ಇಂಡಿ ತಾಲ್ಲೂಕು ಲಚ್ಯಾಣ ಗ್ರಾಮದಲ್ಲಿ ಕೊಳವೆಬಾವಿಗೆ ಬಿದ್ದಿದ್ದ ಎರಡು ವರ್ಷದ ಮಗುವನ್ನು 20 ಗಂಟೆಗಳಿಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ರಕ್ಷಿಸಿದ ಎಲ್ಲರನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಅವರು ಶ್ಲಾಘಿಸಿದ್ದಾರೆ.
ಈ ಕುರಿತು ಸಿದ್ದರಾಮಯ್ಯ ಟ್ವೀಟ್ ಮಾಡಿ, “ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್ನ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ. ಮಗುವಿನ ರಕ್ಷಣೆಗಾಗಿ ಹಗಲಿರುಳೆನ್ನದೆ ಶ್ರಮಿಸಿದ ಸಿಬ್ಬಂದಿಗಳು ಮತ್ತು ಸಾರ್ವಜನಿಕರ ಕಾರ್ಯದಕ್ಷತೆ ಪ್ರಶಂಸನೀಯ” ಎಂದಿದ್ದಾರೆ.
“ಮಗುವಿನ ಕುಟುಂಬದವರ, ನಾಡಿನ ಕೋಟ್ಯಂತರ ಜನರ ಹರಕೆ – ಹಾರೈಕೆಗಳು ಫಲಿಸಿದೆ, ಸಾವನ್ನೇ ಗೆದ್ದು ಬಂದ ಪುಟ್ಟ ಕಂದಮ್ಮ ಮತ್ತೆ ಪೋಷಕರ ಮಡಿಲು ಸೇರಿದ್ದು ಕಂಡು ಖುಷಿಯಾಯಿತು. ನೀರು ಬಾರದ ಅಥವಾ ಬತ್ತಿದ ಕೊಳವೆ ಬಾವಿಗಳನ್ನು ಮುಚ್ಚದಿದ್ದರೆ ಯಾರದೋ ಅಮಾಯಕ ಜೀವ ಬಲಿಯಾಗುತ್ತದೆ, ಇಂತಹ ಘಟನೆಗಳು ಕಾಲಕಾಲಕ್ಕೆ ಪುನರಾವರ್ತನೆಯಾಗುತ್ತಿದ್ದರೂ ಜನ ಜಾಗೃತರಾಗದೆ ನಿರ್ಲಕ್ಷ್ಯ ತೋರುವುದು ಬೇಸರದ ಸಂಗತಿ. ಸಮಾಜ ಈ ಬಗ್ಗೆ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು” ಎಂದು ವಿನಂತಿಸಿದ್ದಾರೆ.
ಸಚಿವ ಎಂ ಬಿ ಪಾಟೀಲ್ ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿ, ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್, ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಕಾರ್ಯಾಚರಣೆಗೆ ಸಹಕರಿಸಿದ ಸ್ಥಳೀಯ ಜನರು ಹಾಗೂ ನೇತೃತ್ವ ವಹಿಸಿದ ಜಿಲ್ಲಾಡಳಿತದ ಬಗ್ಗೆಯೂ ಪಾಟೀಲ ಅವರು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಬೋರ್ವೆಲ್ ಗೆ ಜಾರಿದ್ದ ಮಗುವನ್ನು (ಸಾತ್ವಿಕ) ಜೀವಂತವಾಗಿ ರಕ್ಷಿಸಲು ಸಾಧ್ಯವಾಗಿರುವುದು ಅತ್ಯಂತ ಸಮಾಧಾನ ನೀಡಿದೆ ಎಂದಿದ್ದಾರೆ.
ಘಟನೆ ನಡೆದಿರುವ ಸುದ್ದಿ ಬುಧವಾರ ಸಂಜೆ ತಿಳಿಯುತ್ತಿದ್ದಂತೆಯೇ ತಕ್ಷಣ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲು ಸಚಿವರು ಜಿಲ್ಲಾಡಳಿತಕ್ಕೆ ಸೂಚನೆ ಕೊಟ್ಟಿದ್ದರು. ಗುರುವಾರ ಮಧ್ಯಾಹ್ನ ಕಾರ್ಯಾಚರಣೆ ಯಶಸ್ವಿಯಾಗಿ ಮುಗಿಯುವ ತನಕ ಜಿಲ್ಲಾಡಳಿತದೊಂದಿಗೆ ಪಾಟೀಲ ಅವರು ನಿರಂತರ ಸಂಪರ್ಕದಲ್ಲಿದ್ದರು.
ತೆರೆದ ಬೋರ್ ವೆಲ್: ಸರ್ವೆ ನಡೆಸಿ ಪ್ರಕರಣ ದಾಖಲಿಸಲು ಸೂಚನೆ
ಇದೆ ವೇಳೆ, ಸಚಿವ ಪಾಟೀಲ ಅವರು ಮುಚ್ಚದೆ ಹಾಗೆಯೇ ಬಿಟ್ಟಿರುವ ಕೊಳವೆಬಾವಿಗಳ ಬಗ್ಗೆ ಜಿಲ್ಲೆಯಾದ್ಯಂತ ಸರ್ವೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೊಳವೆಬಾವಿಗಳನ್ನು ಮುಚ್ಚದೆ ಬಿಟ್ಟರೆ ಕಠಿಣ ಕ್ರಮ ತೆಗೆದುಕೊಳ್ಳಲು ಈಗಾಗಲೇ ಕಾನೂನು ಇದೆ. ಜಿಲ್ಲೆಯಲ್ಲಿ ಸರ್ವೆ ನಡೆಸಿ, ಬೋರ್ವೆಲ್ ಗಳನ್ನು ಮುಚ್ಚದೆ ಬಿಟ್ಟಿದ್ದರೆ, ಸಂಬಂಧಪಟ್ಟವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಕಾನೂನಿನಲ್ಲಿ ಅವಕಾಶವಿರುವಂತೆ ಪ್ರಕರಣ ದಾಖಲಿಸಲು ಅವರು ನಿರ್ದೇಶನ ನೀಡಿದ್ದಾರೆ.