದು ಸಂವಿಧಾನವನ್ನು ಹೊಗಳುತ್ತಿದ್ದಾರೆ. ಅಂಬೇಡ್ಕರ್ ಅವರ ಜಯಂತಿಯನ್ನೂ ಆಚರಿಸುತ್ತಿದ್ದಾರೆ. ಇದೊಂದು ದೊಡ್ಡ ಬದಲಾವಣೆ ಎಂದು ಹೇಳಿದರು.

ಆದರೆ, ಈ ಬದಲಾವಣೆ ಪ್ರಾಮಾಣಿಕವಾದುದಲ್ಲ. ಜನಾಭಿಪ್ರಾಯ ಪ್ರಜಾಪ್ರಭುತ್ವ ಮತ್ತು ಸಮಾನತೆಯ ಪರವಾಗಿರುವುದನ್ನು ಅರಿತುಕೊಂಡು, ಜನರ ಒತ್ತಡಕ್ಕೆ ಮಣಿದು ಇಂದು ಅವರು ಸಂವಿಧಾನವನ್ನು ಪ್ರಶಂಸಿಸುತ್ತಿದ್ದಾರೆ ಎಂದು ಟೀಕಿಸಿದರು.

‘ಭಾರತದ ಜನತೆಯಾದ ನಾವು’ ಎಂಬುದೇ ಸಂವಿಧಾನದ ಶಕ್ತಿ:

ಯಾರು ಈ ದೇಶದಲ್ಲಿ ಮನುಸ್ಮೃತಿಯನ್ನು ಜಾರಿಗೆ ತರಲು ಬಯಸಿದ್ದರೋ, ಯಾರು ಸಮಾನತೆಯನ್ನು ವಿರೋಧಿಸಿ ಅಸಮಾನತೆಯನ್ನು ಪ್ರತಿಪಾದಿಸುತ್ತಿದ್ದರೋ, ಅವರೇ ಇಂದು ಸಂವಿಧಾನದ ಬಗ್ಗೆ ಮಾತನಾಡಲು ಆರಂಭಿಸಿದ್ದಾರೆ. ಸಂವಿಧಾನವನ್ನು ಅಂಗೀಕರಿಸುವುದಕ್ಕೂ 22 ವರ್ಷಗಳ ಹಿಂದೆಯೇ, ಬಾಬಾಸಾಹೇಬ್ ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ದಹಿಸಿದ್ದರು ಎಂಬುದನ್ನು ನಾವು ಸ್ಮರಿಸಬೇಕಿದೆ ಎಂದರು.

ಸಂವಿಧಾನದ ಪೀಠಿಕೆ ‘We, the People of India’ (ಭಾರತದ ಜನತೆಯಾದ ನಾವು) ಎಂಬ ಪದಗಳೊಂದಿಗೆ ಆರಂಭವಾಗುತ್ತದೆ. ಅಂಬೇಡ್ಕರ್ ಅವರು ಯಾವುದೇ ನಿರ್ದಿಷ್ಟ ವ್ಯಕ್ತಿ, ಜಾತಿ ಅಥವಾ ಧರ್ಮವನ್ನು ಉಲ್ಲೇಖಿಸಲಿಲ್ಲ. ದೇಶದ ಎಲ್ಲ ಜನರನ್ನೂ ಸಮಾನವಾಗಿ ಪರಿಗಣಿಸುವ ಆಶಯದೊಂದಿಗೆ ಸಂವಿಧಾನವನ್ನು ರೂಪಿಸಿದರು. ಇದೇ ನಮ್ಮ ಸಂವಿಧಾನದ ಮಹತ್ವವಾಗಿದೆ ಎಂದು ತಿಳಿಸಿದರು.

ಸಂವಿಧಾನ ರಚನಾ ಸಭೆಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ಎಚ್.ವಿ. ಕಾಮತ್ ಅವರು ಸಂವಿಧಾನದ ಪೀಠಿಕೆಯನ್ನು ದೇವರ ಹೆಸರಿನಲ್ಲಿ ಆರಂಭಿಸಬೇಕು ಎಂಬ ಪ್ರಸ್ತಾಪ ಮುಂದಿಟ್ಟಿದ್ದರು. ಈ ಪ್ರಸ್ತಾಪವನ್ನು ಮತಕ್ಕೆ ಹಾಕಿದಾಗ ಸಂವಿಧಾನ ರಚನಾ ಸಭೆ ಅದನ್ನು ತಿರಸ್ಕರಿಸಿತು. ಸಂವಿಧಾನ ರಚನೆಯ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆದ ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಾಕಷ್ಟು ಟೀಕೆಗಳನ್ನೂ ಎದುರಿಸಿದ್ದರು. ಭಾರತದ ಸಂವಿಧಾನದಲ್ಲಿ ಭಾರತೀಯವಾದದ್ದು ಏನೂ ಇಲ್ಲ ಎಂಬ ಟೀಕೆಯನ್ನೂ ಕೆಲವರು ಮಾಡಿದ್ದರು ಎಂದರು.

ಅಂಬೇಡ್ಕರ್ ಅವರು ತಮ್ಮ ಸಾಮಾಜಿಕ ತತ್ವವು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ಎಂಬ ಮೂರು ಶಬ್ದಗಳಲ್ಲಿ ಅಡಕಗೊಂಡಿದೆ ಎಂದಿದ್ದರು. ಈ ತತ್ವವನ್ನು ನಾನು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿಲ್ಲ ಎಂದಿದ್ದ ಅಂಬೇಡ್ಕರ್‌ ಅವರು ನನ್ನ ತಾತ್ವಿಕತೆಯ ಬೇರುಗಳು ರಾಜ್ಯಶಾಸ್ತ್ರದಲ್ಲಿಲ್ಲ, ಧರ್ಮದಲ್ಲಿವೆ ಎಂದಿದ್ದರು. ನನ್ನ ಗುರುವಾದ ಗೌತಮ ಬುದ್ಧನ ಬೋಧನೆಗಳಿಂದ ಈ ಮೌಲ್ಯಗಳನ್ನು ತಾವು ಪಡೆದುಕೊಂಡಿರುವುದಾಗಿ ಅವರು ತಿಳಿಸಿದ್ದರು ಎಂದು ಪರಮೇಶ್ವರ ಅವರು ಸ್ಮರಿಸಿದರು.

ಮತದಾನದ ಹಕ್ಕು ಕಸಿದುಕೊಂಡರೆ ನ್ಯಾಯಸಮ್ಮತ ಚುನಾವಣೆ ಹೇಗೆ ಸಾಧ್ಯ?:

ಕಳೆದ 14–15 ವರ್ಷಗಳಿಂದ ದೇಶದಲ್ಲಿ ಸಂವಿಧಾನದ ಆಶಯಗಳಿಗೆ ಧಕ್ಕೆಯಾಗುವಂತಹ ಬೆಳವಣಿಗೆಗಳನ್ನು ಗಮನಿಸುತ್ತಿದ್ದೇವೆ. ಆ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕೊಡಲಿಪೆಟ್ಟು ನೀಡುವ ಪ್ರಯತ್ನಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ನಾವೆಲ್ಲರೂ ಅತ್ಯಂತ ಎಚ್ಚರಿಕೆಯಿಂದ ಇರಬೇಕಾದ ಅಗತ್ಯವಿದೆ ಎಂದು ಹೇಳಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳು ನಡೆಯಬೇಕೆಂಬ ಆಶಯದೊಂದಿಗೆ ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನಾತ್ಮಕ ವ್ಯವಸ್ಥೆಯನ್ನು ರೂಪಿಸಿದ್ದರು. ಆದರೆ, ಇಂದು ಚುನಾವಣಾ ಆಯೋಗದ ಕಾರ್ಯವೈಖರಿಯ ಬಗ್ಗೆ ಗಂಭೀರ ಪ್ರಶ್ನೆಗಳು ಎದುರಾಗಿವೆ ಎಂದರು.

ಮತಗಳ್ಳತನ ಹಾಗೂ ಮತದಾರರ ಪಟ್ಟಿಯಿಂದ ದಲಿತರು, ಅಲ್ಪಸಂಖ್ಯಾತರು, ಬಡವರು ಮತ್ತು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವವರ ಹೆಸರುಗಳನ್ನು ತೆಗೆದುಹಾಕಲಾಗುತ್ತಿದೆ. ಚುನಾವಣಾ ಆಯೋಗವೇ ಇಂತಹ ಕ್ರಮಗಳಿಗೆ ಮುಂದಾದರೆ ದೇಶದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ದೇಶದ ಅಭಿವೃದ್ಧಿಗೆ ಆದ್ಯತೆಗಳನ್ನು ನಿಗದಿಪಡಿಸಿ, ವ್ಯವಸ್ಥಿತವಾಗಿ ಅಭಿವೃದ್ಧಿ ಸಾಧಿಸುವ ಉದ್ದೇಶದಿಂದ ಪಂಡಿತ್ ಜವಾಹರಲಾಲ್ ನೆಹರು ಅವರು ಯೋಜನಾ ಆಯೋಗ ಮತ್ತು ಪಂಚವಾರ್ಷಿಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಪ್ರತಿ ಐದು ವರ್ಷಗಳಿಗೊಮ್ಮೆ ದೇಶದ ಆದ್ಯತೆಗಳು ಏನಿರಬೇಕು, ಯಾವ ಕ್ಷೇತ್ರದಲ್ಲಿ ಯಾವ ರೀತಿಯ ಅಭಿವೃದ್ಧಿ ಸಾಧಿಸಬೇಕು ಎಂಬುದನ್ನು ನಿರ್ಧರಿಸುವ ವ್ಯವಸ್ಥೆಯನ್ನು ರೂಪಿಸಿದ್ದರು. ಆದರೆ, ಇಂದು ಯೋಜನಾ ಆಯೋಗವನ್ನು ರದ್ದುಗೊಳಿಸಿ ಅದರ ಬದಲಿಗೆ ನೀತಿ ಆಯೋಗವನ್ನು ಸ್ಥಾಪಿಸಲಾಗಿದೆ ಎಂದರು.

ದೇಶದ ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರಗಳಲ್ಲಿ ಮಹತ್ತರ ಬದಲಾವಣೆಗಳಾಗಿದ್ದರೆ, ಹಸಿರು ಕ್ರಾಂತಿಯ ಮೂಲಕ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿದ್ದರೆ, ಅದರ ಹಿಂದೆ ಬಾಬಾಸಾಹೇಬ್ ಅಂಬೇಡ್ಕರ್ ಅವರು ಹಾಕಿಕೊಟ್ಟ ಸಂವಿಧಾನಾತ್ಮಕ ಅಡಿಪಾಯವಿದೆ ಎಂಬುದನ್ನು ಸ್ಮರಿಸಬೇಕಿದೆ ಎಂದರು.

ಸಂವಿಧಾನವನ್ನು ವಿರೋಧಿಸುತ್ತಿದ್ದವರೇ ಇಂದು ಸಂವಿಧಾನವನ್ನು ಹೊಗಳಲು ಆರಂಭಿಸಿದ್ದಾರೆ. ಅವರ ಮಾತುಗಳ ಬಗ್ಗೆ ಹಾಗೂ ಮುಂದಿನ ನಡೆಗಳ ಬಗ್ಗೆ ನಾವೆಲ್ಲರೂ ಎಚ್ಚರಿಕೆಯಿಂದ ಇರಬೇಕಿದೆ ಎಂದು ತಿಳಿಸಿದರು.

ಬಡವರ ಪರವಾದ ಯೋಜನೆಗಳಲ್ಲಿ ರಾಜಿ ಮಾಡಿಕೊಳ್ಳಬೇಡಿ:

2013ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದಾಗ ಯಾವ ರೀತಿಯ ಆಡಳಿತ ನೀಡುತ್ತಾರೆ, ಸಮಾಜದಲ್ಲಿ ಸಮಾನತೆಯನ್ನು ಸಾಧಿಸಲು ಯಾವ ಕ್ರಮಗಳನ್ನು ಕೈಗೊಳ್ಳುತ್ತಾರೆ ಎಂಬುದನ್ನು ಇಡೀ ದೇಶವೇ ಗಮನಿಸುತ್ತಿತ್ತು. ಅನ್ನಭಾಗ್ಯ ಸೇರಿದಂತೆ ವಿವಿಧ ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಬಡವರ ಬದುಕಿಗೆ ಆರ್ಥಿಕ ಮತ್ತು ಸಾಮಾಜಿಕ ಶಕ್ತಿ ತುಂಬುವ ಕೆಲಸ ಮಾಡಿದರು. ಹಲವು ಟೀಕೆಗಳ ನಡುವೆಯೂ ಜಾರಿಗೊಳಿಸಿದ ಆ ಯೋಜನೆಗಳನ್ನು ಇಂದಿನ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ ಎಂದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಲ್ಲಿ ನನ್ನದೊಂದು ಮನವಿ ಇದೆ. ಬೆಂಗಳೂರಿನ ಅಭಿವೃದ್ಧಿಗೆ ಎಷ್ಟೇ ಕಾರ್ಯಕ್ರಮಗಳನ್ನು ರೂಪಿಸಿ, ರಾಜ್ಯದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ಜಾರಿಗೊಳಿಸಿ. ಆದರೆ, ಬಡವರ ಪರವಾದ ಕಾರ್ಯಕ್ರಮಗಳಲ್ಲಿ ಮಾತ್ರ ದಯಮಾಡಿ ಯಾವುದೇ ರಾಜಿ ಮಾಡಿಕೊಳ್ಳಬೇಡಿ ಎಂದು ಮನವಿ ಮಾಡಿದರು.

ಸಮಾಜದ ದಲಿತರು, ಶೋಷಿತರು ಮತ್ತು ದುರ್ಬಲ ವರ್ಗದ ಜನರ ಏಳಿಗೆಯಾಗದೆ ಹೋದರೆ ದೇಶದಲ್ಲಿ ಎಷ್ಟೇ ಅಭಿವೃದ್ಧಿ ಸಾಧಿಸಿದರೂ ಅದಕ್ಕೆ ಸಾರ್ಥಕತೆ ಇರುವುದಿಲ್ಲ. ಸಮಾಜದ ಎಲ್ಲ ವರ್ಗಗಳ ಜನರ ಅಭಿವೃದ್ಧಿಯನ್ನು ಖಾತರಿಪಡಿಸುವ ಮೂಲಕ ಸಂವಿಧಾನದ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಆಶಯಗಳನ್ನು ಸಾಕಾರಗೊಳಿಸಬೇಕಿದೆ ಎಂದು ಡಾ. ಜಿ. ಪರಮೇಶ್ವರ ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್, ಸಚಿವರಾದ ಕೆ.ಹೆಚ್.ಮುನಿಯಪ್ಪ, ಸತೀಶ್ ಜಾರಕಿಹೊಳಿ, ಕೆ.ಎಸ್.ಬಸವಂತಪ್ಪ, ಯು.ಟಿ.ಖಾದರ್, ಚಲುವರಾಯಸ್ವಾಮಿ, ನರೇಂದ್ರಸ್ವಾಮಿ, ಪುಟ್ಟರಂಗಶೆಟ್ಟಿ, ರಿಜ್ವಾನ್ ಅರ್ಷದ್, ಶಿವಲಿಂಗೇಗೌಡ, ಡಾ.ಯತೀಂದ್ರ ಸಿದ್ದರಾಮಯ್ಯ, ಟಿ.ರಘುಮೂರ್ತಿ, ಮಾಜಿ ಸಚಿವರಾದ ಡಾ. ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ತನ್ವೀರ್ ಸೇಠ್, ಎ.ಎಸ್.ಪೊನ್ನಣ್ಣ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮುಂತಾದವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments