ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನ ಗೆಲ್ಲುವ ಮೂಲಕ ರಾಜ್ಯದಲ್ಲಿ ಸರ್ಕಾರ ರಚಿಸಿರುವ ಕಾಂಗ್ರೆಸ್, ಈ ಬಾರಿಯ ಲೋಕಸಭಾ ಚುನಾವಣೆಯಲ್ಲೂ ರಾಜ್ಯದಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ರಣತಂತ್ರ ಹೆಣೆದಿದೆ.
ರಾಜ್ಯ ಕಾಂಗ್ರೆಸ್ ನಾಯಕರಿಗೆ 20 ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಕಾಂಗ್ರೆಸ್ ಹೈಕಮಾಂಡ್ ನೀಡಿದ್ದಾರೆ. ಪ್ರಧಾನಿ ಮೋದಿಯವರು ರಾಜ್ಯಕ್ಕೆ ಬಂದು ಹೋದ ಬೆನ್ನಲ್ಲೇ, ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ.
ರಾಹುಲ್ ಗಾಂಧಿ ಅವರು ಬುಧವಾರ ಮಂಡ್ಯ ಹಾಗೂ ಕೋಲಾರಕ್ಕೆ ಭೇಟಿ ನೀಡುತ್ತಿದ್ದಾರೆ. ಮಧ್ಯಾಹ್ನ 12.30ಕ್ಕೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಮಧ್ಯಾಹ್ನ ಮಂಡ್ಯಕ್ಕೆ ತೆರಳಿ ಚುನಾವಣಾ ಪ್ರಚಾರ ಮಾಡಲಿದ್ದಾರೆ. ನಂತರ ಕೋಲಾರಕ್ಕೆ ಹೋಗಿ, ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರ ವಿರುದ್ಧವಾಗಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಕಣದಲ್ಲಿದ್ದಾರೆ. ಈ ನಿಟ್ಟಿನಲ್ಲಿ ಮಂಡ್ಯ ಕ್ಷೇತ್ರ ಕಾಂಗ್ರೆಸ್‌ಗೆ ಸವಾಲಾಗಿದ್ದು, ಈ ಕಾರಣಕ್ಕಾಗಿ ರಾಹುಲ್ ಗಾಂಧಿ ಮಂಡ್ಯದಲ್ಲೇ ಅಬ್ಬರದ ಪ್ರಚಾರ ನಡೆಸಲಿದ್ದಾರೆ.