ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.
ಬುಧವಾರ ವಿಚಾರಣೆ ನಡೆಸಿದ ನ್ಯಾಯಾಲಯ, ಹಗರಣ ಸಂಬಂಧ ಆರು ವಾರಗಳ ಒಳಗಾಗಿ ಸಿಆರ್ಪಿಸಿ ಸೆ.156(3) ಅಡಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ.
ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ನೀಡಿದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದು, ಮಂಗಳವಾರ ಈ ಬಗ್ಗೆ ತೀರ್ಪು ಪ್ರಕಟಿಸಿ ಸಿಎಂ ಸಿದ್ದರಾಮಯ್ಯ ಅವರ ಅರ್ಜಿಯನ್ನು ವಜಾಗೊಳಿಸಿತ್ತು.
ಹೈಕೋರ್ಟ್ ತೀರ್ಪು ಹಿಡಿದುಕೊಂಡು ದೂರುದಾರರಾದ ಮೈಸೂರಿನ ಸ್ನೇಹಮಯಿ ಕೃಷ್ಣ ಮತ್ತು ಟಿ ಜೆ ಅಬ್ರಾಹಂ ಅವರು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರದ ಬಗ್ಗೆ ತನಿಖೆಯ ಅಗತ್ಯವಿದೆ. ತನಿಖೆ ನಡೆಸಲು ಸೂಚಿಸಬೇಕು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವನ್ನು ಕೋರಿದ್ದರು.
ಇಂದು ವಿಚಾರಣೆ ಕೈಗೆತ್ತಿಕೊಂಡ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಾದ-ಪ್ರತಿವಾದ ಆಲಿಸಿ ಸಿಆರ್ಪಿಸಿ ಸೆ.156(3) ಅಡಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ.