ಪಿಎಸ್ಐ ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಮ್ಮ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ಸಲ್ಲಿಸಿದರು.
ರಾಜ್ಯದಲ್ಲಿ ನಡೆದ 545 ಪಿಎಸ್ಐ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣ ಸಂಬಂಧ ತನಿಖೆಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಿತ್ತು.
ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿನ 93 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಕೆಲವು ಅಭ್ಯರ್ಥಿಗಳು ಹುದ್ದೆಗಳನ್ನು ಅಕ್ರಮವಾಗಿ ಗಿಟ್ಟಿಸಿಕೊಳ್ಳಲು ಹಣ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ಪರೀಕ್ಷಾ ಹಗರಣದಲ್ಲಿ ಹಣದ ಹೊಳೆಯೇ ಹರಿದಿರುವುದು ದೃಢವಾಗಿತ್ತು.
ಹಗರಣಕ್ಕೆ ಸಂಬಂಧಿಸಿದಂತೆ 110 ಜನರನ್ನು ಬಂಧಿಸಲಾಗಿತ್ತು. ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಭ್ರಷ್ಟಾಚಾರ ಪ್ರಕರಣದಲ್ಲಿ ಎಡಿಜಿಪಿ ಶ್ರೇಣಿಯ ಐಪಿಎಸ್ ಅಮೃತ್ ಪಾಲ್ರನ್ನು ಬಂಧಿಸಲಾಗಿತ್ತು.