ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತರಲು ಉದ್ದೇಶಿಸಿರುವ ಕ್ಷೇತ್ರ ಪುನರ್ವಿಂಗಡಣೆ (ಡಿಲಿಮಿಟೇಶನ್) ಮಸೂದೆ ಅವೈಜ್ಞಾನಿಕವಾಗಿದ್ದು, ಇದರಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ರಾಜಕೀಯ ಪ್ರಾತಿನಿಧ್ಯದಲ್ಲಿ ಅನ್ಯಾಯವಾಗುವ ಆತಂಕವಿದೆ ಎಂದು ಗೃಹ, ಐಟಿಬಿಟಿ, ಇ-ಆಡಳಿತ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚುನಾವಣೆಯಲ್ಲಿ ಸೋಲುವ ಭಯ ಕಾಡುತ್ತಿದೆ. ಹೀಗಾಗಿ ಕ್ಷೇತ್ರ ಪುನರ್ವಿಂಗಡಣೆಯ ಮೂಲಕ ರಾಜಕೀಯ ಲಾಭ ಪಡೆಯಲು ಮುಂದಾಗಿದ್ದಾರೆ. ಅಧಿಕಾರದಲ್ಲಿ ಮುಂದುವರಿಯುವ ಉದ್ದೇಶದಿಂದ ತಮಗೆ ಬೇಕಾದಂತೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.
ಪ್ರಸ್ತುತ ದೇಶದಲ್ಲಿ 543 ಲೋಕಸಭಾ ಸ್ಥಾನಗಳಿವೆ. ಶೇ.50ರಷ್ಟು ಸ್ಥಾನಗಳನ್ನು ಹೆಚ್ಚಿಸುವ ಪ್ರಸ್ತಾವ ಜಾರಿಯಾದರೆ ಸ್ಥಾನಗಳ ಸಂಖ್ಯೆ ಸುಮಾರು 850ಕ್ಕೆ ಏರಿಕೆಯಾಗಲಿದೆ. ಇದರಿಂದ ಜನರಿಗೆ ಆಗುವ ಪ್ರಯೋಜನವೇನು? ಈಗಿರುವ 543 ಸಂಸದರಿದ್ದಾಗಲೇ ಜನರ ಸಮಸ್ಯೆಗಳನ್ನು ಸಮರ್ಪಕವಾಗಿ ಆಲಿಸಲು ಸಾಧ್ಯವಾಗುತ್ತಿಲ್ಲ. ಸ್ಥಾನಗಳ ಸಂಖ್ಯೆಯನ್ನು 800 ಅಥವಾ 900ಕ್ಕೆ ಹೆಚ್ಚಿಸುವುದರಿಂದ ಏನು ಸಾಧನೆಯಾಗಲಿದೆ ಎಂದು ಪ್ರಶ್ನಿಸಿದರು.
ಉತ್ತರ ಭಾರತದ ರಾಜ್ಯಗಳಲ್ಲಿ ಈಗಾಗಲೇ ಲೋಕಸಭಾ ಸ್ಥಾನಗಳ ಸಂಖ್ಯೆ ಹೆಚ್ಚಿದೆ. ಜನಸಂಖ್ಯೆ ಆಧಾರದಲ್ಲಿ ಕ್ಷೇತ್ರಗಳ ಪುನರ್ವಿಂಗಡಣೆ ಮಾಡಿದರೆ ಜನಸಂಖ್ಯೆ ನಿಯಂತ್ರಣ, ಶಿಕ್ಷಣ, ಆರೋಗ್ಯ ಹಾಗೂ ಆರ್ಥಿಕ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿರುವ ದಕ್ಷಿಣ ಭಾರತದ ರಾಜ್ಯಗಳಿಗೆ ರಾಜಕೀಯವಾಗಿ ಹಿನ್ನಡೆಯಾಗಲಿದೆ. ಉತ್ತಮ ಅಭಿವೃದ್ಧಿ ಸಾಧಿಸಿರುವ ರಾಜ್ಯಗಳಿಗೆ ಕಡಿಮೆ ಪ್ರಾತಿನಿಧ್ಯ ಸಿಗುವಂತಾಗಬಾರದು ಎಂದರು.
ಮಸೂದೆಯ ಸಂಪೂರ್ಣ ವಿವರಗಳನ್ನು ಇನ್ನೂ ಪರಿಶೀಲಿಸಿಲ್ಲ. ಆದರೆ ಮೇಲ್ನೋಟಕ್ಕೆ ಹಲವು ಗಂಭೀರ ಆಕ್ಷೇಪಗಳಿವೆ. ಕ್ಷೇತ್ರಗಳ ಗಡಿ ನಿರ್ಧಾರದಲ್ಲಿ ಸರ್ಕಾರದ ಪ್ರಭಾವಕ್ಕೆ ಅವಕಾಶ ಇರಬಾರದು. ಭೌಗೋಳಿಕ ಸ್ಥಿತಿ, ಆಡಳಿತಾತ್ಮಕ ಅನುಕೂಲ ಹಾಗೂ ಸಾಮಾಜಿಕ ನ್ಯಾಯದ ಅಂಶಗಳನ್ನು ಪರಿಗಣಿಸಬೇಕು. ಡಿಲಿಮಿಟೇಶನ್ ಆಯೋಗದ ರಚನೆ, ಸದಸ್ಯರ ಅಧಿಕಾರ ಮತ್ತು ಮತದಾನದ ಹಕ್ಕುಗಳ ಕುರಿತು ಸ್ಪಷ್ಟತೆ ಇರಬೇಕು ಎಂದು ಒತ್ತಾಯಿಸಿದರು.
ಮುಖ್ಯ ಚುನಾವಣಾ ಆಯುಕ್ತರಿಗೆ ಆಯೋಗದಲ್ಲಿ ಮತದಾನದ ಹಕ್ಕು ನೀಡುವ ಪ್ರಸ್ತಾಪದ ಬಗ್ಗೆಯೂ ಪ್ರಶ್ನೆಗಳಿವೆ. ಚುನಾವಣಾ ಆಯೋಗದ ಮುಖ್ಯಸ್ಥರ ಆಯ್ಕೆ ಪ್ರಕ್ರಿಯೆಯಲ್ಲಿಯೇ ಬದಲಾವಣೆ ಮಾಡಿರುವ ಸಂದರ್ಭದಲ್ಲಿ, ಅದೇ ಸಂಸ್ಥೆಯ ಮುಖ್ಯಸ್ಥರಿಗೆ ಕ್ಷೇತ್ರ ಪುನರ್ವಿಂಗಡಣೆಯಲ್ಲಿ ನಿರ್ಣಾಯಕ ಪಾತ್ರ ನೀಡುವುದು ಎಷ್ಟು ಸೂಕ್ತ ಎಂದು ಪ್ರಶ್ನಿಸಿದರು.
2011ರ ಜನಗಣತಿ ಆಧಾರದಲ್ಲಿ ಕ್ಷೇತ್ರ ಪುನರ್ವಿಂಗಡಣೆ ಮಾಡಲು ಕೇಂದ್ರ ಸರ್ಕಾರ ಇಷ್ಟೊಂದು ಆತುರ ತೋರುತ್ತಿರುವುದೇಕೆ? ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಮಾನದಂಡಗಳೇನು ಎಂಬುದನ್ನು ಕೇಂದ್ರ ಸರ್ಕಾರ ಸ್ಪಷ್ಟಪಡಿಸಬೇಕು ಎಂದರು.
ಮತಗಳ ಅಳಿಸುವಿಕೆ ಪ್ರಕರಣದ ಬಗ್ಗೆ ರಾಜನಾಥ್ ಸಿಂಗ್ ಮಾತನಾಡಲಿ
ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಈಗಾಗಲೇ ಹಲವು ವಿವಾದಗಳು ಉಂಟಾಗಿವೆ. ಆಳಂದ ಮತ್ತು ಚಿತ್ತಾಪುರ ಕ್ಷೇತ್ರಗಳಲ್ಲಿ ಎಸ್ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ದೂರುಗಳು ದಾಖಲಾಗಿವೆ. ಆಳಂದದಲ್ಲಿ ನಡೆದ ಮತಗಳ ಅಳಿಸುವಿಕೆ ಪ್ರಕರಣದ ಕುರಿತು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾತನಾಡಬೇಕು. ಅರಾಜಕತೆ ಸೃಷ್ಟಿಸಿ ಅಧಿಕಾರಕ್ಕೆ ಬರುತ್ತಾರೆ ಎಂದು ಆರೋಪಿಸುವವರು, ತಮ್ಮದೇ ಶಾಸಕರ ವ್ಯಾಪ್ತಿಯಲ್ಲಿ ನಡೆದಿರುವ ವೋಟ್ ಚೋರಿ ಆರೋಪಗಳ ಬಗ್ಗೆ ಏಕೆ ಮೌನವಾಗಿದ್ದಾರೆ ಎಂದು ಪ್ರಶ್ನಿಸಿದರು.
ದಕ್ಷಿಣ ಭಾರತದ ರಾಜ್ಯಗಳ ಹಿತಾಸಕ್ತಿಗೆ ಧಕ್ಕೆಯಾಗುವ ಯಾವುದೇ ಕ್ರಮದ ವಿರುದ್ಧ ಎಲ್ಲ ರಾಜ್ಯಗಳು ಒಗ್ಗಟ್ಟಿನಿಂದ ಧ್ವನಿ ಎತ್ತಬೇಕು. ರಾಜ್ಯದ ಹಿತಾಸಕ್ತಿಯ ವಿಚಾರದಲ್ಲಿ ಪಕ್ಷಭೇದ ಮರೆತು ಒಂದಾಗುವ ಅಗತ್ಯವಿದೆ ಎಂದು ಹೇಳಿದರು.
ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಟಾಸ್ಕ್ಫೋರ್ಸ್
ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಮಾತನಾಡಿದ ಸಚಿವರು, ಸಮಸ್ಯೆ ಎದುರಿಸುತ್ತಿರುವ ಪ್ರದೇಶಗಳಿಗೆ ಸರ್ಕಾರ ಅಗತ್ಯ ಸಹಕಾರ ನೀಡುತ್ತಿದೆ. ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಟಾಸ್ಕ್ಫೋರ್ಸ್ ರಚಿಸಲಾಗಿದೆ. ಅಗತ್ಯವಿದ್ದಲ್ಲಿ ಹೆಚ್ಚಿನ ಅನುದಾನ ನೀಡಲು ಸರ್ಕಾರ ಸಿದ್ಧವಿದೆ. ಶಾಸಕರಿಗೆ ತಮ್ಮ ಕ್ಷೇತ್ರದ ಪರಿಸ್ಥಿತಿಗೆ ಅನುಗುಣವಾಗಿ ಕ್ರಮ ಕೈಗೊಳ್ಳಲು ಸ್ವಾತಂತ್ರ್ಯ ನೀಡಲಾಗಿದೆ ಎಂದರು.
ಕೆಲವು ಕಡೆ ಬೋರ್ವೆಲ್ ಕೊರೆದರೂ ನೀರು ಸಿಗುತ್ತಿಲ್ಲ. ತಮ್ಮ ಕ್ಷೇತ್ರದ ರಾಜವಾಳ ಗ್ರಾಮದಲ್ಲಿ ಕಳೆದ ಹತ್ತು ವರ್ಷಗಳಿಂದ ಪ್ರಯತ್ನ ನಡೆಸಿದರೂ ನೀರಿನ ಸಮಸ್ಯೆ ಬಗೆಹರಿದಿಲ್ಲ. ಮಂಗಳೂರು ಮತ್ತು ಉಡುಪಿಯಂತಹ ಪ್ರದೇಶಗಳಲ್ಲಿಯೂ ಹಣ ನೀಡಿದರೂ ನೀರು ಸಿಗದ ಪರಿಸ್ಥಿತಿ ಇದೆ. ಪ್ರಕೃತಿಯ ವಿರುದ್ಧ ಎಲ್ಲ ಸಂದರ್ಭಗಳಲ್ಲಿಯೂ ಏನೂ ಮಾಡಲು ಸಾಧ್ಯವಿಲ್ಲ. ಖಾಸಗಿ ಟ್ಯಾಂಕರ್ಗಳ ಮೂಲಕ ನೀರು ಪೂರೈಸುವ ವ್ಯವಸ್ಥೆಯ ಮೇಲೆಯೂ ನಿಯಂತ್ರಣ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಬಿಜೆಪಿ ಟೀಕೆಗಳಿಗೆ ತಿರುಗೇಟು
ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜಾರಿಯಾಗುವುದಿಲ್ಲ ಎಂದು ಆರಂಭದಲ್ಲಿ ಬಿಜೆಪಿ ನಾಯಕರು ಟೀಕಿಸಿದ್ದರು. ಆದರೆ ಸರ್ಕಾರ ಎಲ್ಲ ಐದು ಗ್ಯಾರಂಟಿ ಯೋಜನೆಗಳನ್ನೂ ಜಾರಿಗೊಳಿಸಿದೆ. ಎನ್ಡಿಎ ನಾಯಕರು ಸುಳ್ಳು ಹೇಳುವುದರಲ್ಲಿ ನಿಪುಣರು ಎಂದು ಟೀಕಿಸಿದ ಅವರು, ವಿದೇಶಕ್ಕೆ ತೆರಳಿರುವ ವಿಜಯ್ ಮಲ್ಯ ಮತ್ತು ನೀರವ್ ಮೋದಿ ಅವರನ್ನು ವಾಪಸ್ ಕರೆತರುವ ವಿಚಾರ ಹಾಗೂ ಬೆಲೆ ಏರಿಕೆ ಸೇರಿದಂತೆ ಹಲವು ಪ್ರಶ್ನೆಗಳಿಗೆ ಕೇಂದ್ರ ಸರ್ಕಾರ ಉತ್ತರ ನೀಡಬೇಕು ಎಂದರು.
ಬಿಜೆಪಿಯವರು ತಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದನ್ನು ಮೊದಲು ಸ್ಪಷ್ಟಪಡಿಸಲಿ. ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸ್ಥಾನದ ವಿಚಾರದಲ್ಲಿ ಒಪ್ಪಿಕೊಂಡಿರುವಂತೆ ಕಾಣುತ್ತಿದೆ ಎಂದು ವ್ಯಂಗ್ಯವಾಡಿದರು. ರಾಜ್ಯ ಸರ್ಕಾರದ ಆಡಳಿತದಲ್ಲಿ 24 ಗಂಟೆಯೂ ಕೆಲಸ ನಡೆಯುತ್ತಿದೆ ಎಂದು ಹೇಳಿದರು.
ಭೀಮಾ ನದಿ ನೀರು ಬಿಡುಗಡೆಗೆ ಕಾನೂನು ಹೋರಾಟ
ಬೆಳಗಾವಿ ಅಧಿವೇಶನದಲ್ಲಿ ಕೇವಲ ಟೀಕೆ-ಟಿಪ್ಪಣಿಗಳಿಗೆ ಸೀಮಿತವಾಗದೆ, ಜನರ ಸಮಸ್ಯೆಗಳ ಕುರಿತು ಅರ್ಥಪೂರ್ಣ ಚರ್ಚೆಗಳು ನಡೆಯಬೇಕು ಎಂದು ಆಶಯ ವ್ಯಕ್ತಪಡಿಸಿದರು.
ಭೀಮಾ ನದಿಗೆ ನೀರು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ಈ ಸಂಬಂಧ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲಾಗಿದ್ದು, ಮುಖ್ಯ ಕಾರ್ಯದರ್ಶಿಯೂ ಮಹಾರಾಷ್ಟ್ರದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ಮಹಾರಾಷ್ಟ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ರಾಜ್ಯದ ಹಿತಾಸಕ್ತಿ ಕಾಪಾಡಲು ಒಗ್ಗಟ್ಟಿನಿಂದ ಕಾನೂನು ಹೋರಾಟ ನಡೆಸಲಾಗುತ್ತಿದೆ ಎಂದರು.
ಮಹಾರಾಷ್ಟ್ರ ಸರ್ಕಾರ ಕೈಗೆತ್ತಿಕೊಳ್ಳುತ್ತಿರುವ ಸಾವಿರಾರು ಕೋಟಿ ರೂಪಾಯಿಗಳ ನೀರಾವರಿ ಯೋಜನೆಗಳು ಕರ್ನಾಟಕಕ್ಕೆ ಮಾರಕವಾಗುವ ಆತಂಕವಿದೆ. ಇಂತಹ ಯೋಜನೆಗಳನ್ನು ವಿರೋಧಿಸಿ ರಾಜ್ಯದ ಹಿತಾಸಕ್ತಿ ರಕ್ಷಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.


