Homeಕರ್ನಾಟಕಬಿಎಸ್‌ವೈ ವಿರೋಧಿ ಬಣದಿಂದ ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆ, ಪ್ರತಾಪ್‌ ಸಿಂಹ ಹೇಳಿದ್ದೇನು?

ಬಿಎಸ್‌ವೈ ವಿರೋಧಿ ಬಣದಿಂದ ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆ, ಪ್ರತಾಪ್‌ ಸಿಂಹ ಹೇಳಿದ್ದೇನು?

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಗರಣವನ್ನು ಖಂಡಿಸಿ ಸೆ.‌17ರಿಂದ ಪಾದಯಾತ್ರೆಗೆ ನಿರ್ಧರಿಸಿದ್ದೇವೆ. ನಮ್ಮ ಪಾದಯಾತ್ರೆ ನಾಯಕತ್ವ ಪ್ರದರ್ಶನವಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ‌ ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ನಮ್ಮ ಪಾದಯಾತ್ರೆಗೆ ಹೈಕಮಾಂಡ್ ಅನುಮತಿ ಕೊಡುತ್ತದೆ. ವರಿಷ್ಠರ ಅನುಮತಿಯೊಂದಿಗೇ ನಾವು ನಡೆಸುತ್ತೇವೆ” ಎಂದರು.

“ಪಕ್ಷದ ನೇತಾರ, ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ನೇತೃತ್ವದಲ್ಲಿ ನಾವು ಬೆಳಗಾವಿಯಲ್ಲಿ ಈಚೆಗೆ ನಡೆಸಿದ್ದೇವೆ. ಅದು ಬಿಜೆಪಿ ಅತೃಪ್ತರ ಅಥವಾ ಬಂಡಾಯಗಾರರ ಸಭೆಯಲ್ಲ. ಸಭೆಯಲ್ಲಿ ಪಾದಯಾತ್ರೆ ನಡೆಸುವ ಬಗ್ಗೆ ಚರ್ಚಿಸಲಾಗಿದೆ” ಎಂದು ಹೇಳಿದರು.

“ಯತ್ನಾಳ್ ಅವರಂಥ ದೊಡ್ಡ ನಾಯಕ ಕರೆದ ಕಾರಣ ನಾನು ಸಭೆಗೆ ಹೋಗಿದ್ದೆ. ಮೈಸೂರು ಚಲೋ ಪಾದಯಾತ್ರೆಯ ಅನುಭವವನ್ನು ನಾನು ಅಲ್ಲಿ ಹಂಚಿಕೊಂಡೆ. ವಾಲ್ಮೀಕಿ ನಿಗಮದ ಹಗರಣದ ವಿರುದ್ಧ ಸರಿಯಾದ ಹೋರಾಟ ನಡೆದರೆ ಸಿದ್ದರಾಮಯ್ಯ ಕುರ್ಚಿ ಅಲುಗಾಡುತ್ತದೆ. ಈ ದಿಸೆಯಲ್ಲಿ ನಮ್ಮ ಹೋರಾಟ ಇರಲಿದೆ” ಎಂದರು.

ಯತ್ನಾಳ್ ಅಂಥವರಲ್ಲಿ ನಾನೂ ಒಬ್ಬ

“ಯಾರನ್ನೋ ಓಲೈಸಲು ಅಥವಾ ಮೆಚ್ಚಿಸಲು ರಾಜಕಾರಣ ಮಾಡುವುದಿಲ್ಲ. ಯಾರ ಮನೆಯ ಬಾಗಿಲನ್ನೂ ತಟ್ಟುವುದಿಲ್ಲ. ನನಗೆ ಟಿಕೆಟ್ ಕೊಟ್ಟಿದ್ದು ಬಿಜೆಪಿ ಅಲ್ಲ; ಆರ್‌ಎಸ್‌ಎಸ್‌ ನೀಡಿತ್ತು. ಕ್ಷೇತ್ರ, ಜಾತಿಯಿಂದಾಚೆ ಜನಪ್ರಿಯತೆಯುಳ್ಳ ಯತ್ನಾಳ್ ಅಂಥವರಲ್ಲಿ ನಾನೂ ಒಬ್ಬ” ಎಂದು ಹೇಳಿದರು.

“ಕೇಂದ್ರಕ್ಕೆ ಹೋಗಬೇಡಿ,‌ ರಾಜ್ಯದಲ್ಲೇ ಇರಿ ಎಂಬ ಸಂದೇಶ ವರಿಷ್ಠರಿಂದ ಸಿಕ್ಕಿದೆ. ಹೀಗಾಗಿ ಇಲ್ಲೇ ಇದ್ದೇನೆ. ನಾನು ಅನ್ಯಾಯದ ವಿರುದ್ಧ ಮಾತ್ರವೇ ರೆಬಲ್‌; ಪಕ್ಷದ ವಿರುದ್ಧವಲ್ಲ. ಬಿಜೆಪಿಯ ದೊಡ್ಡ ದೊಡ್ಡ ನಾಯಕರಿಗಿಂತಲೂ ನಾನು ಸೀನಿಯರ್. ಏಕೆಂದರೆ, ನನ್ನಪ್ಪ ಆರ್‌ಎಸ್ಎಸ್‌ನಲ್ಲಿದ್ದರು” ಎಂದು ಸಮರ್ಥಿಸಿಕೊಂಡರು.

“ಬಿ ಎಸ್ ಯಡಿಯೂರಪ್ಪ ಅಂಥವರು ನೇಪಥ್ಯಕ್ಕೆ ಸರಿಯುತ್ತಿರುವ ಕಾರಣ ಪಕ್ಷಕ್ಕೆ ನನ್ನಂತಹ ಯಂಗ್ ಬ್ಲಡ್ ಬರಬೇಕಿದೆ. ಹೀಗಾಗಿ ನನ್ನನ್ನು ರಾಜ್ಯದಲ್ಲೇ ಉಳಿಸಿದ್ದಾರೆ. ನಾನು ರಾಜ್ಯ ರಾಜಕಾರಣದಲ್ಲಿ ಸಕ್ರಿಯವಾಗಿ ಇರುವೆ. ನಮ್ಮ ಪಾದಯಾತ್ರೆಗೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಎಲ್ಲರನ್ನೂ ಆಹ್ವಾನಿಸುತ್ತಾರೆ ಎಂಬ ವಿಶ್ವಾಸವಿದೆ” ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments