ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಇದ್ದ ಎ1 ಆರೋಪಿ ನಟಿ ಪವಿತ್ರಾ ಗೌಡ ಅವರು ಪರಪ್ಪನ ಅಗ್ರಹಾರದ ಜೈಲು ಪಾಲಾಗಿದ್ದಾರೆ.
ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಗುರುವಾರ (ಜೂನ್ 20) ಎಲ್ಲ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕೊಲೆ ಪ್ರಕರಣದಲ್ಲಿ 19 ಜನರನ್ನು ಪೊಲೀಸರು ಬಂಧಿಸಿದ್ದಾರೆ. ದರ್ಶನ್, ಪವಿತ್ರಾ ಗೌಡ, ಪವನ್, ವಿನಯ್, ಪ್ರದೋಶ್, ನಾಗರಾಜ್, ಲಕ್ಷ್ಮಣ್ ಮುಂತಾದವರು ಪ್ರಮುಖ ಆರೋಪಿಗಳು. ತನಿಖೆ ಇನ್ನೂ ಬಾಕಿ ಇರುವ ಕಾರಣದಿಂದ ದರ್ಶನ್, ವಿನಯ್, ಪ್ರದೋಶ್, ನಾಗರಾಜ್, ಲಕ್ಷ್ಮಣ್ ಹಾಗೂ ಧನರಾಜ್ನನ್ನು 4 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ ನೀಡುವಂತೆ ಕೋರ್ಟ್ಗೆ ಮನವಿ ಮಾಡಲಾಗಿದೆ.
ಪ್ರಕರಣ ಹಿನ್ನೆಲೆ
ಚಿತ್ರದುರ್ಗದ ರೇಣುಕಸ್ವಾಮಿ ಎಂಬ ವ್ಯಕ್ತಿಯು ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳಿಸಿದ್ದ ಎಂಬ ಆರೋಪಿ ಇದೆ. ಆದ್ದರಿಂದ ಆತನಿಗೆ ಬುದ್ಧಿ ಕಲಿಸಲು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದು ಹತ್ಯೆ ಮಾಡಿರುವ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿದೆ.
ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಈ ಕೇಸ್ನ ವಿಚಾರಣೆ ನಡೆಯುತ್ತಿದೆ. ಪೊಲೀಸರು ಈಗಾಗಲೇ ಸಾಕಷ್ಟು ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರೆ. ಅನೇಕ ಸ್ಥಳಗಳಿಗೆ ತೆರಳಿ ಮಹಜರು ಮಾಡಲಾಗಿದೆ. ಪವಿತ್ರಾ ಗೌಡ ಮನೆಯಲ್ಲೂ ಮಹಜರು ಮಾಡಲಾಗಿತ್ತು. ತನಿಖೆ ಇನ್ನೂ ಪ್ರಗತಿಯಲ್ಲಿದೆ.