ಮಗುವಿನ ಚಿಕಿತ್ಸೆಯಲ್ಲಿ ನಿರ್ಲಕ್ಷ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಕ್ಲೌಡ್ ನೈನ್ ಆಸ್ಪತ್ರೆಯ ಆಡಳಿತ ಮಂಡಳಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ನಾಳೆ (ನ.29) ಸಂಜೆ 4 ಗಂಟೆಯವರೆಗೆ ಗಡುವು ನೀಡಿದ್ದಾರೆ. ಅಷ್ಟರೊಳಗೆ ಮಗುವಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಹಾಗೂ ಪೋಷಕರನ್ನು ಭೇಟಿಯಾಗಿ ಸೂಕ್ತ ಕ್ರಮ ಕೈಗೊಳ್ಳಲು ಆಸ್ಪತ್ರೆಯ ಆಡಳಿತ ಮಂಡಳಿ ಮುಂದಾಗಬೇಕು. ಇಲ್ಲವಾದರೆ ಆಸ್ಪತ್ರೆಯ ವಿರುದ್ಧ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬೆಂಗಳೂರಿನ ಜಯನಗರದಲ್ಲಿರುವ ಕ್ಲೌಡ್ ನೈನ್ ಆಸ್ಪತ್ರೆಗೆ ಭೇಟಿ ನೀಡಿ, ಕಳೆದ ಮೂರು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿರುವ ಒಂದೂವರೆ ವರ್ಷದ ಮಗುವಿನ ಆರೋಗ್ಯ ಸ್ಥಿತಿಯನ್ನು ವಿಚಾರಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ನಾಗರಬಾವಿಯ ಕ್ಲೌಡ್ ನೈನ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮಗುವಿನ ಮಿದುಳಿಗೆ ಹಾನಿಯಾಗಿ ಕೋಮಾ ಸ್ಥಿತಿಗೆ ತಲುಪಿದೆ ಎಂಬ ಆರೋಪ ಕೇಳಿಬಂದಿದೆ. ಅನಸ್ತೇಶಿಯಾ ನೀಡಿದ ಬಳಿಕ ಮಗುವಿನ ಆರೋಗ್ಯದಲ್ಲಿ ಗಂಭೀರ ಸಮಸ್ಯೆ ಉಂಟಾಗಿದೆ. ಈ ಪ್ರಕರಣವನ್ನು ಮುಚ್ಚಿಹಾಕಲು ಆಸ್ಪತ್ರೆಯವರು ಪ್ರಯತ್ನಿಸುತ್ತಿದ್ದಾರೆ. ತಪ್ಪು ಮಾಡಿರುವ ಬಗ್ಗೆ ಯಾವುದೇ ಪಶ್ಚಾತ್ತಾಪವೂ ಅವರಲ್ಲಿ ಕಾಣುತ್ತಿಲ್ಲ ಎಂದು ಸಚಿವರು ಆರೋಪಿಸಿದರು.
“ನಾಳೆ ಸಂಜೆ 4 ಗಂಟೆಯವರೆಗೆ ಸಮಯ ನೀಡುತ್ತೇನೆ. ಅಷ್ಟರೊಳಗೆ ಆಸ್ಪತ್ರೆಯ ಆಡಳಿತ ಮಂಡಳಿ ನನ್ನನ್ನು ಮತ್ತು ಮಗುವಿನ ಪೋಷಕರನ್ನು ಭೇಟಿಯಾಗಬೇಕು. ಇಲ್ಲವಾದರೆ ಮುಂದೆ ಏನು ಮಾಡಬೇಕೋ ಅದನ್ನು ಮಾಡುತ್ತೇವೆ. ನನ್ನ ಸೌಮ್ಯ ಸ್ವಭಾವವನ್ನು ದೌರ್ಬಲ್ಯ ಎಂದು ಭಾವಿಸಿಕೊಳ್ಳುವುದು ಸರಿಯಲ್ಲ” ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.
ಆಸ್ಪತ್ರೆ ವಿರುದ್ಧ ಕಾನೂನು ಹೋರಾಟ
ಆಸ್ಪತ್ರೆಯ ವಿರುದ್ಧ ನ್ಯಾಯಾಲಯದಲ್ಲಿ ಕಾನೂನು ಹೋರಾಟ ನಡೆಸುವ ಸಂಬಂಧ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಲಾಗುತ್ತಿದೆ. ಈ ಬಗ್ಗೆ ಮುಂದಿನ ಕ್ರಮಗಳನ್ನು ತೀರ್ಮಾನಿಸಲಾಗುವುದು. ಮಗುವಿನ ಚಿಕಿತ್ಸೆಯಲ್ಲಿ ನಿರ್ಲಕ್ಷ್ಯ ತೋರಿರುವುದಷ್ಟೇ ಅಲ್ಲದೆ, ಮಗುವಿನ ತಂದೆ-ತಾಯಿಯನ್ನೂ ಆಸ್ಪತ್ರೆಯವರು ಸರಿಯಾಗಿ ನಡೆಸಿಕೊಂಡಿಲ್ಲ. ಹಣದ ಬಲದಿಂದ ಇಂತಹ ವರ್ತನೆ ತೋರುತ್ತಿದ್ದಾರೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ಮಗುವಿನ ಸ್ಥಿತಿ ಕಂಡು ವೈಯಕ್ತಿಕವಾಗಿ ನೋವಾಗಿದೆ
ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಗುವನ್ನು ವೀಕ್ಷಿಸಿದ ಸಚಿವರು, ಮಗು ಮೊದಲಿನಂತೆ ಆರೋಗ್ಯವಂತವಾಗಿ ಚೇತರಿಸಿಕೊಂಡು ಮನೆಗೆ ಮರಳಬೇಕು ಎಂಬುದು ತಮ್ಮ ಆಶಯವಾಗಿತ್ತು ಎಂದರು.
ಕಳೆದ ಮೂರು ತಿಂಗಳಿನಿಂದ ಮಗುವಿನ ಆರೋಗ್ಯ ಸ್ಥಿತಿಯನ್ನು ಗಮನಿಸುತ್ತಿದ್ದೇನೆ. ಮಗುವಿನ ಸ್ಥಿತಿ ಕಂಡು ವೈಯಕ್ತಿಕವಾಗಿ ಬಹಳ ನೋವಾಗಿದೆ. ಖಾಸಗಿ ಆಸ್ಪತ್ರೆಯವರು ಮಗುವಿನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಪೋಷಕರಿಗೂ ಅಗತ್ಯ ಸಹಕಾರ ನೀಡುತ್ತಿಲ್ಲ ಎಂದು ಆರೋಪಿಸಿದರು.
ಪ್ರಕರಣದ ಹಿನ್ನೆಲೆ
ನಾಗರಬಾವಿಯ ಕ್ಲೌಡ್ ನೈನ್ ಆಸ್ಪತ್ರೆಯಲ್ಲಿ ಕಿವಿಗೆ ಗಾಯವಾಗಿದ್ದ ಮಗುವನ್ನು ಚಿಕಿತ್ಸೆಗೆಂದು ಕರೆತರಲಾಗಿತ್ತು. ಈ ಸಂದರ್ಭದಲ್ಲಿ ಮಗುವಿಗೆ ಅನಸ್ತೇಶಿಯಾ ನೀಡಲಾಗಿದ್ದು, ಬಳಿಕ ಆರೋಗ್ಯದಲ್ಲಿ ಗಂಭೀರ ಸಮಸ್ಯೆ ಕಾಣಿಸಿಕೊಂಡಿದೆ ಎಂಬುದು ಪೋಷಕರ ಆರೋಪವಾಗಿದೆ. ನುರಿತ ವೈದ್ಯರಿಂದ ಚಿಕಿತ್ಸೆ ದೊರೆಯದ ಕಾರಣ ಮಗುವಿನ ಆರೋಗ್ಯ ಸ್ಥಿತಿ ಹದಗೆಟ್ಟಿದೆ ಎಂದು ಅವರು ದೂರಿದ್ದಾರೆ.
ನಾಗರಬಾವಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ದೊರೆಯದ ಹಿನ್ನೆಲೆಯಲ್ಲಿ ಮಗುವನ್ನು ಜಯನಗರದ ಕ್ಲೌಡ್ ನೈನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಸದ್ಯ ಮಗು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯದಲ್ಲಿ ನಿರೀಕ್ಷಿತ ಚೇತರಿಕೆ ಕಂಡುಬಂದಿಲ್ಲ. ಆಸ್ಪತ್ರೆಯ ಸಿಬ್ಬಂದಿಯಿಂದಲೂ ಸೂಕ್ತ ಸಹಕಾರ ದೊರೆಯುತ್ತಿಲ್ಲ ಎಂದು ಪೋಷಕರು ಆರೋಪಿಸಿದ್ದಾರೆ.


