ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ರಾಜ್ಯದ ವಿಶೇಷ ಸ್ಥಾನಮಾನವನ್ನು 2019ರಲ್ಲಿ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಏಕಪಕ್ಷೀಯ ನಿರ್ಧಾರವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.
ಜಮ್ಮು ಮತ್ತು ಕಾಶ್ಮೀರದಿಂದ ಸಂವಿಧಾನದ 370ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ 2019ರ ನಿರ್ಧಾರದ ವಿರುದ್ಧ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಸೋಮವಾರ ತೀರ್ಪು ನೀಡಿದೆ.
ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ಈ ತೀರ್ಪು ಪ್ರಕಟಿಸಿದ್ದು, ‘ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಲು ರಾಷ್ಟ್ರಪತಿಯವರು ಸಾಂವಿಧಾನಿಕ ಆದೇಶ ಹೊರಡಿಸುವ ಅಧಿಕಾರ ಹೊಂದಿದ್ದಾರೆ” ಎಂದು ಪೀಠ ತಿಳಿಸಿದೆ.
ಈ ಪೀಠದಲ್ಲಿ ಸಿಜೆಐ ಹೊರತಾಗಿ, ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯ ಕಾಂತ್ ಇದ್ದಾರೆ. ಸೆಪ್ಟೆಂಬರ್ ತಿಂಗಳಿನಲ್ಲಿ ಸತತ 16 ದಿನಗಳ ಕಾಲ ಸರ್ವಪಕ್ಷಗಳ ವಾದ ಆಲಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು.
ಸೆಪ್ಟೆಂಬರ್ 30, 2024 ರೊಳಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಅಸೆಂಬ್ಲಿ ಚುನಾವಣೆಗಳನ್ನು ನಡೆಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. “ಜಮ್ಮು ಮತ್ತು ಕಾಶ್ಮೀರ ಶಾಸಕಾಂಗ ಸಭೆಯಲ್ಲಿ ಸೆಪ್ಟೆಂಬರ್ 2024 ರೊಳಗೆ ಚುನಾವಣೆಗಳು ನಡೆಯುವಂತೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ರಾಜ್ಯತ್ವವನ್ನು ಮರುಸ್ಥಾಪಿಸಬೇಕು ಎಂದು ನಾವು ನಿರ್ದೇಶಿಸುತ್ತೇವೆ” ಎಂದು ಸಿಜೆಐ ಡಿ ವೈ ಚಂದ್ರಚೂಡ್ ಹೇಳಿದ್ದಾರೆ.
ಸಂವಿಧಾನದ 370ನೇ ವಿಧಿ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಕಲ್ಪಿಸಿದ್ದ ವಿಶೇಷ ಸ್ಥಾನಮಾನವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು, 2019ರ ಆಗಸ್ಟ್ 5ರಂದು ರದ್ದುಪಡಿಸಿತ್ತು. ಹಾಗೆಯೇ, ರಾಜ್ಯವನ್ನು ‘ಜಮ್ಮು ಮತ್ತು ಕಾಶ್ಮೀರ’ ಹಾಗೂ ‘ಲಡಾಖ್’ ಎಂದು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದೆ.