ಸಿಎಂ ಸಿದ್ದರಾಮಯ್ಯ ನವರೇ, ನಾನು ತಮ್ಮಂತೆ ಸ್ವಯಂ ಘೋಷಿತ ಆರ್ಥಿಕ ತಜ್ಞನಲ್ಲ. ಆದರೆ ತಮ್ಮಂತೆ ನನಗೊಬ್ಬನಿಗೇ ಎಲ್ಲವೂ ಗೊತ್ತು ಎಂಬ ಅಹಂಕಾರವೂ ಇಲ್ಲ. ಕೇಂದ್ರ ಸರ್ಕಾರ ಮಾಡಿರುವ ಸಾಲಕ್ಕೂ, ತಾವು ಮಾಡಿರುವ ಸಾಲಕ್ಕೂ ಅಜಗಜಾಂತರ ವ್ಯತ್ಯಾಸ ಇದೆ. ನಿಮಗೆ ಅರ್ಥವಾಗುವುದಿದ್ದರೆ ಓದಿಕೊಳ್ಳಿ” ಎಂದು ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ ಅವರ ಎಕ್ಸ್ ತಾಣದ ಪೋಸ್ಟ್‌ಗೆ ಮರಳಿ ಪ್ರತಿಕ್ರಿಯಿಸಿರುವ ಅವರು, “ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹೆಚ್ಚಿನ ಗಮನ ಹರಿಸಿದ್ದು, 2024ರ ಮಧ್ಯಂತರ ಬಜೆಟ್ನಲ್ಲಿ ಬಂಡವಾಳ ವೆಚ್ಚವನ್ನು ಸತತ ನಾಲ್ಕನೇ ವರ್ಷವೂ ಶೇ.11.1ರಷ್ಟು ಹೆಚ್ಚಿಸಿದೆ. ಇದರಿಂದ ಬಂಡವಾಳ ವೆಚ್ಚ 11.11 ಲಕ್ಷ ಕೋಟಿ ರೂ.ಗೆ ಏರಿಕೆಯಾಗಲಿದೆ. ಇದು ದೇಶದ ಜಿಡಿಪಿಯ ಶೇ. 3.4ರಷ್ಟು ಆಗಿದೆ. ಅದೇ ನಿಮ್ಮ ಕಾರ್ಯವೈಖರಿ ನೋಡಿ” ಎಂದಿದಾರೆ.
“2023-24 ರಲ್ಲಿ ತಾವು ಮಂಡಿಸಿದ ಬಜೆಟ್ ಗಾತ್ರ 3.27 ಲಕ್ಷ ಕೋಟಿ. ಅದರಲ್ಲಿ ಬಂಡವಾಳ ವೆಚ್ಚಕ್ಕೆ ತಾವು ಮೀಸಲಿಟ್ಟಿದ್ದು 54,000 ಕೋಟಿ. ಅದೇ 2024-2025ರ ಆರ್ಥಿಕ ಸಾಲಿಗೆ ತಾವು ಮಂಡಿಸಿರುವ ಕರ್ನಾಟಕದ ಬಜೆಟ್ ಗಾತ್ರ 3,71,383 ಕೋಟಿ. ಅಂದರೆ 2023-24 ರಲ್ಲಿ ತಾವು ಮಂಡಿಸಿದ 3.27 ಲಕ್ಷ ಕೋಟಿಗಿಂತ ದೊಡ್ಡದು” ಎಂದು ಹೇಳಿದ್ದಾರೆ.
“ಕಳೆದ ವರ್ಷಕ್ಕಿಂತ ಸುಮಾರು 25 ಸಾವಿರ ಕೋಟಿ ರೂ. ಹೆಚ್ಚಿನ ಸಾಲ ಕೂಡ ಮಾಡಿದ್ದೀರಿ. ಆದರೆ ಬಂಡವಾಳ ವೆಚ್ಚಕ್ಕೆ ತಾವು ಮೀಸಲಿಟ್ಟಿದ್ದು ಕೇವಲ 55,000 ಕೋಟಿ, ಅಂದರೆ ಕಳೆದ ವರ್ಷಕ್ಕಿಂತ ಹೆಚ್ಚಾದ ಮೊತ್ತ ಎಷ್ಟು? ಕೇವಲ 1,000 ಕೋಟಿ. ಅಂದರೆ ಬಂಡವಾಳ ವೆಚ್ಚ ಹೆಚ್ಚಳವಾಗಿದ್ದು ಕೇವಲ ಶೇ.1.85.” ಎಂದು ವಿವರಿಸಿದ್ದಾರೆ.
“ಬಜೆಟ್ ಗಾತ್ರ ಹೆಚ್ಚಾದರೂ, ಸಾಲ ಹೆಚ್ಚಾದರೂ, ಬಂಡವಾಳ ವೆಚ್ಚ ಮಾತ್ರ ಯಾಕೆ ಅದೇ ಪ್ರಮಾಣದಲ್ಲಿ ಹೆಚ್ಚಾಗುತ್ತಿಲ್ಲ ಸಿಎಂ ಸಿದ್ದರಾಮಯ್ಯ ನವರೇ? ಸಾಲದ ದುಡ್ಡೆಲ್ಲಾ ಎಲ್ಲಿ ಹೋಗುತ್ತಿದೆ? ಹೆಚ್ಚಾದ ಬಜೆಟ್ ಗಾತ್ರವೆಲ್ಲಾ ಎಲ್ಲಿ ಹೋಯ್ತು? ನಿಮ್ಮ ಬಳಿ ಇದಕ್ಕೆಲ್ಲಾ ಉತ್ತರ ಇದೆಯೇ” ಎಂದು ಪ್ರಶ್ನಿಸಿದ್ದಾರೆ.