ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಗುಡ್ಡದ ನೇರಳಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಶಂಕರಪ್ಪ ಅವರನ್ನು ಅಮಾನತು ಮಾಡಲಾಗಿದೆ.
ಮಕ್ಕಳು ಶೌಚ ಸ್ವಚ್ಛ ಮಾಡುತ್ತಿರುವ ವಿಡಿಯೊ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಪ್ರಕರಣದ ಹಿನ್ನೆಲೆಯಲ್ಲಿ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಶಂಕರಪ್ಪ ಅವರನ್ನು ಡಿಡಿಪಿಐ ಸಿ ಆರ್ ಪರಮೇಶ್ವರಪ್ಪ ಇಲಾಖೆ ವಿಚಾರಣೆ ಕಾಯ್ದಿರಿಸಿ ಗುರುವಾರ ಅಮಾನತುಗೊಳಿಸಿದ್ದಾರೆ.
ಮುಖ್ಯ ಶಿಕ್ಷಕ ಹುದ್ದೆಯ ಪ್ರಭಾರದಲ್ಲಿದ್ದ ಶಂಕರಪ್ಪ ಕಳೆದ 11 ವರ್ಷಗಳಿಂದ ಗುಡ್ಡದ ನೇರಳಕೆರೆ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು.
ಭದ್ರಾವತಿ ವಲಯ ಶಿಕ್ಷಣಾಧಿಕಾರಿ ನಾಗೇಂದ್ರಪ್ಪ ಗುಡ್ಡದ ನೇರಳಕೆರೆ ಶಾಲೆಗೆ ಭೇಟಿ ನೀಡಿ ಶಿಕ್ಷಕರು ಹಾಗೂ ಮಕ್ಕಳೊಂದಿಗೆ ಪ್ರತ್ಯೇಕವಾಗಿ ಚರ್ಚೆ ನಡೆಸಿ ಮಾಹಿತಿ ಸಂಗ್ರಹಿಸಿದ್ದರು. ಬಿಇಒ ನೀಡಿದ ವರದಿ ಆಧರಿಸಿ ಡಿಡಿಪಿಐ ಈ ಕ್ರಮ ಕೈಗೊಂಡಿದ್ದಾರೆ.
ಡಿಎಸ್ಎಸ್ ದೂರು
ವಿಡಿಯೊ ಹರಿದಾಡುತ್ತಿದ್ದಂತೆಯೇ ದಲಿತ ಸಂಘರ್ಷ ಸಮಿತಿ ವತಿಯಿಂದ ಶಿವಮೊಗ್ಗ ಉಪವಿಭಾಗಾಧಿಕಾರಿ ಸತ್ಯನಾರಾಯಣ ಅವರಿಗೆ ದೂರು ಸಲ್ಲಿಸಿದೆ. ದೂರನಲ್ಲಿ “ಶಾಲೆಯಲ್ಲಿ ಈ ರೀತಿ ಮಕ್ಕಳಿಂದ ಪದೇ ಪದೇ ಶೌಚಾಲಯ ಸ್ವಚ್ಛಗೊಳಿಸಲಾಗುತ್ತಿದೆ. ಸ್ವಚ್ಛಗೊಳಿಸಲು ನಿರಾಕರಿಸುವ ಮಕ್ಕಳ ಮೇಲೆ ದೌರ್ಜನ್ಯವೆಸಗಲಾಗುತ್ತಿದೆ. ಹೀಗಾಗಿ ಶಾಲೆಯ ಮುಖ್ಯ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಿ” ಎಂದು ಆಗ್ರಹಿಸಲಾಗಿತ್ತು.


