Homeಕರ್ನಾಟಕಅ.2ರಂದು ರಾಜ್ಯಾದ್ಯಂತ ಗಾಂಧಿ ನಡಿಗೆ, ಸ್ವಚ್ಛತೆ ಪ್ರತಿಜ್ಞಾ ಸ್ವೀಕಾರ: ಡಿ ಕೆ ಶಿವಕುಮಾರ್

ಅ.2ರಂದು ರಾಜ್ಯಾದ್ಯಂತ ಗಾಂಧಿ ನಡಿಗೆ, ಸ್ವಚ್ಛತೆ ಪ್ರತಿಜ್ಞಾ ಸ್ವೀಕಾರ: ಡಿ ಕೆ ಶಿವಕುಮಾರ್

ಮಹಾತ್ಮ ಗಾಂಧೀಜಿ ಅವರು ಬೆಳಗಾವಿಯಲ್ಲಿ ಸ್ವಾತಂತ್ರ್ಯ ಸಂಗ್ರಾಮದ ನೇತೃತ್ವ ವಹಿಸಿಕೊಂಡು 100 ವರ್ಷವಾಗಿರುವ ಹಿನ್ನೆಲೆಯಲ್ಲಿ ಒಂದು ವರ್ಷಗಳ ಕಾಲ ವಿಭಿನ್ನ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಅಕ್ಟೋಬರ್ 2 ರಂದು ರಾಜ್ಯಾದ್ಯಂತ ‘ಗಾಂಧಿ ನಡಿಗೆ’ ಹಾಗೂ ‘ಸ್ವಚ್ಛತೆಯ ಪ್ರತಿಜ್ಞಾ ಸ್ವೀಕಾರ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ವಿಧಾನನಸೌಧದಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಶಿವಕುಮಾರ್ ಅವರು ಶನಿವಾರ ಈ ಮಾಹಿತಿ ನೀಡಿದರು.

“ಕಾರ್ಯಕ್ರಮದ ಮೊದಲ ಭಾಗವಾಗಿ ಅಕ್ಟೋಬರ್ 2 ರ ಗಾಂಧಿ ಜಯಂತಿಯಂದು 1 ಕಿ. ಮೀ. ‘ಗಾಂಧಿ ನಡಿಗೆ’ ಮತ್ತು ‘ಸ್ವಚ್ಛತಾ ಪ್ರತಿಜ್ಞಾ ಸ್ವೀಕಾರ’ ಅಭಿಯಾನ ಹಮ್ಮಿಕೊಳ್ಳಲಾಗಿದೆ. ರಾಜ್ಯಾದ್ಯಂತ ಜಿಲ್ಲಾ, ತಾಲೂಕು ಕೇಂದ್ರ ಹಾಗೂ ಪಾಲಿಕೆ ಮಟ್ಟದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ” ಎಂದರು.

“ಬೆಂಗಳೂರಿನಲ್ಲಿಯೂ ಬರುವ ಬುಧವಾರ ಬೆಳಗ್ಗೆ 9 ಗಂಟೆಗೆ ಗಾಂಧಿ ಭವನದಿಂದ ವಿಧಾನಸೌಧದ ಗಾಂಧಿ ಪ್ರತಿಮೆವರೆಗೂ ನಡಿಗೆ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು” ಎಂದು ತಿಳಿಸಿದರು.

500 ಶಾಲಾ ಮಕ್ಕಳಿಗೆ ಜೂಮ್ ಮೂಲಕ ಪ್ರತಿಜ್ಞಾ ವಿಧಿ

“ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಇಬ್ಬರ ಜನ್ಮದಿನವೂ ಒಂದೇ ದಿನ ಆಗಿರುವ ಕಾರಣ ಇಬ್ಬರ ಪ್ರತಿಮೆಗೂ ಮಾಲಾರ್ಪಣೆ ಮಾಡಲಾಗುವುದು. ನಂತರ ನಡಿಗೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಾಗೂ ಬೆಂಗಳೂರಿನ 500 ಶಾಲಾ, ಕಾಲೇಜು ಮಕ್ಕಳಿಗೆ ಜೂಮ್ ಮೂಲಕ ಪ್ರತಿಜ್ಞಾ ವಿಧಿ ಬೋಧನೆ ಮಾಡಲಾಗುವುದು. ಇದು ಸರ್ಕಾರದ ಕಾರ್ಯಕ್ರಮ, ಗಾಂಧಿ ಅವರ ಆದರ್ಶವನ್ನು ಯುವ ಪೀಳಿಗೆಗೆ ತಲುಪಿಸಲು ಈ ಕಾರ್ಯಕ್ರಮ ರೂಪಿಸಿದೆ” ಎಂದರು.

ಶ್ವೇತ ವಸ್ತ್ರ ಧರಿಸಿ ನಡಿಗೆ

“ಜಿಲ್ಲಾ ಕೇಂದ್ರದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ತಾಲೂಕು ಮಟ್ಟದಲ್ಲಿ ಸ್ಥಳೀಯ ಶಾಸಕರು ಭಾಗವಹಿಸಲಿದ್ದಾರೆ. ಈ ನಡಿಗೆ ವೇಳೆ ಬಿಳಿ ವಸ್ತ್ರ, ಗಾಂಧಿ ಟೋಪಿ ಧರಿಸಿ ಹೆಜ್ಜೆ ಹಾಕುವಂತೆ ಮನವಿ ಮಾಡಲಾಗುವುದು” ಎಂದು ತಿಳಿಸಿದರು.

“ಗಾಂಧಿ ಜಯಂತಿಯನ್ನು ವಿಶಿಷ್ಟವಾಗಿ ಆಚರಣೆ ಮಾಡುತ್ತಿದ್ದು, ಇಡೀ ವರ್ಷ ಗಾಂಧೀಜಿ ಅವರ ಆಚಾರ ವಿಚಾರವನ್ನು ಯುವ ಪೀಳಿಗೆಗೆ ತಿಳಿಸಲು ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತ್ಯೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದರು.

ಪ್ರತಿಜ್ಞಾ ವಿಧಿಗಾಗಿ ಆಪ್ ಮೂಲಕ ನೋಂದಣಿ

“ಇನ್ನು ರಾಜ್ಯದಲ್ಲಿ ಸಾರ್ವಜನಿಕರು ಪ್ರತಿಜ್ಞಾ ವಿಧಿ ತೆಗೆದುಕೊಳ್ಳಲು ಒಂದು ಆಪ್ ಸಿದ್ಧಪಡಿಸಲಾಗಿದ್ದು, ಈಗಾಗಲೇ 35 ಸಾವಿರ ಮಂದಿ ಈ ಆಪ್ ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಪ್ರತಿಜ್ಞಾ ವಿಧಿ ಪಡೆದವರಿಗೆ ಆನ್ ಲೈನ್ ನಲ್ಲೇ ಪ್ರಮಾಣಪತ್ರ ನೀಡಲಾಗುವುದು. ಇದು ಮೊದಲ ಹಂತದ ಕಾರ್ಯಕ್ರಮವಾಗಿದ್ದು, ಇಡೀ ವರ್ಷ ಬೇರೆ ಬೇರೆ ಕಾರ್ಯಕ್ರಮ ಮಾಡಲಾಗುವುದು. ನಂತರ ಪಕ್ಷದ ವತಿಯಿಂದ ನಡೆಯುವ ಕಾರ್ಯಕ್ರಮವನ್ನು ಮಧ್ಯಾಹ್ನ 12 ಗಂಟೆ ನಂತರ ಬೆಂಗಳೂರಿನ ಭಾರತ ಜೋಡೋ ಭವನದಲ್ಲಿ ಮಾಡಲಾಗುವುದು.” ಎಂದು ಮಾಹಿತಿ ನೀಡಿದರು.

ಬೆಂಗಳೂರಿನ ರಸ್ತೆಗಳು ಗುಂಡಿಮುಕ್ತವಾಗಿವೆಯೇ ಎಂದು ಕೇಳಿದಾಗ, “ಸಂಪೂರ್ಣವಾಗಿ ಗುಂಡಿ ಮುಚ್ಚಲಾಗಿದೆ ಎಂದು ನಾನು ಹೇಳುವುದಿಲ್ಲ. ನಾನು ಕೆಲವು ಭಾಗಗಳಲ್ಲಿ ರಸ್ತೆ ಗುಂಡಿ ನೋಡಿದ್ದೇನೆ. ಅಧಿಕಾರಿಗಳು ದಾಖಲೆ ಮಟ್ಟದಲ್ಲಿ ಕೆಲಸ ಮಾಡಿದ್ದಾರೆ. ನಾನು ಈ ಬಗ್ಗೆ ಈಗ ಏನು ಹೆಚ್ಚಿಗೆ ಹೇಳುವುದಿಲ್ಲ. ಮತ್ತೊಂದು ಸುತ್ತಿನ ಪರಿಶೀಲನೆ ಮಾಡಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಈ ವಿಚಾರವಾಗಿ ಮತ್ತೊಮ್ಮೆ ವಿವರವಾಗಿ ಮಾತನಾಡುತ್ತೇನೆ” ಎಂದು ತಿಳಿಸಿದರು.

ನಿರ್ಮಲಾ ಸೀತರಾಮನ್ ಅವರ ವಿರುದ್ಧ ಎಫ್ಐಆರ್ ದಾಖಲಿಸಿರುವ ಬಗ್ಗೆ ಕೇಳಿದಾಗ, “ಯಾರು ದೂರು ನೀಡಿದ್ದಾರೆ, ಯಾವ ಕಾರಣಕ್ಕೆ ನೀಡಿದ್ದಾರೆ ಎಂಬ ಮಾಹಿತಿ ನನಗೆ ಇಲ್ಲ. ಮಾಹಿತಿ ಪಡೆದು ನಂತರ ಪ್ರತಿಕ್ರಿಯಿಸುತ್ತೇನೆ” ಎಂದರು.

ಸಿಎಂ ವಿರುದ್ಧ ಎಫ್ಐಆರ್ ಪದೇ ಪದೇ ಚರ್ಚೆ ಬೇಡ

ಸಿದ್ದರಾಮಯ್ಯ ಅವರ ವಿರುದ್ಧ ಪ್ರಕರಣದ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಈಗಾಗಲೇ ಸಾಕಷ್ಟು ಮಾತನಾಡಿದ್ದೇನೆ. ನಮ್ಮ ಎಐಸಿಸಿ ಅಧ್ಯಕ್ಷರು ಈ ಬಗ್ಗೆ ಪಕ್ಷದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಪದೇ ಪದೆ ಈ ಬಗ್ಗೆ ಚರ್ಚೆ ಮಾಡಲು ಬಯಸುವುದಿಲ್ಲ” ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments