ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸೋಮವಾರದಿಂದ ಮೂರು ದಿನಗಳ ಕಾಲ ದೆಹಲಿ ಪ್ರವಾಸ ಬೆಳೆಸಿದ್ದಾರೆ.
ಮಂಗಳವಾರ (ಡಿ.19) ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಲಿದ್ದಾರೆ. ಅಂದು ಬೆಳಿಗ್ಗೆ 11.30ಕ್ಕೆ ಭೇಟಿಗೆ ಪ್ರಧಾನಿ ಸಚಿವಾಲಯದಿಂದ ಸಮಯ ನಿಗದಿಯಾಗಿದೆ. ಎರಡನೇ ಬಾರಿ ಮುಖ್ಯಮಂತ್ರಿಯಾದ ನಂತರ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗುತ್ತಿರುವ ಎರಡನೇ ಭೇಟಿ ಇದಾಗಿದೆ.
ರಾಜ್ಯದ ಬರ ಪರಿಸ್ಥಿತಿ, ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಪರಿಹಾರ ಬಿಡುಗಡೆ, ನರೇಗಾ ಯೋಜನೆಯಡಿ ಮಾನವ ದಿನಗಳನ್ನು ಹೆಚ್ಚಿಸಬೇಕೆಂಬ ಬೇಡಿಕೆಯೂ ಸೇರಿದಂತೆ ಅಭಿವೃದ್ಧಿ ವಿಚಾರಗಳ ಬಗ್ಗೆ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಜೊತೆ ಚರ್ಚಿಸಲಿದ್ದಾರೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ
ಡಿ.21ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆ ನಡೆಯಲಿದೆ. ಈ ಸಭೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ. ಈ ವೇಳೆ ಮುಂಬರುವ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಮತ್ತು ನಿಗಮ– ಮಂಡಳಿಯ ನೇಮಕದ ಪಟ್ಟಿ ಅಂತಿಮಗೊಳಿಸುವ ಕುರಿತು
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಲೋಕಸಭೆ ಚುನಾವಣೆಗೆ ಪಕ್ಷದ ಸಂಭವನೀಯ ಅಭ್ಯರ್ಥಿಗಳ ಆಯ್ಕೆಗೆ ರಚಿಸಿದ ಸಚಿವರ ನೇತೃತ್ವದ ತಂಡ ಕೆಲವು ಕ್ಷೇತ್ರಗಳ ಪಟ್ಟಿಯನ್ನು ನೀಡಿದೆ. ಇನ್ನೂ ಕೆಲವರು ಪಟ್ಟಿ ನೀಡಬೇಕಿದೆ. ಈ ಬಗ್ಗೆಯೂ ಚರ್ಚೆ ನಡೆಯಲಿದೆ.