ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದಲ್ಲಿ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಎಚ್ ಡಿ ರೇವಣ್ಣ ವಿರುದ್ಧ ಈಗ ಮತ್ತೊಂದು ಗಂಭೀರ ಪ್ರಕರಣ ದಾಖಲಾಗಿದೆ.
ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಎಚ್ ಡಿ ರೇವಣ್ಣ ಮೇಲೆ ಮಹಿಳೆಯ ಅಪಹರಣ ಪ್ರಕರಣ ದಾಖಲಾಗಿದೆ. ಮೈಸೂರಿನ ಕೆಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ತಸ್ತೆಯ ಪುತ್ರ ಎಚ್ ಡಿ ರೇವಣ್ಣ ವಿರುದ್ಧ ದೂರು ನೀಡಿದ್ದು, ಮೂರು ದಿನಗಳಿಂದ ತಮ್ಮ ತಾಯಿ ಅಪಹರಣವಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಆ ಮಹಿಳೆ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋದಲ್ಲಿ ಇದ್ದಾಳೆ ಎನ್ನಲಾಗಿದೆ.
ಸಂತ್ರಸ್ತೆಯ ಪುತ್ರನ ದೂರಿನ ಅನ್ವಯ ಎಫ್‌ಐಆರ್ ದಾಖಲಿಸಲಾಗಿದ್ದು, ಎಸ್‌ಐಟಿಗೆ ಪ್ರಕರಣವನ್ನು ಹಸ್ತಾಂತರಿಸಲಾಗಿದೆ ಎಂದು ತಿಳಿದುಬಂದಿದೆ. ಯುವಕ ತನ್ನ ದೂರಿನಲ್ಲಿ ಪ್ರಜ್ವಲ್ ರೇವಣ್ಣ ನನ್ನ ತಾಯಿಯ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ. ಇದರ ಫೋಟೋಗಳು ಬಹಿರಂಗ ಆಗಿದ್ದವು. ಅದಾದ ಬಳಿಕ ನನ್ನ ತಾಯಿ ನಾಪತ್ತೆಯಾಗಿದ್ದಾರೆ. ಶಾಸಕ ಎಚ್‌ಡಿ ರೇವಣ್ಣ, ಪತ್ನಿ ಭವಾನಿ ರೇವಣ್ಣ ನನ್ನ ತಾಯಿಯನ್ನು ಅಪಹರಣ ಮಾಡಿದ್ದಾರೆ ಎಂದು ಆರೋಪಿಸಿದ್ದಾನೆ.
ಈ ಹಿನ್ನೆಲೆ ಕೆಆರ್ ನಗರ ಪೊಲೀಸರು ಎಚ್ ಡಿ ರೇವಣ್ಣ ಹಾಗೂ ಸತೀಶ್ ಬಾಬಣ್ಣ ಎನ್ನುವವರ ಮೇಲೆ ಐಪಿಸಿ ಸೆಕ್ಷನ್ 364-ಎ, 365 ನಡಿ ಅಪಹರಣ ಪ್ರಕರಣವನ್ನು ದಾಖಲಿಸಿದ್ದಾರೆ. ಎಚ್ ಡಿ ರೇವಣ್ಣ ಆರೋಪಿ ನಂಬರ್ 1 ಆಗಿದ್ದರೆ, ಸತೀಶ್ ಬಾಬಣ್ಣ ಎನ್ನುವವರು ಆರೋಪಿ ನಂಬರ್ 2 ಆಗಿದ್ದಾರೆ.
ಇದಕ್ಕೂ ಪ್ರಜ್ವಲ್ ರೇವಣ್ಣ ಹಾಗೂ ಎಚ್‌ಡಿ ರೇವಣ್ಣ ವಿರುದ್ಧ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಮನೆ ಕೆಲಸದ ಮಹಿಳೆ ಹಾಗೂ ಆಕೆಯ ಮಗಳ ಮೇಲೆ ತಂದೆ – ಮಗ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರು ನೀಡಲಾಗಿತ್ತು. ಅದಾದ ಬಳಿಕ ಪ್ರಜ್ವಲ್ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 376ರ ಅಡಿ ಅತ್ಯಾಚಾರ ಪ್ರಕರಣವನ್ನು ದಾಖಲಿಸಲಾಗಿದೆ.
ಪ್ರಜ್ವಲ್ ರೇವಣ್ಣ ಮೇಲೆ ಸಿಐಡಿ ಸೈಬರ್ ಠಾಣೆಯಲ್ಲಿಯೂ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 376(2)N, 506 ,354a1, 354b, 354c ಹಾಗೂ ಐಟಿ ಕಾಯ್ದೆ ಅಡಿ ಎಫ್ಐಆರ್ ದಾಖಲಿಸಲಾಗಿದ್ದು, ಪ್ರಜ್ವಲ್ ರೇವಣ್ಣ ಬಂಧನ ಫಿಕ್ಸ್ ಎನ್ನಲಾಗುತ್ತಿದೆ.