ಮೈಸೂರಿನ ಕರ್ನಾಟಕ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೈಸೂರು ಮಹಾನಗರ ಪಾಲಿಕೆ ಹಾಗೂ ಸಂತ ಶ್ರೀ ಕನಕದಾಸರ ಜಯಂತೋತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ದಾಸಶ್ರೇಷ್ಠ ಸಂತಕವಿ ಶ್ರೀ ಕನಕದಾಸರ 539ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಕನಕದಾಸರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.
ನಂತರ ಮಾತನಾಡಿದ ಸಚಿವರು, ಸಂತಕವಿ ಕನಕದಾಸರು ತಮ್ಮ ಸಾಹಿತ್ಯ, ಕೀರ್ತನೆಗಳು ಹಾಗೂ ತತ್ವಪದಗಳ ಮೂಲಕ ಸಮಾಜದಲ್ಲಿನ ಅಸಮಾನತೆ, ಜಾತಿ ವ್ಯವಸ್ಥೆ ಮತ್ತು ಮೌಢ್ಯಗಳನ್ನು ಪ್ರಶ್ನಿಸಿ, ಸಮಾನತೆ, ಮಾನವೀಯತೆ ಹಾಗೂ ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಸಾರಿದ ಮಹಾನ್ ಸಮಾಜ ಸುಧಾರಕರು. ಅವರ ಸಾಹಿತ್ಯ ಕೇವಲ ಭಕ್ತಿಯ ಅಭಿವ್ಯಕ್ತಿಯಾಗಿರದೆ, ಸಮಾಜದಲ್ಲಿ ಬದಲಾವಣೆ ತರುವ ಶಕ್ತಿಯುತ ಮಾಧ್ಯಮವಾಗಿದೆ ಎಂದು ಹೇಳಿದರು.
ಕನಕದಾಸರು ಸಾರಿದ ಸಮಾನತೆ, ಸಹಬಾಳ್ವೆ, ಮಾನವೀಯತೆ ಮತ್ತು ಸಾಮಾಜಿಕ ನ್ಯಾಯದ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ. ಅವರ ಚಿಂತನೆಗಳು ಕೇವಲ ಜಯಂತಿ ಆಚರಣೆಗಳಿಗೆ ಸೀಮಿತವಾಗದೆ, ಪ್ರತಿಯೊಬ್ಬರ ಬದುಕಿನಲ್ಲೂ ಅಳವಡಿಕೆಯಾಗಬೇಕು. ಕನಕದಾಸರ ಕೀರ್ತನೆಗಳು ಮತ್ತು ವಿಚಾರಧಾರೆಗಳನ್ನು ಮನೆಮನೆಗೂ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ತಿಳಿಸಿದರು.
2014ರಲ್ಲಿ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯ ಅವರು ಕನಕದಾಸರ ಸಾಹಿತ್ಯ ಮತ್ತು ಕೀರ್ತನೆಗಳನ್ನು ನಾಡಿನ ಜನತೆಗೆ ಮತ್ತಷ್ಟು ವ್ಯಾಪಕವಾಗಿ ಪರಿಚಯಿಸುವ ಉದ್ದೇಶದಿಂದ ವಿಶೇಷ ಆಸಕ್ತಿ ವಹಿಸಿ ₹1.80 ಕೋಟಿ ಅನುದಾನ ಒದಗಿಸಿದ್ದರು. ಇಂತಹ ಪ್ರಯತ್ನಗಳು ನಾಡಿನ ಸಾಂಸ್ಕೃತಿಕ ಹಾಗೂ ಸಾಹಿತ್ಯಿಕ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಸ್ಮರಿಸಿದರು.
ಕನಕದಾಸರ ಆದರ್ಶಗಳು ಮತ್ತು ತತ್ವಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಜಾತಿ-ಧರ್ಮಗಳ ಭೇದಭಾವವಿಲ್ಲದ ಸಮಾನತೆ ಹಾಗೂ ಸೌಹಾರ್ದತೆಯ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಸಚಿವರು ಕರೆ ನೀಡಿದರು.
ಕಾಗಿನೆಲೆ ಕನಕಗುರುಪೀಠದ ಪರಮಪೂಜ್ಯ ಶ್ರೀ ಶ್ರೀ ಡಾ. ಶಿವಾನಂದಪುರಿ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯ ಡಾ. ಡಿ. ತಿಮ್ಮಯ್ಯ, ಮಾಜಿ ಶಾಸಕ ಹಾಗೂ ಸಂತ ಶ್ರೀ ಕನಕದಾಸರ ಜಯಂತೋತ್ಸವ ಸಮಿತಿ ಅಧ್ಯಕ್ಷ ಎಂ.ಕೆ. ಸೋಮಶೇಖರ್, ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬೀರಿಹುಂಡಿ ಬಸವಣ್ಣ, ನಿವೃತ್ತ ಶಿಕ್ಷಣಾಧಿಕಾರಿ ಹಾಗೂ ಹರಿಕಥಾ ವಿದ್ವಾಂಸ ಎಂ.ಬಿ. ನಿಂಗಪ್ಪ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ನಗರ ಪೊಲೀಸ್ ಆಯುಕ್ತ ಎನ್. ವಿಷ್ಣುವರ್ಧನ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಎಂ.ಡಿ. ಸುದರ್ಶನ್ ಸೇರಿದಂತೆ ಕನಕದಾಸರ ಜಯಂತೋತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು.


