ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಮಹತ್ವದ ಸಭೆಯಲ್ಲಿ “ಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶ” ಸಂಘಟನಾ ಸಮಿತಿ ಸಭೆ ನಡೆಯಿತು.
ಸಂವಿಧಾನ ಜಾರಿಗೆ ಬಂದು 75 ವರ್ಷಾಚರಣೆಯ ಅಂಗವಾಗಿ “ಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶ”ವನ್ನು ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ (ISEC) ಮತ್ತು ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿ ಸಹಯೋಗದೊಂದಿಗೆ ಆಯೋಜಿಸಲು ತೀರ್ಮಾನಿಸಲಾಗಿದೆ.
“ಸಂವಿಧಾನದ ಮಹತ್ವ ಹಾಗೂ ಮೌಲ್ಯದ ಕುರಿತು ಅರಿವು ಮೂಡಿಸುವುದು ಹಾಗೂ ರಾಷ್ಟ್ರೀಯ ಏಕತೆಯನ್ನು ಎತ್ತಿಹಿಡಿಯುವ ಉದ್ದೇಶದಿಂದ ಈ ಸಮಾವೇಶವನ್ನು ಆಯೋಜಿಸಲಾಗುತ್ತಿದೆ” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು
ಸಮಾವೇಶಕ್ಕೆ ಪೂರ್ವಭಾವಿಯಾಗಿ ಜನವರಿ 26 ರಿಂದ “ಸಂವಿಧಾನ ಜಾಗೃತಿ ಜಾಥಾ” ಆಯೋಜಿಸಲಾಗುವುದು. ಈ ಜಾಥಾವು ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದ್ದು, ಸಂವಿಧಾನದ ಮಹತ್ವ, ರಾಷ್ಟ್ರೀಯ ಭಾವೈಕ್ಯತೆ ಕುರಿತಂತೆ ಅರಿವು ಮೂಡಿಸುವ ಕಿರುಚಿತ್ರಗಳು, ಸ್ತಬ್ಧಚಿತ್ರಗಳನ್ನು ಪ್ರದರ್ಶಿಸಲು ನಿರ್ಧರಿಸಲಾಯಿತು. ಈ ಕಾರ್ಯಕ್ರಮಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಆಯೋಜಿಸಲಾಗುತ್ತಿದೆ.
ಫೆಬ್ರವರಿ 24 ಹಾಗೂ 25 ರಂದು ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ವಿಚಾರ ಸಂಕಿರಣ ಹಾಗೂ KREIS ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳ ವಿಜ್ಞಾನ ವಸ್ತು ಪ್ರದರ್ಶನ ನಡೆಯಲಿದೆ.
ಸಮಾರೋಪ ಸಮಾರಂಭದಲ್ಲಿ ಒಂದು ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದ್ದು, ವಿವಿಧ ವಿಷಯಗಳ ಕುರಿತ ಪರಿಣತರ ಚರ್ಚೆಯನ್ನು ಆಧರಿಸಿ, ಸಮಾವೇಶದಲ್ಲಿ ಅತ್ಯುತ್ತಮ ಸಂಪನ್ಮೂಲ ವ್ಯಕ್ತಿಗಳು ಹಾಗೂ ಅತಿಥಿಗಳನ್ನು ಆಹ್ವಾನಿಸಿ, ಅತ್ಯುತ್ತಮ ಚರ್ಚಾಗೋಷ್ಠಿಗಳನ್ನು ಆಯೋಜಿಸುವಂತೆ ಸೂಚಿಸಲಾಯಿತು.