ಚಿಕ್ಕಮಗಳೂರು ಜಿಲ್ಲೆಯಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಕುರಿತು ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿ ಸಕಲ ರೀತಿಯಲ್ಲಿ ಸನ್ನದ್ಧರಾಗುವಂತೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಹಾಗೂ ಇಂಧನ ಸಚಿವ ಕೆ ಜೆ ಜಾರ್ಜ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಚಿಕ್ಕಮಗಳೂರು ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಿದ ಸಚಿವರು, ಸದ್ಯದ ಪರಿಸ್ಥಿತಿಯನ್ನು ಅವಲೋಕಿಸಿ, ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಸಂತ್ರಸ್ತರಿಗೆ ತ್ವರಿತ ಪರಿಹಾರ ಒದಗಿಸುವ ಬಗ್ಗೆ ಸಲಹೆ ನೀಡಿದರು.
“ಜಿಲ್ಲೆಯ ಜನರ ಸುರಕ್ಷತೆಗೆ ಒತ್ತು ನೀಡುವಂತೆ ನಿರ್ದೇಶಿಸಿದ ಸಚಿವರು, ಪ್ರವಾಹದ ನಂತರದ ಪರಿಣಾಮಗಳನ್ನು ನಿರ್ವಹಿಸಲು ಪೂರ್ವಭಾವಿ ಕ್ರಮಗಳನ್ನು ಕೈಗೊಳ್ಳಬೇಕು. ಜತೆಗೆ ಪರಿಹಾರ ಕಾರ್ಯಾಚರಣೆಯನ್ನು ತ್ವರಿತಗತಿಯಲ್ಲಿ ನಡೆಸಬೇಕು,” ಎಂದರು.
ವಿಡಿಯೋ ಕಾನ್ಫರೆನ್ಸ್‌ನಲ್ಲಿ ಪಾಲ್ಗೊಂಡ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ ಸಿ.ಎನ್, ಸಿಇಓ ಎಸ್.ಪಿ. ವಿಕ್ರಮ್ ಆಮ್ಟೆ, ಪ್ರವಾಹದಿಂದ ಉಂಟಾಗಿರುವ ಹಾನಿಯ ಪ್ರಮಾಣ ಮತ್ತು ಪ್ರಸ್ತುತ ನಡೆಯುತ್ತಿರುವ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ಸ್ಥಿತಿಯನ್ನು ವಿವರಿಸಿದರು. ಜಿಲ್ಲಾಡಳಿತ, ಪರಿಹಾರ ತಂಡಗಳು ಮತ್ತು ಸ್ವಯಂಸೇವಕರ ಅವಿರತ ಪ್ರಯತ್ನಗಳಿಗೆ ಸಚಿವ ಕೆ.ಜೆ.ಜಾರ್ಜ್ ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಸಚಿವ ಜಾರ್ಜ್, ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು. “ಸರ್ಕಾರದ ಕಡೆಯಿಂದ ಎಲ್ಲ ರೀತಿಯ ಸಹಕಾರ ಒದಗಿಸಲಾಗುವುದು. ಅಧಿಕಾರಿಗಳು ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಬೇಕು”ಎಂದರು.