ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಇನ್ನು ಕೆಲವೇ ಹೊತ್ತಲ್ಲಿ ಅಧಿಕೃತವಾಗಿ ವಿಶೇಷ ತನಿಖಾ ತಂಡ ರಚನೆಯಾಗಲಿದೆ. ಹಿರಿಯ ಪೊಲೀಸ್ ಅಧಿಕಾರಿ ನೇತೃತ್ವದಲ್ಲಿ ಎಸ್‌ಐಟಿ ತನಿಖೆ ನಡೆಸುತ್ತೇವೆ” ಎಂದರು.
“ಮಹಿಳಾ ಆಯೋಗದಿಂದ ಬಂದಿರುವ ಪತ್ರದ ಹಿನ್ನೆಲೆಯಲ್ಲಿ ತನಿಖೆಗೆ ಸೂಚಿಸಿದ್ದೇವೆ. ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗಿರುವ ಬಗ್ಗೆ ಮಾಹಿತಿ ಇದೆ. ಸಂತ್ರಸ್ತ ಮಹಿಳೆಯರನ್ನು ಮಹಿಳಾ ಆಯೋಗ ಸಂಪರ್ಕಿಸುತ್ತಿದೆ. ಎಸ್‌ಐಟಿ ರಚನೆಯಾದ ಮೇಲೆ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ಕೊಟ್ಟು ತನಿಖೆ ಮಾಡುತ್ತೇವೆ” ಎಂದು ಹೇಳಿದರು.
“ಯಾವುದೇ ಸರ್ಕಾರದ ಹಸ್ತಾಕ್ಷೇಪ ಇಲ್ಲದೆ ಈ ಪ್ರಕರಣ ತನಿಖೆಯಾಗಲಿದೆ. ಪ್ರಜ್ವಲ್ ರೇವಣ್ಣಗೆ ನೋಟಿಸ್ ಕೊಡುವ ವಿಚಾರ ಎಸ್‌ಐಟಿ ಅಧಿಕಾರಿಗಳಿಗೆ ಬಿಟ್ಟದ್ದು” ಎಂದು ಹೇಳಿದರು.
ಸಿಎಂ ಶಿಫಾರಸ್ಸು
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಗುರುವಾರ ಪತ್ರ ಬರೆದಿದ್ದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ, ಹಾಸನ ಜಿಲ್ಲೆಯ ಪ್ರಭಾವಿ ರಾಜಕಾರಣಿಯೊಬ್ಬ ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಅದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿರುವ ಆರೋಪದ ಬಗ್ಗೆ ತನಿಖೆ ನಡೆಸಲು ಎಸ್‌ಐಟಿ ರಚಿಸುವಂತೆ ಶಿಫಾರಸು ಮಾಡಿದ್ದರು.
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ವಿಡಿಯೊ ತುಣುಕುಗಳನ್ನು ಗಮನಿಸಿದರೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಈ ಕಾರಣದಿಂದ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ. ಈ ಮಧ್ಯೆ ಪ್ರಜ್ವಲ್ ರೇವಣ್ಣ ಜರ್ಮನ್ ದೇಶಕ್ಕೆ ತೆರಳಿದ್ದಾರೆ ಎಂಬ ಮಾಹಿತಿ ಪೊಲೀಸರಿಂದ ಲಭ್ಯವಾಗಿದೆ.