Homeಕರ್ನಾಟಕಯಾರೇ ಆಕ್ಷೇಪ ಎತ್ತಿದರೂ ನೀರಿನ ದರ ಏರಿಕೆ ಅನಿವಾರ್ಯ: ಡಿಸಿಎಂ ಡಿ ಕೆ ಶಿವಕುಮಾರ್

ಯಾರೇ ಆಕ್ಷೇಪ ಎತ್ತಿದರೂ ನೀರಿನ ದರ ಏರಿಕೆ ಅನಿವಾರ್ಯ: ಡಿಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರಿನಲ್ಲಿ ಕಳೆದ 12-13 ವರ್ಷಗಳಿಂದ ನೀರಿನ ದರ ಹೆಚ್ಚಳ ಮಾಡಿಲ್ಲ. ಆದರೂ ಬಿಡಬ್ಲ್ಯೂಎಸ್ಎಸ್‌ಬಿ ಕಷ್ಟ ಪಟ್ಟು ನಿರ್ವಹಣೆ ಮಾಡುತ್ತಿದೆ. ಯಾರೇ ಆಕ್ಷೇಪ ವ್ಯಕ್ತಪಡಿಸಿದರೂ ನೀರಿನ ದರ ಏರಿಕೆ ಅನಿವಾರ್ಯ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ವಿಧಾನಸೌಧದ ಆವರಣದಲ್ಲಿ ಗುರುವಾರ ನಡೆದ “ಬಾಗಿಲಿಗೆ ಬರಲಿದೆ ಕಾವೇರಿ ಸಂಪರ್ಕ, 110 ಹಳ್ಳಿಗಳಿಗೆ ಕಾವೇರಿ ನೀರಿನ ಸಂಪರ್ಕ” ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

“ರಾಜಧಾನಿಯ 1.40 ಕೋಟಿ ಜನಸಂಖ್ಯೆಗೆ ನೀರನ್ನು ಒದಗಿಸಬೇಕು. ಇದಕ್ಕಾಗಿ ಸಾಲ ಮಾಡಿ, ಸಂಪರ್ಕ ಜಾಲವನ್ನು ಹೆಚ್ಚಿಸದ ಹೊರತು ನೀರು ಕೊಡಲು ಕಷ್ಟವಾಗುತ್ತದೆ. ದರ ಹೆಚ್ಚಳ ಮಾಡದಿದ್ದರೇ ನೀರು ಸರಬರಾಜು ಕಂಪನಿ ಉಳಿಯುವುದಿಲ್ಲ, ನೌಕರರು ಬದುಕಲು ಆಗುವುದಿಲ್ಲ. ಸಂಸ್ಥೆಗೆ ವಿದ್ಯುತ್ ಬಿಲ್ ಕಟ್ಟಲು ಆಗುತ್ತಿಲ್ಲ. ಎಲ್ಲರಿಗೂ ನೀರಿನ ದರ ಹೆಚ್ಚಳ ಮಾಡುವುದಿಲ್ಲ. ಎಷ್ಟು ಏರಿಕೆ ಮಾಡಬೇಕು ಎಂದು ಇನ್ನೂ ನಿರ್ಧರಿಸಿಲ್ಲ. ಚರ್ಚೆ ಮಾಡಲಿ. ಧರಣಿ ಮಾಡಲಿ ನಾನು ಇದಕ್ಕೆ ಬದ್ಧವಾಗಿದ್ದೇನೆ” ಎಂದರು.

ಇಲಾಖೆಗೆ ಪ್ರತ್ಯೇಕ ವಿದ್ಯುತ್ ತಯಾರಿಕಾ ಕಂಪನಿ

“14 ವರ್ಷಗಳಲ್ಲಿ ಸಾಕಷ್ಟು ಬಾರಿ ವಿದ್ಯುತ್ ಬಿಲ್ ಹೆಚ್ಚಳವಾಗಿದೆ. ಇದಕ್ಕಾಗಿ ಇಲಾಖೆಯದ್ದೇ ಪ್ರತ್ಯೇಕ ಕಂಪನಿ ಸ್ಥಾಪಿಸಿ ನೀವೇ ಸೋಲಾರ್ ಸೇರಿದಂತೆ ಇತರೇ ಮೂಲಗಳಿಂದ ವಿದ್ಯುತ್ ತಯಾರಿಸಿದರೆ ಹಣ ಉಳಿತಾಯವಾಗುತ್ತದೆ. ಬೆಂಗಳೂರಿಗೆ ಸಂಬಂಧಿಸಿದ ಎಲ್ಲ ಇಲಾಖೆಗಳು ಜಂಟಿಯಾಗಿ ಈ ಕಾರ್ಯಕ್ರಮ ರೂಪಿಸಬಹುದು. ದೂರಾಲೋಚನೆ ಇಟ್ಟುಕೊಂಡು ಈಗಾಗಲೇ ಕಂಪನಿ ಸಿದ್ಧಪಡಿಸಲಾಗಿದೆ. ಪಾವಗಡದಲ್ಲಿ ಸೋಲಾರ್ ಪಾರ್ಕ್ ಮಾಡಿದ ಕಾರಣಕ್ಕೆ ಮೂರುವರೆ ರೂಪಾಯಿಗೆ ವಿದ್ಯುತ್ ಸಿಗುತ್ತಿದೆ. ಆಗ ಹಲವರು ತಲೆಕೆಟ್ಟಿದೆಯಾ ಎಂದು ಆಡಿಕೊಂಡರು. ಇದರಿಂದ ಸರಬರಾಜು ಮಾಡುವ ಖರ್ಚು ಉಳಿತಾಯವಾಗಿದೆ” ಎಂದು ಹೇಳಿದರು.

ನಾನಿರುವ ತನಕ ಖಾಸಗೀಕರಣ ಆಗುವುದಿಲ್ಲ

“ಬಿಡಬ್ಲ್ಯೂಎಸ್ಎಸ್‌ಬಿ ನನ್ನ ಬಳಿಯೇ ಇರುವ ಕಾರಣ ಅನೇಕರು ನೂತನ ಯೋಜನೆ ಕುರಿತು ಚರ್ಚೆ ನಡೆಸಲು ಬಂದರು. ಈ ಹಿಂದೆ ಇಂಧನ ಇಲಾಖೆಯಲ್ಲಿ ಇದ್ದಾಗಲು ಇದೇ ಪ್ರಸ್ತಾವನೆ ಬಂದಿತ್ತು. ಮುಂಬೈ ಸೇರಿದಂತೆ ಇತರೆಡೆ ಅದಾನಿ ಹಾಗೂ ಇತರೇ ಕಂಪೆನಿಗಳು ವಿದ್ಯುತ್ ಸರಬರಾಜು ಮಾಡುತ್ತಿವೆ. ನಾನು ಇರುವ ತನಕ ಇದೆಲ್ಲವೂ ಸಾಧ್ಯವಿಲ್ಲ. ಈ ವಿಚಾರ ಇಲ್ಲಿಗೆ ಬಿಟ್ಟುಬಿಡಿ, ಇದರ ಸುದ್ದಿಗೆ ಬರಬೇಡಿ ಎಂದು ವಾಪಸ್ ಕಳುಹಿಸಿದೆ” ಎಂದರು.

ಮೇಕೆದಾಟು, ನ್ಯಾಯಾಲಯದಲ್ಲಿ ನ್ಯಾಯ ಸಿಗುವ ನಂಬಿಕೆ ಇದೆ

“ನಾನು ಅಧಿಕಾರವಹಿಸಿಕೊಂಡ ತಕ್ಷಣ 6 ಎಂಎಲ್ ಡಿ ನೀರು ಸರಬರಾಜನ್ನು ಹೆಚ್ಚಳ ಮಾಡಲಾಗಿದೆ. ತಮಿಳುನಾಡಿಗೆ ನಿಗದಿತ ನೀರಿಗಿಂತ 100 ಟಿಎಂಸಿ ಹೆಚ್ಚುವರಿ ಕಾವೇರಿ ನೀರನ್ನು ಹರಿಸಲಾಗಿದೆ. ನಮ್ಮಲ್ಲಿ ಹೆಚ್ಚುವರಿ ನೀರನ್ನು ಹಿಡಿದಿಟ್ಟುಕೊಳ್ಳಲು ಆಗುವುದಿಲ್ಲ. ನಮ್ಮಲ್ಲಿ ಮತ್ತೊಂದು ಅಣೆಕಟ್ಟು ಇದ್ದಿದ್ದರೆ ಅವರಿಗೆ ಹೆಚ್ಚು ಅನುಕೂಲವಾಗುತ್ತಿತ್ತು. ಮೇಕೆದಾಟು ಯೋಜನೆ ನ್ಯಾಯಲಯದಲ್ಲಿ ನಮಗೆ ನ್ಯಾಯ ಸಿಗುತ್ತದೆ ಎಂದು ನಂಬಿದ್ದೇನೆ”ಎಂದರು.

“ಕೆಆರ್‌ಎಸ್ ಯಿಂದಲೇ ನೇರವಾಗಿ ನಗರಕ್ಕೆ ನಿಗದಿಯಾದ ನೀರನ್ನು ತರಬಹುದು ಎಂದು ಒಂದಷ್ಟು ಜನ ವರದಿ ಕೊಟ್ಟಿದ್ದಾರೆ. ಶರಾವತಿಯಿಂದ ನೀರು ತರಬೇಕು ಎನ್ನುವ ಆಲೋಚನೆಯಿದೆ. ಅಲ್ಲಿನ ಸ್ಥಳೀಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಎತ್ತಿನಹೊಳೆ ಯೋಜನೆ ರಾಜಕಾರಣದಿಂದ ಅಲ್ಲಲ್ಲಿ ಬೇರೆ, ಬೇರೆ ಕಡೆ ತಿರುವು ಪಡೆದುಕೊಂಡಿದೆ. ಇದನ್ನೂ ಸಹ ಒಂದು ಹಂತಕ್ಕೆ ತಲುಪಿಸಿದ್ದೇನೆ. ಕಾವೇರಿ 5 ನೇ ಹಂತದ ಕಾಮಗಾರಿಗೆ ನಿಂತಿದ್ದು ಮತ್ತೆ ಚಾಲನೆ ಮಾಡಲಾಗುವುದು” ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments