ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರ ಹತ್ಯೆ ಖಂಡನೀಯ. ಮೃತ ಯುವತಿಯ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, “ಘಟನೆ ಸಂಬಂಧ ಈಗಾಗಲೇ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಕಟ್ಟುನಿಟ್ಟಿನ ತನಿಖೆ ನಡೆಸಿ, ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮವಹಿಸಲು ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದೇನೆ” ಎಂದಿದ್ದಾರೆ.
“ಘಟನೆ ಸಂಬಂಧ ಯಾರೊಬ್ಬರೂ ಉದ್ವೇಗಕ್ಕೆ ಒಳಗಾಗಿ ಕಾನೂನನ್ನು ಕೈಗೆತ್ತಿಕೊಳ್ಳುವುದಾಗಲೀ ಅಥವಾ ಸಮಾಜದ ಶಾಂತಿ ಕದಡುವ ಪ್ರಯತ್ನಕ್ಕೆ ಮುಂದಾಗಬಾರದು. ಯುವತಿಯ ಸಾವಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಕರ್ತವ್ಯ, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಶಕ್ತಿಮೀರಿ ಶ್ರಮಿಸಲಿದೆ” ಎಂದು ಭರವಸೆ ನೀಡಿದ್ದಾರೆ.
ಎನ್ಕೌಂಟರ್ಗೆ ಆಗ್ರಹ
ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಪುತ್ರಿ ನೇಹಾ ಕೊಲೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರೀತಿಸಲು ನಿರಾಕರಿಸಿದಳು ಎಂಬ ಕಾರಣಕ್ಕಾಗಿ ಪಾಗಲ್ ಪ್ರೇಮಿ ಫಯಾಜ್, ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನೇಹಾಳನ್ನು ಚಾಕುವಿನಿಂದ ಬರೋಬ್ಬರಿ 10 ಬಾರಿ ಚುಚ್ಚಿ ಕೊಲೆ ಮಾಡಿದ್ದಾನೆ.
ಕೊಲೆಯಾದ ಒಂದೇ ಗಂಟೆಯಲ್ಲಿ ವಿದ್ಯಾನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಈ ಪ್ರಕರಣವನ್ನು ಖಂಡಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಅಲ್ಲದೇ ಈ ಪ್ರಕರಣ ಸಂಬಂಧ ಬಿಜೆಪಿ, ಟ್ವೀಟ್ ಮಾಡಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಆರೋಪಿಯನ್ನು ಗಲ್ಲಿಗೇರಿಸುವಂತೆ ಆಗ್ರಹ ಕೇಳಿಬರುತ್ತಿದೆ.