Homeಕರ್ನಾಟಕಚಂದ್ರಶೇಖ‌ರ್ ಆತ್ಮಹತ್ಯೆ: ಸಚಿವ ಬಿ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು, ಎಸ್ಟಿ ಮೋರ್ಚಾ ಪ್ರತಿಭಟನೆ

ಚಂದ್ರಶೇಖ‌ರ್ ಆತ್ಮಹತ್ಯೆ: ಸಚಿವ ಬಿ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು, ಎಸ್ಟಿ ಮೋರ್ಚಾ ಪ್ರತಿಭಟನೆ

ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖ‌ರ್ ಪಿ (52) ಅವರ ಆತ್ಮಹತ್ಯೆ ಪ್ರಕರಣವನ್ನು ಅಸ್ತ್ರ ಮಾಡಿಕೊಂಡಿರುವ ಬಿಜೆಪಿ ರಾಜಕೀಯ ಲಾಭದ ಲೆಕ್ಕಚಾರದಲ್ಲಿ ತೊಡಗಿದಂತೆ ಕಾಣುತ್ತಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣವನ್ನು ಕಾಂಗ್ರೆಸ್‌ ಮುಂದಿಟ್ಟುಕೊಂಡು ಬಿಜೆಪಿ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿತ್ತು. ಪರಿಣಾಮ ಕೆ ಎಸ್‌ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿ ಬಂತು. ಈಗ ಬಿಜೆಪಿ ಚಂದ್ರಶೇಖ‌ರ್ ಆತ್ಮಹತ್ಯೆ ಪ್ರಕರಣವನ್ನು ಮುಂದಿಟ್ಟುಕೊಂಡು ಸಚಿವ ಬಿ ನಾಗೇಂದ್ರ ಅವರ ತಲೆದಂಡಕ್ಕೆ ಪಟ್ಟುಹಿಡಿದಿದೆ.

ಚಂದ್ರಶೇಖರ್‌ ಅವರು ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್ ಬಳಿಯಿರುವ ತಮ್ಮ ನಿವಾಸದಲ್ಲಿ ಭಾನುವಾರ ಸಂಜೆ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಗುರುವಾರ ಚಂದ್ರಶೇಖರ್ ಅವರ ಮನೆಗೆ ಭೇಟಿ ನೀಡಿ ಅವರ ಕುಟುಂಬದವರಿಗೆ ಧೈರ್ಯ ಸಾಂತ್ವನ ಹೇಳಿದ್ದಾರೆ.

“ಸುಮಾರು 187 ಕೋಟಿ ರೂಪಾಯಿ ಅವ್ಯವಹಾರದ ಹಿನ್ನೆಲೆಯಲ್ಲಿ ನೊಂದು ಆತ್ಮಹತ್ಯೆ ಮಾಡಿಕೊಂಡ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಕುಟುಂಬಕ್ಕೆ ಸಾಂತ್ವನ ಹೇಳಲು ಬಂದಿದ್ದೆ. ಮಕ್ಕಳ ಭವಿಷ್ಯವನ್ನು ದೃಷ್ಟಿಯಲ್ಲಿಟ್ಟು ಧೈರ್ಯದಿಂದ ಇರಿ” ಎಂದು ಹೇಳಿರುವೆ” ಎಂದು ಮಾಧ್ಯಮಗಳಿಗೆ ತಿಳಿಸಿದರು.

“ಲ್ಯಾಪ್ ಟಾಪ್ ಮತ್ತಿತರ ವಸ್ತುಗಳನ್ನು ಒಯ್ದ ಕುರಿತು ಕುಟುಂಬದವರು ಮಾಹಿತಿ ನೀಡಿದ್ದಾರೆ. ಮನೆಯಲ್ಲಿರುವ ಸಾಕ್ಷ್ಯವಸ್ತುಗಳನ್ನು ತೆಗೆದುಕೊಂಡು ಹೋಗಲು ಅಧಿಕಾರಿಗಳು ತರಾತುರಿಯಲ್ಲಿ ಬಂದಿದ್ದಾರೆ” ಎಂದು ವಿಜಯೇಂದ್ರ ಅವರು ಆಕ್ಷೇಪಿಸಿದರು.

ಈ ವೇಳೆ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ಜಿಲ್ಲಾಧ್ಯಕ್ಷ ಟಿ. ಡಿ. ಮೇಘರಾಜ್, ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಬಿ ಎಸ್‌ ಶೆಟ್ಟಿ, ಡಿ. ಎಸ್. ಅರುಣ್ ಉಪಸ್ಥಿತರಿದ್ದರು.

ಬಿಜೆಪಿ ಎಸ್ಟಿ ಮೋರ್ಚಾದಿಂದ ಸಿಎಂ ಮನೆಗೆ ಮುತ್ತಿಗೆ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ 187 ಕೋಟಿ ರೂ. ಅವ್ಯವಹಾರದ ಹಿನ್ನೆಲೆಯಲ್ಲಿ ಸಚಿವ ನಾಗೇಂದ್ರ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಎಸ್.ಟಿ ಮೋರ್ಚಾ ಕಾರ್ಯಕರ್ತರು ಗುರುವಾರ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು.

‘ಧಿಕ್ಕಾರ ಧಿಕ್ಕಾರ, ಸಚಿವರಿಗೆ ಧಿಕ್ಕಾರ’, ‘ಸರಕಾರಕ್ಕೆ ಧಿಕ್ಕಾರ’ ಎಂಬ ಘೋಷಣೆಗಳನ್ನು ಕೂಗಲಾಯಿತು. ಪೊಲೀಸರು ಈ ಸಂದರ್ಭದಲ್ಲಿ ಕಾರ್ಯಕರ್ತರನ್ನು ಬಂಧಿಸಿದರು. ಅಕ್ರಮವಾಗಿ ಅಮಾಯಕರಾದ ತಮ್ಮನ್ನು ಬಂಧಿಸಲಾಗುತ್ತಿದೆ ಎಂದು ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು.

‘ದಲಿತ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ’ ಕೂಗಿದ ಕಾರ್ಯಕರ್ತರು, ‘ಅಯ್ಯಯ್ಯೋ ಅನ್ಯಾಯ, ಅನ್ಯಾಯ’ ಎಂದು ಘೋಷಣೆ ಕೂಗಿದರು. ಸುಮಾರು 187 ಕೋಟಿ ರೂಪಾಯಿ ಅವ್ಯವಹಾರದ ಹಿನ್ನೆಲೆಯಲ್ಲಿ ನೊಂದು ಆತ್ಮಹತ್ಯೆ ಮಾಡಿಕೊಂಡ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಅವರು ಡೆತ್ ನೋಟಿನಲ್ಲಿ ಸಚಿವರ ಹೆಸರನ್ನು ಉಲ್ಲೇಖಿಸಿದ್ದು, ಸಚಿವರು ಕೂಡಲೇ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಲಾಯಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments