Homeಕರ್ನಾಟಕಕಲ್ಯಾಣ ಕರ್ನಾಟಕದಲ್ಲಿ ಶಿರಪುರ ಮಾದರಿಯ ಜಲ ಸಂರಕ್ಷಣೆಗೆ ₹200 ಕೋಟಿ ವೆಚ್ಚ : ಸಚಿವ ಡಾ....

ಕಲ್ಯಾಣ ಕರ್ನಾಟಕದಲ್ಲಿ ಶಿರಪುರ ಮಾದರಿಯ ಜಲ ಸಂರಕ್ಷಣೆಗೆ ₹200 ಕೋಟಿ ವೆಚ್ಚ : ಸಚಿವ ಡಾ. ಅಜಯ್ ಧರ್ಮಸಿಂಗ್

ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆನೀರು ಸಂರಕ್ಷಣೆ, ಅಂತರ್ಜಲ ಮಟ್ಟ ವೃದ್ಧಿ ಹಾಗೂ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಅನುಕೂಲ ಕಲ್ಪಿಸುವ ಉದ್ದೇಶದಿಂದ ಶಿರಪುರ ಮಾದರಿಯಲ್ಲಿ ₹200 ಕೋಟಿ ವೆಚ್ಚದ ಜಲ ಸಂರಕ್ಷಣಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್ ಧರ್ಮಸಿಂಗ್ ತಿಳಿಸಿದ್ದಾರೆ.

ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ತಲಾ ₹100 ಕೋಟಿ ಅನುದಾನದಲ್ಲಿ ಈ ಯೋಜನೆ ಅನುಷ್ಠಾನಗೊಳ್ಳುತ್ತಿದೆ.

ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಶಿರಪುರ ಮಾದರಿಯಲ್ಲಿ ಸರಣಿ ಚೆಕ್‌ಡ್ಯಾಂಗಳ ನಿರ್ಮಾಣ, ಹಳ್ಳ ಮತ್ತು ನಾಲೆಗಳ ಆಳ ಹಾಗೂ ಅಗಲ ಹೆಚ್ಚಿಸುವುದು, ಅಂತರ್ಜಲ ಮರುಪೂರಣ ಘಟಕಗಳ ನಿರ್ಮಾಣ ಮತ್ತು ಕೆರೆಗಳ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ.

ಮಳೆನೀರು ವ್ಯರ್ಥವಾಗಿ ಹರಿದುಹೋಗುವುದನ್ನು ತಡೆದು, ಸ್ಥಳೀಯವಾಗಿಯೇ ಸಂಗ್ರಹಿಸಿ ಭೂಮಿಯಲ್ಲಿ ಇಂಗುವಂತೆ ಮಾಡುವುದು ಶಿರಪುರ ಮಾದರಿಯ ಪ್ರಮುಖ ಉದ್ದೇಶವಾಗಿದೆ. ಇದರಿಂದ ಅಂತರ್ಜಲ ಮಟ್ಟ ಹೆಚ್ಚುವುದರ ಜೊತೆಗೆ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. ಕೊಳವೆಬಾವಿಗಳ ಮೇಲಿನ ಅವಲಂಬನೆ ಕಡಿಮೆ ಮಾಡಲು ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಈ ಕಾಮಗಾರಿಗಳು ಸಹಕಾರಿಯಾಗಲಿವೆ.

ಜಿಲ್ಲಾವಾರು ಅನುದಾನ ಹಂಚಿಕೆ

ಕಲಬುರಗಿ ಜಿಲ್ಲೆಗೆ ₹49.20 ಕೋಟಿ, ರಾಯಚೂರು ಜಿಲ್ಲೆಗೆ ₹38.80 ಕೋಟಿ, ಬಳ್ಳಾರಿ ಜಿಲ್ಲೆಗೆ ₹35 ಕೋಟಿ, ಯಾದಗಿರಿ, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳಿಗೆ ತಲಾ ₹21 ಕೋಟಿ ಮತ್ತು ಬೀದರ್ ಜಿಲ್ಲೆಗೆ ₹14 ಕೋಟಿ ಅನುದಾನ ಮೀಸಲಿಡಲಾಗಿದೆ.

ಒಟ್ಟು ₹200 ಕೋಟಿ ವೆಚ್ಚದ ಕಾಮಗಾರಿಗಳನ್ನು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ.

ಶಿರಪುರ ಮಾದರಿಯಲ್ಲಿ ಹಳ್ಳ ಮತ್ತು ನಾಲೆಗಳಿಗೆ ಅಡ್ಡಲಾಗಿ ಸರಣಿ ಚೆಕ್‌ಡ್ಯಾಂಗಳನ್ನು ನಿರ್ಮಿಸುವುದರಿಂದ ಮಳೆನೀರು ವ್ಯರ್ಥವಾಗಿ ಹರಿದುಹೋಗುವುದನ್ನು ತಡೆದು, ಅಂತರ್ಜಲ ಮರುಪೂರಣಕ್ಕೆ ಹೆಚ್ಚಿನ ಅವಕಾಶ ಕಲ್ಪಿಸಬಹುದು. ಆಯಾ ಪ್ರದೇಶದ ಭೌಗೋಳಿಕ ಪರಿಸ್ಥಿತಿ, ಮಳೆಯ ಪ್ರಮಾಣ ಹಾಗೂ ನೀರಿನ ಲಭ್ಯತೆಯನ್ನು ಪರಿಗಣಿಸಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವ ಮೂಲಕ ಜಲಸಂರಕ್ಷಣೆಯಲ್ಲಿ ಸುಸ್ಥಿರ ಫಲಿತಾಂಶ ಸಾಧಿಸುವುದು ಇಲಾಖೆಯ ಉದ್ದೇಶವಾಗಿದೆ ಎಂದು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ರಾಜೇಶ್ ಅಮ್ಮಿನಭಾವಿ ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕದಲ್ಲಿ ಬೀಳುವ ಮಳೆಯ ಪ್ರತಿಯೊಂದು ಹನಿಯನ್ನೂ ಸಮರ್ಥವಾಗಿ ಬಳಸಿಕೊಳ್ಳಬೇಕು. ಕೇವಲ ನೀರನ್ನು ಸಂಗ್ರಹಿಸುವುದಷ್ಟೇ ನಮ್ಮ ಗುರಿಯಲ್ಲ; ಅಂತರ್ಜಲವನ್ನು ಪುನಶ್ಚೇತನಗೊಳಿಸಿ ರೈತರಿಗೆ ದೀರ್ಘಕಾಲೀನ ಜಲ ಭದ್ರತೆ ಒದಗಿಸುವುದು ನಮ್ಮ ಉದ್ದೇಶವಾಗಿದೆ ಎಂದು ಸಚಿವ ಡಾ. ಅಜಯ್ ಧರ್ಮಸಿಂಗ್ ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಜಲ ಸಂರಕ್ಷಣಾ ಮೂಲಸೌಕರ್ಯವನ್ನು ಬಲಪಡಿಸುವ ಮೂಲಕ ಕೃಷಿ ಅಭಿವೃದ್ಧಿ, ಅಂತರ್ಜಲ ವೃದ್ಧಿ ಹಾಗೂ ಗ್ರಾಮೀಣ ಪ್ರದೇಶಗಳ ದೀರ್ಘಕಾಲೀನ ಜಲ ಭದ್ರತೆಗೆ ಆದ್ಯತೆ ನೀಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments